ADVERTISEMENT

ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕ್ರಮ

ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2017, 5:02 IST
Last Updated 12 ಏಪ್ರಿಲ್ 2017, 5:02 IST

ಮುಳಬಾಗಿಲು: ‘ತಾಲ್ಲೂಕಿನಲ್ಲಿ ಕುಡಿ ಯುವ ನೀರಿನ ಅಭಾವ ಇದೆ. ಗ್ರಾಮೀಣ ಜನರಿಗೆ ನೀರು ಒದಗಿಸುವಲ್ಲಿ ಅಧಿಕಾರಿಗಳು ಹೆಚ್ಚಿನ ಗಮನವಹಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಮ್ಮ ಆನಂದರೆಡ್ಡಿ ತಿಳಿಸಿದರು.

ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ನೀರಿನ ಸಮಸ್ಯೆ ಕುರಿತು ಸಾರ್ವಜನಿಕರಿಂದ ದೂರುಗಳು ಬಂದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದರು. 

‘ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ದೂರವಾಣಿ ಕರೆಗಳನ್ನು ಸ್ವೀಕರಿಸುತ್ತಿಲ್ಲ ಎಂಬ ದೂರುಗಳು ಸಾಕಷ್ಟು ಬರುತ್ತಿವೆ. ಇಂತಹ ಅಧಿಕಾರಿಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಜರುಗಿಸಲಾಗುವುದು’ ಎಂದರು. 

‘ಗ್ರಾಮೀಣ ಪ್ರದೇಶಗಳಿಗೆ ಕಡಿಮೆ ಪ್ರಮಾಣದಲ್ಲಿ  ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಈಗಾಗಲೇ ಸಾಕಷ್ಟು ಕೊಳವೆಬಾವಿಗಳು ಬತ್ತಿವೆ. ಲಭ್ಯವಿರುವ ಅಲ್ಪಸ್ವಲ್ಪ ನೀರಿನಲ್ಲಿ ರೈತರು ಸಣ್ಣ ಮಟ್ಟದಲ್ಲಿ ಕೃಷಿ ಮಾಡುತ್ತಿದ್ದಾರೆ. ಆದ್ದರಿಂದ ಸಮರ್ಪಕ ವಿದ್ಯುತ್ ಪೂರೈಕೆಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು  ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಆರ್.ಕೃಷ್ಣಪ್ಪ ಮಾತನಾಡಿ, ‘ಆವಣಿ ಬೆಟ್ಟದಲ್ಲಿರುವ ಕೊಳವೆ ಬಾವಿ ನಿರ್ವಹಣೆ ಖಾಸಗಿ ವ್ಯಕ್ತಿಗಳ ಬಳಿ ಇದೆ. ಬೆಟ್ಟಕ್ಕೆ ಅಳವಡಿಸಿರುವ ಪೈಪ್‌ಲೈನ್, ಕೊಳವೆ ಬಾವಿಯ ನಿರ್ವಹಣೆಯನ್ನು ಗ್ರಾಮ ಪಂಚಾಯಿತಿಗೆ ನೀಡಬೇಕು’ ಎಂದು ಒತ್ತಾಯಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಉತ್ತನೂರು ವಿ.ಎಸ್.ಅರವಿಂದ್ ಮಾತನಾಡಿದರು. ರೇಷ್ಮೆ, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳು, ಪಶು, ಶಿಕ್ಷಣ ಇಲಾಖೆ ಅಧಿಕಾರಿಗಳು ಇಲಾಖೆಗೆ ಬಂದಿರುವ ಅನುದಾನ, ಆಯವ್ಯಯದ ಬಗ್ಗೆ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಮುನಿಲಕ್ಷ್ಮಮ್ಮ, ನಾಗಮಣಿ ಸುಬ್ರಮಣಿ ರೆಡ್ಡಿ, ತಾ.ಪಂ ಕಾರ್ಯನಿರ್ವಹ ಣಾಧಿಕಾರಿ ವೆಂಕಟೇಶಪ್ಪ, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಶುಭ, ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಮಧುಸೂಧನರೆಡ್ಡಿ, ಮೀನುಗಾರಿಕೆ ಇಲಾಖೆ ಅಧಿಕಾರಿ ಶಿವಶಂಕರ್, ಸಿಡಿಪಿಒ ಶಂಕರಮೂರ್ತಿ, ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಮುನಿಯಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.