ADVERTISEMENT

ನೀರಿನ ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ: ಜಿಲ್ಲಾಧಿಕಾರಿ ಮಂಜುನಾಥ್‌

24 ತಾಸೂ ಸಮಸ್ಯೆಗೆ ಸ್ಪಂದನೆ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2018, 12:49 IST
Last Updated 29 ಸೆಪ್ಟೆಂಬರ್ 2018, 12:49 IST
ಜೆ.ಮಂಜುನಾಥ್‌
ಜೆ.ಮಂಜುನಾಥ್‌   

ಕೋಲಾರ: ‘ರಾಜ್ಯ ಸರ್ಕಾರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ ಆರಂಭಿಸಲಾಗುತ್ತದೆ’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದರು.

ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ನಿರೀಕ್ಷಿತ ಮಳೆಯಾಗದ ಕಾರಣ ಬಿತ್ತನೆ ಕುಂಠಿತವಾಗಿದೆ. ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಆತಂಕವಿದ್ದು, ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಸಹಾಯವಾಣಿ ಸಿಬ್ಬಂದಿ 24 ತಾಸೂ ಕಾರ್ಯ ನಿರ್ವಹಿಸಲಿದ್ದಾರೆ’ ಎಂದರು.

‘ಜಿಲ್ಲೆಯ ಯಾವುದೇ ಭಾಗದಲ್ಲಿ ನೀರಿನ ಸಮಸ್ಯೆಯಾದರೂ ಸ್ಥಳೀಯರು ಸಹಾಯವಾಣಿಗೆ ಕರೆ ಮಾಡಿ ತಿಳಿಸಿದರೆ ಶೀಘ್ರವೇ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು. ಸದ್ಯಕ್ಕೆ ಜಿಲ್ಲೆಯಲ್ಲಿ ಎಲ್ಲಿಯೂ ಟ್ಯಾಂಕರ್‌ ಮೂಲಕ ನೀರು ಪೂರೈಸುತ್ತಿಲ್ಲ. ಟ್ಯಾಂಕರ್‌ ನೀರು ಸರಬರಾಜಿಗೆ ಕೋಲಾರ ನಗರಸಭೆಯಿಂದ ಪ್ರಸ್ತಾವ ಬಂದಿದೆ. 2016–17ರಲ್ಲಿ ಬರಗಾಲವಿದ್ದ ಕಾರಣ ಟ್ಯಾಂಕರ್ ಮೂಲಕ ನೀರು ಪೂರೈಸಲಾಗಿತ್ತು’ ಎಂದು ವಿವರಿಸಿದರು.

ADVERTISEMENT

ತಡೆಯಾಜ್ಞೆ ತೆರವು: ‘ಕೆ.ಸಿ ವ್ಯಾಲಿ ಯೋಜನೆ ಮೂಲಕ ನೀರು ಹರಿಸಲು ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್‌ ತೆರವುಗೊಳಿಸಿದೆ. ಯೋಜನೆಯ ನೀರಿನ ಶುದ್ಧತೆ ಖಾತ್ರಿಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಸರ್ಕಾರ ಅಂಕಿ ಅಂಶ ಸಮೇತ ನ್ಯಾಯಾಲಯಕ್ಕೆ ವರದಿ ನೀಡಿದೆ. ಹೀಗಾಗಿ ತಡೆಯಾಜ್ಞೆ ತೆರವಾಗಿದ್ದು, ನಾಲ್ಕೈದು ದಿನಗಳಲ್ಲಿ ನೀರು ಪುನಃ ಜಿಲ್ಲೆಗೆ ಹರಿದು ಬರಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಯೋಜನೆ ಮೂಲಕ ಈಗಾಗಲೇ ಜಿಲ್ಲೆಯ 5 ಕೆರೆಗಳಿಗೆ ನೀರು ಬಂದಿದ್ದು, ಮುಂದಿನ ಕೆರೆಗಳಿಗೆ ನೀರು ಸರಾಗವಾಗಿ ಹರಿದು ಹೋಗಲು ಕಾಲುವೆಗಳನ್ನು ಸ್ವಚ್ಛಗೊಳಿಸಲಾಗುವುದು. ಖಾಸಗಿ ಕಂಪನಿಗಳ ಸಹಭಾಗಿತ್ವದಲ್ಲಿ ಕೆರೆಗಳಲ್ಲಿ ಹೂಳು ತೆಗೆಯಲಾಗುತ್ತದೆ’ ಎಂದು ಭರವಸೆ ನೀಡಿದರು.

ಬೆಳೆ ನಷ್ಟ: ‘ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಸುಮಾರು 30,800 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಬೆಳೆ ನಷ್ಟ ಸಂಬಂಧ 500 ಹಳ್ಳಿಗಳಲ್ಲಿ ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ಜಂಟಿ ಸಮೀಕ್ಷೆ ನಡೆಸಲಾಗುವುದು. ಶೇ 10ರಷ್ಟು ಹಳ್ಳಿಗಳಲ್ಲಿ ಆ್ಯಪ್‌ ಮೂಲಕ ಸಮೀಕ್ಷೆ ನಡೆಸಲು ಸಿಬ್ಬಂದಿಗೆ ತರಬೇತಿ ನೀಡಲಾಗಿದೆ’ ಎಂದು ವಿವರಿಸಿದರು.

‘ಶೇ 30 ಹಾಗೂ ಶೇ 50ಕ್ಕಿಂತ ಹೆಚ್ಚು ಬೆಳೆ ಹಾನಿಯಾಗಿರುವ ಬಗ್ಗೆ ಎರಡು ನಮೂನೆಯಲ್ಲಿ ಸಮೀಕ್ಷೆ ನಡೆಸಲಾಗುವುದು. ರೈತರು ಬೆಳೆ ವಿಮೆ ಮಾಡಿಸಿದ್ದರೆ ಪರಿಹಾರ ನೀಡುತ್ತೇವೆ. ವಿಮೆ ಇಲ್ಲದಿದ್ದರೆ ಇನ್ಪುಟ್‌ ಸಬ್ಸಿಡಿ ನೀಡಲಾಗುವುದು’ ಎಂದರು.

ಅಂಕಿ ಅಂಶ.....
* 30,800 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ
* 500 ಹಳ್ಳಿಗಳಲ್ಲಿ ಜಂಟಿ ಸಮೀಕ್ಷೆ
* ಶೇ 10ರಷ್ಟು ಹಳ್ಳಿಗಳಲ್ಲಿ ಆ್ಯಪ್‌ ಮೂಲಕ ಸಮೀಕ್ಷೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.