ADVERTISEMENT

ಪ್ರಶ್ನೆಪತ್ರಿಕೆಗಳ ಸುರಕ್ಷತೆಗೆ ಹೆಚ್ಚಿನ ನಿಗಾವಹಿಸಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಸಿದ್ಧತಾ ಸಭೆಯಲ್ಲಿ ಸಿಇಒ ವೆಂಕಟರಾಜಾ ಸೂಚನೆ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2017, 9:24 IST
Last Updated 22 ಮಾರ್ಚ್ 2017, 9:24 IST

ಕೊಪ್ಪಳ: ಜಿಲ್ಲೆಯಲ್ಲಿ ಮಾರ್ಚ್‌ 30ರಿಂದ ಏಪ್ರಿಲ್‌ 2ರವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಸಂದರ್ಭದಲ್ಲಿ ಪ್ರಶ್ನೆಪತ್ರಿಕೆಗಳ ಭದ್ರತೆ ಕುರಿತು ಅಧಿಕಾರಿಗಳು ಹೆಚ್ಚಿನ ನಿಗಾವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಸಿದ್ಧತೆ ಕುರಿತ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಪರೀಕ್ಷೆ ಮುಕ್ತ, ಸಮರ್ಪಕವಾಗಿ ಕೈಗೊಳ್ಳಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು.

ಜಿಲ್ಲೆಯ 5 ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿಲ್ಲ. ಮಾರ್ಚ್‌ 30ರ ಒಳಗೆ ಸಿಸಿ ಕ್ಯಾಮೆರಾ ಅಳವಡಿಸಬೇಕು. ಯಾವುದೇ ಪರೀಕ್ಷಾ ಅಕ್ರಮಗಳಿಗೆ ಅವಕಾಶ ಕೊಟ್ಟಲ್ಲಿ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರ ಸುತ್ತ 200 ಮೀಟರ್‌ ವ್ಯಾಪ್ತಿಯಲ್ಲಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೆ ಕ್ರಮ ವಹಿಸಬೇಕು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ರುದ್ರೇಶ್ ಘಾಳಿ ಮಾತನಾಡಿ, ಕೇಂದ್ರ ಕಚೇರಿಯಿಂದ ಕೊಪ್ಪಳ ಜಿಲ್ಲೆಗೆ ಪ್ರಶ್ನೆಪತ್ರಿಕೆಗಳು ಬಂದ ಬಳಿಕ, ಸ್ವೀಕೃತಿ ಹಾಗೂ ವಿತರಣೆ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಚಿತ್ರೀಕರಿಸಬೇಕು. ಪ್ರಶ್ನೆಪತ್ರಿಕೆಯ ಸಾಗಾಣಿಕೆ ಕಡ್ಡಾಯವಾಗಿ ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಪೊಲೀಸ್ ಬಂದೋಬಸ್ತ್‌ನಲ್ಲಿಯೇ ಆಗಬೇಕು ಎಂದರು.

ಜಿಲ್ಲೆಯಲ್ಲಿ ಕೊಪ್ಪಳದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ಭಾಗ್ಯನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಪರೀಕ್ಷಾ ಕೇಂದ್ರಗಳನ್ನು ಸೂಕ್ಷ್ಮ ಪರೀಕ್ಷಾ ಕೇಂದ್ರವನ್ನಾಗಿ ಗುರುತಿಸಲಾಗಿದೆ. ಇಲ್ಲಿಗೆ ಹೆಚ್ಚುವರಿಯಾಗಿ ಸ್ಥಾನಿಕ ಜಾಗೃತ ದಳ ಹಾಗೂ ಪೊಲೀಸ್ ಬಂದೋಬಸ್ತ್ ನೇಮಿಸಲು ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ಪರೀಕ್ಷಾ ನಕಲು ತಡೆಗೆ ರಾಜ್ಯಮಟ್ಟದಿಂದ ಜಾಗೃತ ದಳ ಆಗಮಿಸಲಿದ್ದು, ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ನೇತೃತ್ವದಲ್ಲಿ ಜಾಗೃತ ದಳ ಹಾಗೂ ತಾಲ್ಲೂಕುಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಜಾಗೃತ ದಳ ರಚಿಸಲಾಗಿದೆ. ಪ್ರಶ್ನೆಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳ ರವಾನೆಗಾಗಿ ಒಟ್ಟು 22 ಮಾರ್ಗಗಳನ್ನು ನಿಗದಿ ಮಾಡಲಾಗಿದೆ ಎಂದರು.

ಸರ್ವಶಿಕ್ಷಣ ಅಭಿಯಾನ ಉಪಸಮನ್ವಯಾಧಿಕಾರಿ ವೆಂಕಟೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ, ಖಜಾನೆ ಇಲಾಖೆ ಅಧಿಕಾರಿ ಕಳ್ಳೇರ್ ಇದ್ದರು.

ತಾಲ್ಲೂಕುವಾರು ವಿದ್ಯಾರ್ಥಿಗಳ ವಿವರ
ಈ ವರ್ಷ ಒಟ್ಟು 17,995 ನಿಯಮಿತವಾಗಿ ತರಗತಿಗೆ ಹಾಜರಾದ ವಿದ್ಯಾರ್ಥಿಗಳು, 703 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 591 ಖಾಸಗಿಯಾಗಿ ಬರೆಯುವ ಅಭ್ಯರ್ಥಿಗಳು ಹೀಗೆ ಒಟ್ಟಾರೆ 19,289 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ಕೊಪ್ಪಳ ತಾಲ್ಲೂಕಿನಲ್ಲಿ 5,431, ಗಂಗಾವತಿ- 5,483, ಕುಷ್ಟಗಿ- 3,779 ಮತ್ತು ಯಲಬುರ್ಗಾ ತಾಲ್ಲೂಕಿನಲ್ಲಿ 3,302 ರೆಗ್ಯುಲರ್ ವಿದ್ಯಾರ್ಥಿಗಳಿದ್ದಾರೆ. ಕೊಪ್ಪಳದಲ್ಲಿ -20, ಗಂಗಾವತಿ- 19, ಕುಷ್ಟಗಿ 8 ಮತ್ತು ಯಲಬುರ್ಗಾ12 ಒಟ್ಟು 59 ಪರೀಕ್ಷಾ ಕೇಂದ್ರ ಸ್ಥಾಪಿಸಲಾಗಿದೆ ಎಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಬಂಧಿಸಿದ ಜಿಲ್ಲಾ ನೋಡಲ್‌ ಅಧಿಕಾರಿ ರಾಹತ್ ನವಾಜ್ ಖಾನಂ ತಿಳಿಸಿದ್ದಾರೆ.

*
ಪರೀಕ್ಷಾ ಕಾರ್ಯದಲ್ಲಿ ಬೇಜವಾಬ್ದಾರಿತನ ತೋರುವವರ ಮೇಲೆ ಶಿಸ್ತುಕ್ರಮ ಜರುಗಿಸಲಾಗುವುದು.
-ವೆಂಕಟರಾಜಾ, ಜಿಲ್ಲಾ ಪಂಚಾಯಿತಿ,
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.