ADVERTISEMENT

15ಕ್ಕೆ ಕೌಶಲ ಅಭಿವೃದ್ಧಿ ಅಭಿಯಾನ ಆರಂಭ

​ಪ್ರಜಾವಾಣಿ ವಾರ್ತೆ
Published 13 ಮೇ 2017, 8:33 IST
Last Updated 13 ಮೇ 2017, 8:33 IST

ಕೋಲಾರ: ‘ಯುವ ನಿರುದ್ಯೋಗಿಗಳ ಬೇಡಿಕೆ ಸಮೀಕ್ಷೆ ಮತ್ತು ನೊಂದಣಿ ಕಾರ್ಯವನ್ನು ಕೌಶಲ ಅಭಿವೃದ್ಧಿ ಅಭಿಯಾನದಡಿ ಮೇ 15ರಿಂದ ಆರಂಭಿಸಲಾಗುತ್ತದೆ’ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕಚಂದ್ರ ತಿಳಿಸಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಏಕ ಕಾಲಕ್ಕೆ ಬೇಡಿಕೆ ಸಮೀಕ್ಷೆ ಮತ್ತು ನೋಂದಣಿ ಕಾರ್ಯ ನಡೆಸಲಾಗುತ್ತದೆ. ‘ಜಿಲ್ಲೆಯಲ್ಲಿ ಪದವೀಧರರ ಸಂಖ್ಯೆ ಕಡಿಮೆಯಿಲ್ಲ. ಆದರೆ, ಅವರಿಗೆ ಅಗತ್ಯ ಕೌಶಲ ತರಬೇತಿ ದೊರೆಯದ ಕಾರಣ ಉದ್ಯೋಗಾವಕಾಶದಿಂದ ವಂಚಿತರಾಗುತ್ತಿದ್ದಾರೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಅಭಿಯಾನ ನಡೆಸಲಾಗುತ್ತಿದೆ’ ಎಂದರು.

‘ಜಿಲ್ಲಾ ಉಸ್ತುವಾರಿ ಸಚಿವ ಕೆ.ಆರ್.ರಮೇಶ್‌ಕುಮಾರ್ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮೇ 15ರಂದು ಬೆಳಿಗ್ಗೆ 11ಕ್ಕೆ ಅಭಿಯಾನದ ವೆಬ್‌ಸೈಟ್ ಮತ್ತು ಮೊಬೈಲ್ ಆ್ಯಪ್‌ ಲೋಕಾರ್ಪಣೆ ಮಾಡುತ್ತಾರೆ. ನಂತರ ಸಮೀಕ್ಷೆಯ ಆಧಾರದ ಮೇಲೆ ರಾಜ್ಯದಲ್ಲಿ 5 ಲಕ್ಷ ಮಂದಿ ನಿರುದ್ಯೋಗಿಗಳಿಗೆ ಕೌಶಲ ಅಭಿವೃದ್ಧಿ ತರಬೇತಿ ನೀಡಲು ಕ್ರಮ ಕೈಗೊಳ್ಳಲಾಗಿದೆ’ ಎಂದು ವಿವರಿಸಿದರು.

ADVERTISEMENT

‘ಜಿಲ್ಲೆಯ ನಿರುದ್ಯೋಗಿಗಳು ಕೌಶಲ ಅಭಿವೃದ್ಧಿ ಅಭಿಯಾನದಡಿ ನಡೆಯುತ್ತಿರುವ ಸಮೀಕ್ಷೆ ಮತ್ತು ನೊಂದಣಿ ಪ್ರಕ್ರಿಯೆಯಲ್ಲಿ ಹೆಸರು ನೋಂದಾಯಿಸಿಕೊಳ್ಳುವುದರಿಂದ ಅರ್ಹ ಫಲಾನುಭವಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಅನುಕೂಲವಾಗುತ್ತದೆ. ಆಸಕ್ತರು www.kaushalkar.com ವೆಬ್‌ಸೈಟ್‌ ವಿಳಾಸ ಅಥವಾ ಮೊಬೈಲ್ ಆ್ಯಪ್‌ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಆಯಾ ತಾಲ್ಲೂಕು ಕಚೇರಿಗಳಲ್ಲಿ ನೊಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು, ಆಸಕ್ತರು ಅಭಿಯಾನದ ಸದುಪಯೋಗ ಪಡೆಯಬೇಕು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಬಿ.ಕಾವೇರಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸುರೇಶ್, ಸಹಾಯಕ ನಿರ್ದೇಶಕ ರವಿಚಂದ್ರ, ಜಿಲ್ಲಾ ಉದ್ಯೋಗಾಧಿಕಾರಿ ಅಶ್ವತ್ಥ್‌ ನಾರಾಯಣ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.