ADVERTISEMENT

ರೈತರ ಕೃಷಿ ಸಾಲ ಮನ್ನಾಕ್ಕೆ ಒತ್ತಾಯ

ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2017, 8:54 IST
Last Updated 10 ಮಾರ್ಚ್ 2017, 8:54 IST
ಕೃಷಿ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಕೋಲಾರ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ಮಾಡಿದರು
ಕೃಷಿ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಕೋಲಾರ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ಮಾಡಿದರು   

ಕೋಲಾರ: ರೈತರ ಕೃಷಿ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ಮಾಡಿದರು.

ರಾಜ್ಯದೆಲ್ಲೆಡೆ ಬರ ಪರಿಸ್ಥಿತಿ ಇದೆ. ಅನಾವೃಷ್ಟಿಯಿಂದ ಕೋಟ್ಯಂತರ ರೂಪಾಯಿ ಮೊತ್ತದ ಬೆಳೆ ನಷ್ಟವಾಗಿ ರೈತರು ಬೀದಿಗೆ ಬಂದಿದ್ದಾರೆ. ಆದರೆ, ಸರ್ಕಾರ ಅವರ ಸಾಲ ಮನ್ನಾ ಮಾಡಲು ಮೀನಮೇಷ ಎಣಿಸುತ್ತಿದೆ. ಸರ್ಕಾರಕ್ಕೆ ರೈತರ ಬಗ್ಗೆ ಸ್ವಲ್ಪವೂ ಕಾಳಜಿ ಇಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ರೈತರು ಸಾಲು ಸಾಲಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಆತ್ಮಹತ್ಯೆ ತಡೆಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಮತ್ತೊಂದೆಡೆ ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುವಲ್ಲೂ ಸರ್ಕಾರ ಸಂಪೂರ್ಣ ವಿಫಲವಾಗಿದೆ‘ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಪಿ.ವೆಂಕಟಮುನಿಯಪ್ಪ ದೂರಿದರು.

ಬರ ಪರಿಸ್ಥಿತಿಯಿಂದಾಗಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಸಿಗುವುದು ಕಷ್ಟವಾಗಿದೆ. ಇದರಿಂದ ರೈತರು ಜಾನುವಾರುಗಳನ್ನು ಕಸಾಯಿಖಾನೆಗಳಿಗೆ ಮಾರುತ್ತಿದ್ದಾರೆ. ಹಲವೆಡೆ ಜಾನುವಾರುಗಳು ಮೃತಪಟ್ಟಿವೆ.

ಜನರು ಹಣ ಕೊಟ್ಟು ನೀರು ಖರೀದಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳೆ ಕಳೆದುಕೊಂಡಿರುವ ರೈತರಿಗೆ ಜೀವನ ನಿರ್ವಹಣೆ ಮಾಡಲು ಕಷ್ಟವಾಗಿದೆ. ಆದರೆ, ಸರ್ಕಾರ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಹೇಳಿದರು.

ಕೇಂದ್ರ ಸರ್ಕಾರ ಬರ ಪರಿಹಾರಕ್ಕಾಗಿ ಮಂಜೂರು ಮಾಡಿರುವ ₹ 1,782 ಕೋಟಿ ಅನುದಾನವನ್ನು ತರುವಲ್ಲೂ ರಾಜ್ಯ ಸರ್ಕಾರ ನಿರುತ್ಸಾಹ ತೋರುತ್ತಿದೆ. ಮೊದಲ ಕಂತಾಗಿ ₹ 450 ಕೋಟಿ ನೀಡಿ ತಿಂಗಳೂ ಕಳೆದರೂ ಈವರೆಗೆ ₹ 200 ಕೋಟಿ ಮಾತ್ರ ಖರ್ಚು ಮಾಡಿರುವುದು ಸರ್ಕಾರದ ನಿರ್ಲಕ್ಷ್ಯದ ಪರಮಾವಧಿ ಎಂದು ಕಿಡಿಕಾರಿದರು.

ರೈತರ ಸಾಲ ಮನ್ನಾ ಮಾಡುವಂತೆ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ. ರೈತರು ಸಹ ಸಾಲ ಮನ್ನಾದ ನಿರೀಕ್ಷೆಯಲ್ಲಿದ್ದಾರೆ. ಆದರೆ, ಸರ್ಕಾರ ಮಾತ್ರ ಸಾಲ ಮನ್ನಾ ಮಾಡಲು ಹಿಂದೇಟು ಹಾಕುತ್ತಿದೆ. ಮಳೆ ಇಲ್ಲದೆ ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿದ್ದು ರೈತರು ಕೆಲಸಕ್ಕಾಗಿ ಪಟ್ಟಣ ಪ್ರದೇಶಗಳಿಗೆ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ನಿದ್ರಾವಸ್ಥೆಯಲ್ಲಿರುವ ಸರ್ಕಾರ ರೈತರ ಹಿತರಕ್ಷಣೆಗೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪ್ರಸಕ್ತ ವರ್ಷ ಸುಮಾರು 1,500 ಆತ್ಮಹತ್ಯೆ ಮಾಡಿಕೊಂಡಿದ್ದರೂ ಸರ್ಕಾರ ಕುಂಭಕರ್ಣಾವಸ್ಥೆಯಲ್ಲಿದೆ. ಜಿಲ್ಲಾ ಉಸ್ತುವಾರಿ ಸಚಿವರು ಬರಪೀಡಿತ ಪ್ರದೇಶಗಳಿಗೆ ಪ್ರವಾಸ ಕೈಗೊಂಡು ರೈತರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿಲ್ಲ. ಅಧಿಕಾರಿಗಳು ಸಹ ರೈತರನ್ನು ನಿರ್ಲಕ್ಷಿಸಿದ್ದಾರೆ. ರೈತರ ಪಾಲಿಗೆ ಈ ಸರ್ಕಾರ ಬದುಕಿದ್ದು ಸತ್ತಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಸಂಕಷ್ಟದಲ್ಲಿರುವ ರೈತರಿಗೆ ಆತ್ಮವಿಶ್ವಾಸ ತುಂಬಲು ಉಸ್ತುವಾರಿ ಸಚಿವರು ಬರ ಪರಿಹಾರ ಕಾರ್ಯಗಳಿಗೆ ಚಾಲನೆ ನೀಡಬೇಕು. ಜಾನುವಾರುಗಳಿಗೆ ಮೇವು ಒದಗಿಸಲು ಜಿಲ್ಲಾಡಳಿತವು ಪ್ರತಿ ಹೋಬಳಿಗೊಂದು ಗೋಶಾಲೆ, ಮೇವು ಬ್ಯಾಂಕ್‌ ಸ್ಥಾಪಿಸಬೇಕು. ಗುಳೆ ಹೋಗುವ ಅನಿವಾರ್ಯತೆ ಎದುರಿಸುತ್ತಿರುವ ರೈತಾಪಿ ಕುಟುಂಬ ಮತ್ತು ಕೂಲಿ ಕಾರ್ಮಿಕರಿಗೆ ಉದ್ಯೋಗದ ಭರವಸೆ ನೀಡಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಯುವ ಮೋರ್ಚಾ ರಾಜ್ಯ ಘಟಕದ ಕಾರ್ಯದರ್ಶಿ ಓಂಶಕ್ತಿ ಚಲಪತಿ, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಮಮತಾ, ನರಸಿಂಹರಾಜು, ನಾಗಪ್ರಕಾಶ್‌, ಕಾರ್ಯದರ್ಶಿ ವಿಜಯ್‌ಕುಮಾರ್‌, ಪ್ರಧಾನ ಕಾರ್ಯದರ್ಶಿಗಳಾದ ರಾಮಚಂದ್ರ, ವೆಂಕಟೇಶ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT