ADVERTISEMENT

ಫೆ.7ರಿಂದ ದಡಾರ– ರುಬೆಲ್ಲಾ ಲಸಿಕೆ ಅಭಿಯಾನ

9ತಿಂಗಳಿಂದ 15 ವರ್ಷದ ಮಕ್ಕಳಿಗೆ ಲಸಿಕೆ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2017, 6:11 IST
Last Updated 4 ಫೆಬ್ರುವರಿ 2017, 6:11 IST
ಕೋಲಾರ: ‘ಜಿಲ್ಲೆಯಲ್ಲಿ ಫೆ.7ರಿಂದ ಫೆ.28ರ ತನಕ ದಡಾರ ಮತ್ತು ರುಬೆಲ್ಲಾ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿಜಯ್‌ಕುಮಾರ್ ತಿಳಿಸಿದರು.
 
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 9ತಿಂಗಳಿಂದ 15 ವರ್ಷದೊಳಗಿನ ಮಕ್ಕಳಿಗೆ ಈ ಲಸಿಕೆ ಹಾಕಿಸಲು ಪೋಷಕರು ಮುಂದಾಗಬೇಕು. ಲಸಿಕೆಯಿಂದ ಮಕ್ಕಳ ಆರೋಗ್ಯದ ಮೇಲೆ ಯಾವುದೇ ದುಷ್ಪರಿಣಾಮ ಆಗುವುದಿಲ್ಲ. ಪೋಷಕರು ಅಪಪ್ರಚಾರಗಳಿಗೆ ಕಿವಿಗೊಡಬಾರದು ಎಂದರು.
 
ಮಹಿಳೆಯರಲ್ಲಿ ದಡಾರ ಮತ್ತು ರುಬೆಲ್ಲಾ ರೋಗ ಲಕ್ಷಣ ಕಾಣಿಸಿಕೊಂಡಾಗ ಹುಟ್ಟುವ ಮಗು ಅಂಗವೈಕಲ್ಯಕ್ಕೆ ಒಳಗಾಗುತ್ತದೆ. ಕಿವುಡುತನ, ಮಿದುಳು ಜ್ವರ, ಬುದ್ಧಿಮಾಂದ್ಯತೆ, ಹೃದಯ ಸಂಬಂಧಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಎಂದು ವಿವರಿಸಿದರು.
 
ಜಿಲ್ಲೆಯಲ್ಲಿ 9 ತಿಂಗಳಿಂದ 15 ವರ್ಷದೊಳಗಿನ ಮಕ್ಕಳ ಸಂಖ್ಯೆ 3,86,329 ಇದೆ. ಮೊದಲ ಹಂತದಲ್ಲಿ 1,474 ಶಾಲಾ ಮಕ್ಕಳಿಗೆ, ಎರಡನೇ ಹಂತದಲ್ಲಿ 1,045 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಇದೆ. ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಪತ್ತೆ ಹಚ್ಚಿ ಲಸಿಕೆ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಅಂಗನವಾಡಿ ಕೇಂದ್ರ ಮತ್ತು ಆಸ್ಪತ್ರೆಗಳಲ್ಲಿ ಲಸಿಕೆ ಹಾಕಲಾಗುತ್ತದೆ. 282 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ ಮತ್ತು 277 ತಂಡಗಳನ್ನು ರಚಿಸಲಾಗಿದೆ. ಒಟ್ಟು 2,526 ಪ್ರದೇಶಗಳಲ್ಲಿ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ ಎಂದರು.
 
ಒಟ್ಟಾರೆ ಅಭಿಯಾನಕ್ಕೆ 282 ಕಾರ್ಯಕರ್ತರನ್ನು ನಿಯೋಜಿಸಲಾಗಿದ್ದು, 2,742 ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ವಯಂ ಸೇವಕಿಯರು ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ. 108 ಮೇಲ್ವಿಚಾರಕರು ಅಭಿಯಾನದ ಮೇಲ್ವಿಚಾರಣೆ ನಡೆಸುವರು. ಜತೆಗೆ ನರ್ಸಿಂಗ್ ವಿದ್ಯಾರ್ಥಿಗಳ ಮತ್ತು ಸರ್ಕಾರೇತರ ಸಂಘ ಸಂಸ್ಥೆಗಳ ಸಹಕಾರ ಪಡೆಯಲಾಗುವುದು ಎಂದು ಹೇಳಿದರು.
 
ದಡಾರ ಮತ್ತು ರುಬೆಲ್ಲಾ ಲಸಿಕಾ ಚಾಲನಾ ಸಮಿತಿಗಳನ್ನು ರಚಿಸಿ ವಿವಿಧ ಇಲಾಖೆಗಳ ಮುಖ್ಯಸ್ಥರನ್ನು ಗುರುತಿಸಿ ಸೂಕ್ತ ನಿರ್ದೇಶನ ನೀಡಲಾಗಿದೆ. ಜಿಲ್ಲೆಗೆ ಅವಶ್ಯವಿರುವ ಲಸಿಕೆಯನ್ನು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಪೂರೈಸಲಾಗುವುದು. ಲಸಿಕೆ ಹಾಕಿಸಿದರೆ ಮಕ್ಕಳಿಗೆ ಜ್ವರ ಬರುತ್ತದೆ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಈ ಲಸಿಕೆಯು ಇತರೆ ಕಾಯಿಲೆಗಳಿಗೆ ಹಾಕುವ ಲಸಿಕೆಯಂತೆಯೇ ಇದೆ. ಪೋಷಕರು ಆತಂಕಗೊಳ್ಳದೆ ಮಕ್ಕಳ ಭವಿಷ್ಯಕ್ಕಾಗಿ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು.
 
ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಡಾ.ಚಂದನ್, ವೈದ್ಯ ಡಾ.ಸಂಪಂತ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.