ADVERTISEMENT

ಕೋಲಾರ: ಬ್ಯಾಂಕ್ ರಕ್ಷಣೆ ಸಾರ್ವಜನಿಕರ ಜವಾಬ್ದಾರಿ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2017, 8:51 IST
Last Updated 22 ನವೆಂಬರ್ 2017, 8:51 IST

ಕೋಲಾರ: ರೈತರು ಸಕಾಲಕ್ಕೆ ಸಾಲ ಮರುಪಾವತಿ ಮಾಡದಿದ್ದರೆ ಬ್ಯಾಂಕ್‌ಗಳ ಅಭಿವೃದ್ಧಿ ಕುಂಠಿತವಾಗುತ್ತದೆ. ಇದರಿಂದ ರೈತರಿಗೆ ಸಾಲ ಸೌಲಭ್ಯ ಸಿಗದೆ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕುತ್ತಾರೆ ಎಂದು ಲೀಡ್ ಬ್ಯಾಂಕ್ ನಿವೃತ್ತ ವ್ಯವಸ್ಥಾಪಕ ಸುಂದರೇಶ್ ಹೇಳಿದರು.

ತಾಲ್ಲೂಕಿನ ಮದನಹಳ್ಳಿಯಲ್ಲಿ ಇತ್ತೀಚೆಗೆ ನಡೆದ ನಗದುರಹಿತ ವಹಿವಾಟು ಕುರಿತ ಗ್ರಾಹಕರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂಕಷ್ಟದ ಪರಿಸ್ಥಿತಿಯಲ್ಲಿ ಸಾಲ ನೀಡಿ ಸಮಸ್ಯೆ ಪರಿಹರಿಸುವ ಬ್ಯಾಂಕ್‌ಗಳನ್ನು ರಕ್ಷಿಸುವುದು ಸಾರ್ವಜನಿಕರ ಜವಾಬ್ದಾರಿ ಎಂದರು.

ಗ್ರಾಹಕರು ತಮ್ಮ ಬ್ಯಾಂಕ್‌ ಖಾತೆಗೆ ಕಡ್ಡಾಯವಾಗಿ ಆಧಾರ್‌ ಕಾರ್ಡ್‌ ಸಂಖ್ಯೆಯನ್ನು ಜೋಡಣೆ ಮಾಡಿಸಬೇಕು. ಇಲ್ಲದಿದ್ದರೆ ಸರ್ಕಾರದ ಸವಲತ್ತುಗಳಿಂದ ವಂಚಿತರಾಗಬೇಕಾಗುತ್ತದೆ. ಗ್ರಾಹಕರು ಮಧ್ಯವರ್ತಿಗಳನ್ನು ನಂಬಿ ಮೋಸ ಹೋಗದೆ ಬ್ಯಾಂಕ್‌ಗಳಲ್ಲಿ ನೇರವಾಗಿ ವ್ಯವಹಾರ ನಡೆಸಬೇಕು ಎಂದು ಸಲಹೆ ನೀಡಿದರು.

ADVERTISEMENT

ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯಲ್ಲಿ (ಪಿಎಂಎಸ್‌ಬಿವೈ) ಬ್ಯಾಂಕ್‌ಗೆ ₹ 12 ಕಟ್ಟಿದರೆ ₹ 2 ಲಕ್ಷದವರೆಗೆ ವಿಮೆ ಸೌಲಭ್ಯ ಸಿಗುತ್ತದೆ. ಪ್ರಧಾನಮಂತ್ರಿ ಜೀವನ್‌ಜ್ಯೋತಿ ಬಿಮಾ ಯೋಜನೆ, ಅಟಲ್ ವಿಮಾ ಯೋಜನೆ, ಮುದ್ರಾ ಯೋಜನೆಗಳ ಸದುಪಯೋಗ ಪಡೆಯಬೇಕು ಎಂದು ಕೆನರಾ ಬ್ಯಾಂಕ್‌ ಆರ್ಥಿಕ ಸಾಕ್ಷರತಾ ಕೇಂದ್ರದ ಹಿರಿಯ ವ್ಯವಸ್ಥಾಪಕ ಎಂ.ಚೆಂಗಪ್ಪ ಕಿವಿಮಾತು ಹೇಳಿದರು.

ತಾಲ್ಲೂಕು ಪಂಚಾಯಿತಿ ಸದಸ್ಯೆ ಪದ್ಮಾವತಮ್ಮ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಮ್ಮ, ಉಪಾಧ್ಯಕ್ಷ ಗೋಪಾಲರೆಡ್ಡಿ, ಜಿಲ್ಲಾ ರೇಷ್ಮೆ ಬೆಳೆಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರೇಗೌಡ, ಜಿಲ್ಲಾ ಲೀಡ್ ಬ್ಯಾಂಕ್ ಉಪ ವ್ಯವಸ್ಥಾಪಕ ಕೆ.ವಿ.ಲಕ್ಷ್ಮೀಶ್ವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.