ADVERTISEMENT

‘ದೌರ್ಜನ್ಯ ತಡೆಗೆ ಕಠಿಣ ಕಾನೂನು ಅಗತ್ಯ’

​ಪ್ರಜಾವಾಣಿ ವಾರ್ತೆ
Published 25 ಜುಲೈ 2014, 8:48 IST
Last Updated 25 ಜುಲೈ 2014, 8:48 IST

ಕೊಪ್ಪಳ: ಮಹಿಳೆಯರ ಮೇಲಿನ ನಡೆಯುವ ದೌರ್ಜನ್ಯ ತಡೆಗಟ್ಟಲು, ಸದ್ಯ ಇರುವ ಕಾನೂನನ್ನು ಪರಿಣಾಮ­ಕಾರಿಯಾಗಿ ಅನುಷ್ಠಾನಗೊಳಿಸುವುದು ಅಗತ್ಯ ಎಂದು ಕೊಪ್ಪಳದ ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಸರ್ವಮಂಗಳ ಚಿಕ್ಕನಗೌಡರ್ ಹೇಳಿದರು.
ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ನ್ಯಾಯಾಲಯ ಆವರಣದಲ್ಲಿ ಬುಧವಾರ ಏರ್ಪಡಿಸಿದ್ದ ‘ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ’ ಕುರಿತ ಕಾನೂನು ಕಾರ್ಯಾಗಾರ ಉದ್ಘಾಟಿಸಿ  ಮಾತನಾಡಿದರು.

ಇತ್ತೀಚೆಗೆ ಬಾಹ್ಯ ದೌರ್ಜನ್ಯಕ್ಕಿಂತ ಕೌಟುಂಬಿಕ ದೌರ್ಜನ್ಯ ಪ್ರಕರಣ ಹೆಚ್ಚುತ್ತಿರುವ ಬಗ್ಗೆ ವರದಿಯಾಗುತ್ತಿವೆ. ಈ ಹಿಂದೆ ಮಹಿಳಾ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗೆ ಶಿಕ್ಷೆ ಆಗುತ್ತಿತ್ತು. ಆದರೆ 2005 ರಲ್ಲಿ ಜಾರಿಗೆ ಬಂದ ಹೊಸ ಕಾಯ್ದೆಯಲ್ಲಿ ಮಹಿಳೆಗೆ ಪರಿಹಾರಕ್ಕೂ ಅವಕಾಶವಿದೆ ಎಂದರು.

ದೌರ್ಜನ್ಯ ತಡೆ ಕಾಯ್ದೆ ಕುರಿತು ನಗರ ಸೇರಿದಂತೆ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಮಾಹಿತಿಯ ಕೊರತೆ ಇದೆ. ಕಾಯ್ದೆ ಕುರಿತು ಜನ­ಸಾಮಾನ್ಯರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಕಾನೂನು ಅರಿವಿನಂತಹ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಶ್ರೀಕಾಂತ್ ಬಬಲಾದಿ ಮಾತನಾಡಿ, ಸಭ್ಯತೆಯ ಸಂಸ್ಕೃತಿ ಹೊಂದಿರುವ ದೇಶದಲ್ಲಿ  ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿ­ರುವುದು ಸಮಾಜ ತಲೆತಗ್ಗಿಸುವಂತಹ ಸಂಗತಿ ಎಂದು ಕಳವಳ ವ್ಯಕ್ತಪಡಿಸಿದರು.
ವಕೀಲರಾದ ಎಂ. ಹನುಮಂತರಾವ್, ಸಾವಿತ್ರಿ ಗಮನಿ, ಎಸ್.ಬಿ. ಪಾಟೀಲ್ ವಿವಿಧ ವಿಷಯಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ವಸಂತಪ್ರೇಮಾ,  ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಬಿ. ದಶರಥ, ವಕೀಲ ವಿ.ಎಂ. ಭೂಸನೂರಮಠ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ. ತುಕಾರಾಂರಾವ್ ಸೇರಿದಂತೆ ಸೇವಾ ಸಂಸ್ಥೆಗಳ ಪದಾಧಿಕಾರಿಗಳು, ಸಮಾಲೋಚಕರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.