ADVERTISEMENT

ಡಿ.ಸಿ ಕಚೇರಿ ಎದುರು ಧರಣಿ

​ಪ್ರಜಾವಾಣಿ ವಾರ್ತೆ
Published 27 ಜುಲೈ 2017, 8:44 IST
Last Updated 27 ಜುಲೈ 2017, 8:44 IST

ಕೋಲಾರ: ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಒಕ್ಕೂಟದ ಸದಸ್ಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಧರಣಿ ನಡೆಸಿದರು.

ಕಾರ್ಮಿಕರಿಗೆ ಮೂಲಸೌಕರ್ಯ ಕಲ್ಪಿಸುವ ಉದ್ದೇಶದಿಂದ ರಚಿಸಿರುವ  ಕಾರ್ಮಿಕರ ಕಲ್ಯಾಣ ಮಂಡಳಿ ನಿಷ್ಕ್ರಿಯ ವಾಗಿದೆ. ಮಂಡಳಿಯಿಂದ ಕಾರ್ಮಿಕರಿಗೆ ಯಾವುದೇ ಪ್ರಯೋಜನ ವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಸುಮಾರು 11.20 ಲಕ್ಷ ಕಾರ್ಮಿಕರು ನೊಂದಣಿ ಮಾಡಿಕೊಂಡಿದ್ದಾರೆ. ಕಾರ್ಮಿಕರ ನೋಂದಣಿ ಮತ್ತು ಸೆಸ್ ಮೂಲಕ ₹ 5,650 ಕೋಟಿ ಸಂಗ್ರಹವಾಗಿದೆ. ಆದರೆ, ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ₹ 117 ಕೋಟಿ ಮಾತ್ರ ವೆಚ್ಚ ಮಾಡಿದೆ.

ADVERTISEMENT

ಉಳಿದ ಹಣ ಏನಾಯಿತು ಎಂಬ ಬಗ್ಗೆ ಅಧಿಕಾರಿಗಳು ಮಾಹಿತಿ ಕೊಡುತ್ತಿಲ್ಲ. ಸರ್ಕಾರ ಸಹ ಈ ವಿಷಯದಲ್ಲಿ ಅಸಡ್ಡೆ ತೋರುತ್ತಿದೆ’ ಎಂದು ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ನಾರಾಯಣಸ್ವಾಮಿ ಆರೋಪಿಸಿದರು.

‘ಈ ಹಿಂದೆ ಮಂಡಳಿ ಪದಾಧಿಕಾರಿಗಳು ₹ 750 ಕೋಟಿಯನ್ನು ಅನಗತ್ಯವಾಗಿ ವೆಚ್ಚ ಮಾಡಲು ನಿರ್ಧರಿಸಿದ್ದರು. ಇದರ ವಿರುದ್ಧ ಹೋರಾಟ ಮಾಡಿದ್ದ ರಿಂದ ಪದಾಧಿಕಾರಿಗಳು ಆ ಹಣವನ್ನು ಕಾರ್ಮಿಕರ ಕಲ್ಯಾಣಕ್ಕೆ ಬಳಸಲು ಮುಂದಾಗಿದ್ದಾರೆ. ಸರ್ಕಾರದ ಯೋಜನೆ ಗಳು ದಲ್ಲಾಳಿಗಳ ಪಾಲಾಗುತ್ತಿವೆ. ಕಾರ್ಮಿಕರ ಹಿತ ಕಡೆಗಣಿಸಲಾಗಿದೆ’ ಎಂದು ದೂರಿದರು.

ಸಂಘದಲ್ಲಿ ಅವ್ಯವಹಾರ: ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದಲ್ಲಿ ಅವ್ಯವಹಾರ ನಡೆದಿದ್ದು, ಈ ಸಂಬಂಧ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ದೂರು ನೀಡ ಲಾಗಿದೆ. ಆದರೆ, ಕಾರ್ಮಿಕ ಇಲಾಖೆ ಸಹಾಯಕ ಆಯುಕ್ತ ಮತ್ತು ಜಿಲ್ಲಾ ಕಾರ್ಮಿಕ ಅಧಿಕಾರಿಯು ಸಂಘದ ಪದಾ ಧಿಕಾರಿಗಳೊಂದಿಗೆ ಶಾಮೀಲಾಗಿ ಅಕ್ರಮ ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ ಎಂದು   ಆರೋಪಿಸಿದರು.

ಮಂಡಳಿಯಲ್ಲಿ ನೋಂದಣಿಯಾಗಿ ರುವ ಕಾರ್ಮಿಕರಿಗೆ ಮೂಲಸೌಕರ್ಯ ಕಲ್ಪಿಸಬೇಕು. ಹೊಸ ನೋಂದಣಿಗೆ ಆನ್‌ ಲೈನ್ ವ್ಯವಸ್ಥೆ ಸರಿಪಡಿಸಬೇಕು. ಕಟ್ಟಡ ನಿರ್ಮಾಣಕ್ಕೆ ಎದುರಾಗಿರುವ ಮರಳು ಸಮಸ್ಯೆ ಪರಿಹರಿಸಬೇಕು. ವಸತಿಸಹಿತ ಭವಿಷ್ಯನಿಧಿ ಯೋಜನೆ ಜಾರಿಗೊಳಿಸ ಬೇಕು. ವಲಸೆ ಕಾರ್ಮಿಕರಿಗೂ ಗುರುತಿನ ಚೀಟಿ ನೀಡಬೇಕು.

ಕಲ್ಯಾಣ ಮಂಡಳಿ ಪುನರ್‌ರಚನೆಯಲ್ಲಿ ಆಗಿರುವ ಅನ್ಯಾಯ ಸರಿಪಡಿಸಿ ಸಿಐಟಿಯು, ಕಾರ್ಮಿಕ ಸಂಘಗಳಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿದರು. ಒಕ್ಕೂಟದ ರಾಜ್ಯ ಸಮಿತಿ ಸದಸ್ಯ ವಿಜಿಕೃಷ್ಣ, ಜಿಲ್ಲಾ ಘಟಕದ ಕಾರ್ಯದರ್ಶಿ ಎಂ.ಭೀಮರಾಜ್, ಖಜಾಂಚಿ ಎನ್.ಅಶೋಕ್,  ದೇವರಾಜ್, ಮುನಿ ರಾಜಮ್ಮ, ಎಸ್‌.ಆಶಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.