ADVERTISEMENT

ಶಿಸ್ತು ಕ್ರಮಕ್ಕೆ ಶಿಫಾರಸು ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 13 ಮೇ 2017, 8:29 IST
Last Updated 13 ಮೇ 2017, 8:29 IST

ಕೋಲಾರ: ‘ಸರ್ಕಾರದ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕು. ಇಲ್ಲವಾದರೆ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡುತ್ತೇನೆ’ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಆಂಜಿನಪ್ಪ ಎಚ್ಚರಿಕೆ ನೀಡಿದರು.

ನಗರದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಸರ್ಕಾರ ಬಡ ಜನರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ, ಅಧಿಕಾರಿಗಳು ಆ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಅಧಿಕಾರಿಗಳು ಜನಪ್ರತಿನಿಧಿಗಳನ್ನು ನಿಸ್ಸಹಾಯಕರಾಗಿ ಮಾಡುತ್ತಿದ್ದಾರೆ. ಸಭೆಗಳಿಗೆ ಹಾಜರಾಗದೆ ಸಬೂಬು ಹೇಳುತ್ತಾ ಕಾಲಹರಣ ಮಾಡುತ್ತಿದ್ದಾರೆ. ವಿಶೇಷ ಘಟಕ ಯೋಜನೆ ಸೌಲಭ್ಯಗಳನ್ನು ಫಲಾನುಭವಿಗಳಿಗೆ ನೀಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ. ಅಧಿಕಾರಿಗಳಿಗೆ ಇದು ಶೋಭೆಯಲ್ಲ’ ಎಂದು ಕೆಂಡಾಮಂಡಲರಾದರು.

ADVERTISEMENT

‘ಸೌರ ವಿದ್ಯುತ್‌ ದೀಪಗಳು ಮತ್ತು ಅನಿಲ ವಿತರಣೆ ಸಂಬಂಧ ಸಾಕಷ್ಟು ಬಾರಿ ನಾನೇ ಕರೆ ಮಾಡಿದರೂ ಅಧಿಕಾರಿಗಳು ಕ್ರಮ ವಹಿಸುತ್ತಿಲ್ಲ. ಈ ರೀತಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಶಿಫಾರಸು ಮಾಡುತ್ತೇನೆ. ಎಚ್ಚರಿಕೆಯಿಂದ ಕೆಲಸ ಮಾಡಿ’ ಎಂದು ಖಡಕ್‌ ಸೂಚನೆ ನೀಡಿದರು.

ಅಕ್ರಮ ಗಣಿಗಾರಿಕೆ: ‘ತಾಲ್ಲೂಕಿನ ತಲಗುಂದ ಹಾಗೂ ಧನಮಟ್ನಹಳ್ಳಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಬೆಟ್ಟ ಹೊಸಪುರಕ್ಕೆ ನೂರಾರು ಲೋಡ್ ಬಂಡೆಗಳನ್ನು ಸಾಗಿಸಿಕೊಂಡು ಬಂದು ಗಣಿಗಾರಿಕೆ ಮಾಡುತ್ತಿದ್ದಾರೆ. ಇದರಿಂದ ಸುತ್ತಮುತ್ತಲಿನ ಗ್ರಾಮಗಳ ಮನೆಗಳಿಗೆ ಹಾನಿಯಾಗುತ್ತಿದೆ. ನನ್ನ ಮನೆ ಗೋಡೆಯೇ ಬಿರುಕು ಬಿಟ್ಟಿದೆ. ಈ ಬಗ್ಗೆ ನಾವು ಯಾರಿಗೆ ದೂರು ಕೊಡಬೇಕು’ ಎಂದು ಅಧಿಕಾರಿಗಳ ವಿರುದ್ಧ ಹರಿಹಾಯ್ದರು.

‘ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಗಮನ ಹರಿಸಬೇಕು ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು. ಇದಕ್ಕೆ ಪ್ರತ್ಯೇಕವಾಗಿ ಹೊರ ಗುತ್ತಿಗೆ ಆಧಾರದಲ್ಲಿ ಶಿಕ್ಷಕರನ್ನು ನೇಮಿಸಿಕೊಳ್ಳಬೇಕು. ಈ ಸಂಬಂಧ ಪ್ರತಿ ಹೋಬಳಿಯಲ್ಲಿ ಪೋಷಕರೊಂದಿಗೆ ಮೇ 20ರಿಂದ ಚಿಂತನಾ ಸಭೆ ನಡೆಸಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚಿಸಿದರು.

‘ಅಂಗನವಾಡಿಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಆರಂಭಕ್ಕೆ ಪಠ್ಯಕ್ರಮ ನೀಡಬೇಕು. ಈ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ ತರಬೇತಿ ಕಾರ್ಯಾಗಾರ ನಡೆಸಬೇಕು. ಇಸ್ವತ್ತು ಸಂಬಂಧ ತಾಲ್ಲೂಕಿನಲ್ಲಿ 2,914 ಅರ್ಜಿಗಳು ಬಂದಿದ್ದು, ಈ ಪೈಕಿ 2,017 ಅರ್ಜಿಗಳು ಇತ್ಯರ್ಥವಾಗಿವೆ. 897 ಅರ್ಜಿಗಳು ಬಾಕಿ ಉಳಿದಿದ್ದು, ಇವುಗಳನ್ನು ಶೀಘ್ರವೇ ಇತ್ಯರ್ಥಪಡಿಸಬೇಕು’ ಎಂದು ಸೂಚನೆ ನೀಡಿದರು.ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಲಕ್ಷ್ಮಿ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಬಾಲಾಜಿ ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.