ADVERTISEMENT

ವಿದ್ಯಾರ್ಥಿಗಳನ್ನು ಸಮಾಜ ಮುಖಿಯಾಗಿಸಿ

​ಪ್ರಜಾವಾಣಿ ವಾರ್ತೆ
Published 12 ಜನವರಿ 2017, 4:50 IST
Last Updated 12 ಜನವರಿ 2017, 4:50 IST

ಕೋಲಾರ: ‘ವಿದ್ಯಾರ್ಥಿಗಳನ್ನು ಸಮಾಜ ಮುಖಿಗಳನ್ನಾಗಿ ತಯಾರು ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ’ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎನ್.ಮಂಜುನಾಥ್ ತಿಳಿಸಿದರು.

ನಗರದ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಪಿಯು ಕನ್ನಡ ಉಪನ್ಯಾಸಕರ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬುಧವಾರ ನಡೆದ ‘ಕೃಷ್ಣೆಗೌಡನ ಆನೆ’ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಲು ಶಿಕ್ಷಣ ಸಂಸ್ಥೆಗಳಲ್ಲಿ ವೇದಿಕೆ ಕಲ್ಪಿಸಿಕೊಡಲು ಮುಂದಾಗಬೇಕು. ಸಂಸ್ಕೃತಿ, ಜನಪದ ಕಲೆ, ಹಾಡುಗಾರಿಕೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಬೇಕಾದ ಅಗತ್ಯವಿದೆ’ ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ್ ಸಿಂಧೆ ಮಾತನಾಡಿ, ‘ನಾಟಕಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಹಿನ್ನಲೆಯಲ್ಲಿ ಪಠ್ಯದಲ್ಲಿಯೂ ಅಳವಡಿಸಲಾಗುತ್ತಿದೆ. ರಂಗ ಕಲೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ’ ಎಂದರು.

ಡಾ.ಚಂದ್ರಶೇಖರ ಕಂಬಾರ ರಚಿಸಿರುವ ಬೆಪ್ತಕ್ಕಡಿ ಬೋಳೇಶಂಕರ, ಪೂರ್ಣ ಚಂದ್ರ ತೇಜಸ್ವಿ ರಚಿತ ‘ಕೃಷ್ಣೇಗೌಡನ ಆನೆ’ ನಾಟಕವನ್ನು ನಂದನ ಸಂಸ್ಥೆಯ ಕಲಾವಿದರು ಪ್ರದರ್ಶಿಸಿದರು.

ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಎಸ್.ಕೃಷ್ಣಮೂರ್ತಿ, ಪಿಯು ಕನ್ನಡ ಉಪನ್ಯಾಸಕ ಸಂಘದ ಅಧ್ಯಕ್ಷ ಜೆ.ಜಿ.ನಾಗರಾಜ್, ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಶ್ರೀನಿವಾಸ್, ನಂದನ ಸಂಸ್ಥೆಯ ರತ್ನಾನಾಗೇಶ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.