ADVERTISEMENT

ಉತ್ತಮ ಮಳೆ: ಬಿತ್ತನೆ ಪ್ರದೇಶ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2017, 7:37 IST
Last Updated 22 ಆಗಸ್ಟ್ 2017, 7:37 IST

ಮಂಡ್ಯ: ‘ಜಿಲ್ಲೆಯಾದ್ಯಾಂತ ಆಗಸ್ಟ್‌ ತಿಂಗಳಲ್ಲಿ ಉತ್ತಮ ಮಳೆಯಾಗಿದ್ದು, ಬಿತ್ತನೆ ಪ್ರದೇಶದ ವಿಸ್ತೀರ್ಣ 45,946 ಹೆಕ್ಟೇರ್‌ಗೆ ಹೆಚ್ಚಾಗಿದೆ’ ಎಂದು ಕೃಷಿ ಇಲಾಖೆ ಉಪ ನಿರ್ದೇಶಕಿ ರಾಜಸುಲೋಚನಾ ಮಾಹಿತಿ ನೀಡಿದರು. ಜಿಲ್ಲಾ ಪಂಚಾಯಿತಿ ಸಂಭಾಂಗಣದಲ್ಲಿ ಸೋಮವಾರ ನಡೆದ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾಹಿತಿ ನೀಡಿದರು.

‘ಜೂನ್‌ ಹಾಗೂ ಜುಲೈ ತಿಂಗಳಲ್ಲಿ ಜಿಲ್ಲೆಯ ಬಿತ್ತನೆ ಪ್ರಮಾಣ ಅತ್ಯಂತ ಕಡಿಮೆ ಇತ್ತು. ಕೇವಲ 34,929 (ಶೇ 15) ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿತ್ತು. ಆದರೆ, ಆಗಸ್ಟ್‌ ತಿಂಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ರೈತರು ಬಿತ್ತನೆ ಕಾರ್ಯವನ್ನು ಚುರುಕುಗೊಳಿಸಿದ್ದಾರೆ. ಈಗ ಶೇ 23ರಷ್ಟು ಬಿತ್ತನೆ ಕಾರ್ಯ ಪೂರೈಸಿದ್ದಾರೆ. ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳಿಗೆ ಬಿತ್ತನೆ ಬೀಜ ಪೂರೈಸಿದ್ದು ರೈತರಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಹೇಳಿದರು.

ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ ರಾಮಕೃಷ್ಣ ಮಾಹಿತಿ ನೀಡುತ್ತಾ ‘ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಗ್ರಾಮೀಣ ಪ್ರದೇಶದ ಕೊಳವೆಬಾವಿಗಳು ಮರುಪೂರಣಗೊಳ್ಳುತ್ತಿವೆ. ಹೀಗಾಗಿ, ಕುಡಿಯುವ ನೀರು ಪೂರೈಕೆಗೆ ಯಾವುದೇ ತೊಂದರೆ ಆಗುವುದಿಲ್ಲ. ನಾಗಮಂಗಲ ಹಾಗೂ ಕೆ.ಆರ್‌.ಪೇಟೆ ತಾಲ್ಲೂಕಿನ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗುತ್ತಿದೆ’ ಎಂದು ಹೇಳಿದರು.

ADVERTISEMENT

ಡೆಂಗಿ, ಚಿಕೂನ್‌ ಗುನ್ಯಾ ಪ್ರಕರಣ ಇಳಿಕೆ:
‘ಜಿಲ್ಲೆಯಲ್ಲಿ ಮಳೆ ಹೆಚ್ಚಾದ ನಂತರ ಡೆಂಗಿ, ಚಿಕೂನ್‌ ಗುನ್ಯಾ, ಮಲೇರಿಯ ಪ್ರಕರಣಗಳ ಪ್ರಮಾಣವೂ ಕಡಿಮೆಯಾಗಿದೆ. ಇಲ್ಲಿಯವರೆಗೆ ಎರಡು ಪ್ರಕರಣಗಳಲ್ಲಿ ಮಾತ್ರ ರೋಗಿಗಳು ಮೃತಪಟ್ಟಿದ್ದಾರೆ. 27 ಮಲೇರಿಯ, 284 ಚಿಕೂನ್‌ ಗುನ್ಯಾ ಪ್ರಕರಣಗಳು ಪತ್ತೆಯಾಗಿವೆ. ರೋಗ ನಿಯಂತ್ರಿಸಲು ಎಲ್ಲಾ ಕ್ರಮ ಕೈಗೊಳ್ಳಲಾಗಿದ್ದು ಹಳ್ಳಿಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಅರಿವು ಮೂಡಿಸುತ್ತಿದ್ದಾರೆ’ ಎಂದು ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಭವಾನಿ ಶಂಕರ್‌ ಹೇಳಿದರು.

ಶಾಲೆಗಳ ದುರಸ್ತಿಗೆ ₹ 60 ಲಕ್ಷ ಬಿಡುಗಡೆ:
ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ.ಶಿವಮಾದಪ್ಪ ಮಾತನಾಡಿ, ‘ಹಾಳಾಗಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ದುರಸ್ತಿಗಾಗಿ ₹ 60 ಲಕ್ಷ ಹಣ ಬಿಡುಗಡೆ ಆಗಿದೆ. ಈ ಹಣದಿಂದ ಹಲವು ದಿನಗಳಿಂದ ಸೋರುತ್ತಿರುವ ಶಾಲೆಗಳ ದುರಸ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಶಾಲೆ ಬಿಟ್ಟ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರಲು ಆಂದೋಲನ ನಡೆಸಲಾಯಿತು. ಜಿಲ್ಲೆಯಲ್ಲಿ 257 ಮಕ್ಕಳು ಶಾಲೆಯಿಂದ ಹೊರಗೆ ಉಳಿದಿದ್ದರು.

ಆ ಪೈಕಿ 209 ಮಕ್ಕಳನ್ನು ಶಾಲೆಗೆ ಮರಳಿ ಕರೆತರಲಾಗಿದೆ. ಇನ್ನೂ 48 ಮಕ್ಕಳು ಶಾಲೆಯಿಂದ ಹೊರಗೆ ಉಳಿದಿದ್ದಾರೆ. ಜಿಲ್ಲೆಯಲ್ಲಿ ಶೇ 90ರಷ್ಟು ಮಕ್ಕಳಿಗೆ ಸೈಕಲ್‌ ವಿತರಣೆ ಮಾಡಲಾಗಿದೆ’ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜೆ.ಪ್ರೇಮಕುಮಾರಿ, ಉಪಾಧ್ಯಕ್ಷೆ ಗಾಯತ್ರಿ ರೇವಣ್ಣ, ಸಿಇಒ ಬಿ.ಶರತ್‌, ಮುಖ್ಯ ಯೋಜನಾಧಿಕಾರಿ ಧನುಷ್, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಬೋರಯ್ಯ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.