ADVERTISEMENT

ವಾಸವಿರುವವನೇ ಮನೆ ಒಡೆಯ

ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಕೆ.ಶಿವಮೂರ್ತಿ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2017, 4:56 IST
Last Updated 15 ಏಪ್ರಿಲ್ 2017, 4:56 IST

ಕೋಲಾರ: ‘ವಾಸವಿರುವವನೇ ಮನೆಯ ಒಡೆಯ ಎಂಬ ಕಾಯ್ದೆಯನ್ನು ಸರ್ಕಾರ ಜಾರಿಗೆ ತಂದಿದ್ದು, ಅಧಿಕಾರಿಗಳು ಸಮರ್ಪಕವಾಗಿ ಕಾರ್ಯಗತಗೊಳಿಸಲು ಶ್ರಮಿಸಬೇಕು’ ಎಂದು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಕೆ.ಶಿವಮೂರ್ತಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಸಂಜೆ ನಡೆದ ವಿವಿಧ ಇಲಾಖಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಈ ಹಿಂದೆ ಭೂ ಸುಧಾರಣೆ ಬಂದ ಮೇಲೆ ಉಳುವವನೇ ಭೂಮಿಯ ಒಡೆಯ ಎಂಬ ಕಾಯ್ದೆ ಮಾಡಲಾಯಿತು. ಈ ಮಸೂದೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದ್ದು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಅಧಿಕಾರಿಗಳು ಸಹಕರಿಸ ಬೇಕು’ ಎಂದು ಮನವಿ ಮಾಡಿದರು.

‘ಕಾಯ್ದೆಯಿಂದ ಸಾಕಷ್ಟು ಮಂದಿ ಬಡವರಿಗೆ ಅನುಕೂಲವಾಗಲಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸರ್ಕಾರ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಿದೆ. ಆದರೆ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡದೆ ಸರ್ಕಾರಕ್ಕೆ ವಾಪಸ್ ಕಳುಹಿಸಲಾಗುತ್ತಿದೆ. ಇದಕ್ಕೆಲ್ಲಾ ಅಧಿಕಾರಿಗಳ ವೈಫಲ್ಯವೇ ಕಾರಣವಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕಚಂದ್ರ ಮಾತನಾಡಿ, ‘ಜಿಲ್ಲೆಯಲ್ಲಿ ಸುಮಾರು 16 ಲಕ್ಷ ಜನಸಂಖ್ಯೆ ಇದ್ದು,  ಶೇ 29 ರಷ್ಟು ಪರಿಶಿಷ್ಟ ಜಾತಿ ಮತ್ತು ಶೇ 5 ರಷ್ಟು ಪರಿಶಿಷ್ಟ ಪಂಗಡದವರಿದ್ದಾರೆ. 67 ಮಂದಿಯರ ವಸತಿಗಳು ಖಾಸಗಿ ಜಮೀನಿನಲ್ಲಿ ಇದೆ’ ಎಂದು ಅವರು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷರು, ‘ಅರಣ್ಯವಾಸಿಗಳೂ, ಆದಿವಾಸಿಗಳು, ಗುಡ್ಡಗಾಡು ಜನರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡವರು ತಮ್ಮ  ಸಹಾಯಕ್ಕಾಗಿ ಬರುತ್ತಾರೆ. ಸಾಕಷ್ಟು ಮಂದಿಗೆ ಇರಲು ಮನೆ ಇಲ್ಲ. ಹಾಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಿ ಮತ್ತೆ ಸಮೀಕ್ಷೆ ಮಾಡಿ ಸೂಕ್ತ ಅಂಶಗಳನ್ನು ಸಂಗ್ರಹಿಸಿ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಬಿ.ಕಾವೇರಿ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.