ADVERTISEMENT

ಕೇಂದ್ರ ಸರ್ಕಾರದ ಅನುದಾನ ಬಳಸಿಕೊಳ್ಳಿ

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆ: ಅಧ್ಯಕ್ಷೆ ಭಾರತಿ ಶೆಟ್ಟಿ ಸಲಹೆ

​ಪ್ರಜಾವಾಣಿ ವಾರ್ತೆ
Published 25 ಮೇ 2017, 6:21 IST
Last Updated 25 ಮೇ 2017, 6:21 IST

ಮಂಡ್ಯ: ‘ಕೇಂದ್ರ ಸರ್ಕಾರವು ಸ್ವ–ಸಹಾಯ ಸಂಘಗಳಿಗೆ ಅನುದಾನ ಬಿಡುಗಡೆ ಮಾಡಿದೆ. ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು’ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ ಸಲಹೆ ನೀಡಿದರು.

ನಗರದ ಎಸ್.ಬಿ. ಸಮುದಾಯ ಭವನದಲ್ಲಿ ಬುಧವಾರ ನಡೆದ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರ ಕಷ್ಟಗಳನ್ನು ಅರಿತು ಅವರಿಗೆ ಅಗತ್ಯ ನೆರವು ಒದಗಿಸುವ ಮೂಲಕ ನೆರವಾಗಬೇಕು. ರಾಜ್ಯದಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಅಸ್ತಿತ್ವ ಕಳೆದುಕೊಳ್ಳುತ್ತಿವೆ. ರೈತರ ಕಷ್ಟಗಳನ್ನು ಅರಿಯುವಲ್ಲಿಯೂ ವಿಫಲ ಆಗಿವೆ ಎಂದು ಅವರು ಟೀಕಿಸಿದರು.

ಜಿಲ್ಲೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರ ಬೆಳೆ ನಷ್ಟ ಪರಿಹಾರ ಸಂಪೂರ್ಣವಾಗಿ ಬಿಡುಗಡೆ ಮಾಡಿಲ್ಲ. ರೈತರ ಕಷ್ಟಗಳಿಗೆ ಸ್ಪಂದಿಸುವ ಮನೋಭಾವವೂ ರಾಜ್ಯ ಸರ್ಕಾರಕ್ಕೆ ಇಲ್ಲ. ಇಂತಹ ಸಂದರ್ಭದಲ್ಲಿ ರೈತರ ನೆರವಿಗೆ ಬರಬೇಕು. ಆ ನಿಟ್ಟಿನಲ್ಲಿ ಬಿಜೆಪಿ ಪಕ್ಷವು ಕ್ರಮ ವಹಿಸಲಿದೆ ಎಂದು ಅವರು ಹೇಳಿದರು.

ಜಿಲ್ಲೆಯ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಖಾತೆ ತೆರೆಯಬೇಕು. ಆ ಮೂಲಕ ರಾಜ್ಯ ಬಿಜೆಪಿಗೆ ಕೊಡುಗೆ ನೀಡಬೇಕು. ಅಂತಹ ಕಾರ್ಯಕ್ರಮಗಳನ್ನು ಹಾಕಿಕೊಂಡು ಜನರ ಮುಂದೆ ಹೋಗಲು ಮಹಿಳಾ ಮೋರ್ಚಾ ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ನಾಗಣ್ಣಗೌಡ ಮಾತನಾಡಿ, ‘ಬಿಜೆಪಿ ಬೂತ್‌ಲೆವೆಲ್‌್ ಕಾರ್ಯಕರ್ತರು ಸಂಘಟನೆಯಲ್ಲಿ ತೊಡಗಬೇಕು. ಸರ್ಕಾರದಲ್ಲಿರುವ ಮಹಿಳಾ ಪರ ಯೋಜನೆಗಳ ಬಗ್ಗೆ ತಿಳಿಸಿಕೊಡಬೇಕು. ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಬೇಕು’ ಎಂದು ಸಲಹೆ ನೀಡಿದರು.

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಅನುರಾಧಾ ರಘು ಮಾತನಾಡಿ, ‘ಜನ ಸಾಮಾನ್ಯರಿಗೆ ಸರ್ಕಾರದ ಯೋಜನೆಗಳು ತಲುಪುವಂತೆ ಬಿಜೆಪಿ ಕಾರ್ಯಕರ್ತರು ನೋಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು. ಭಾಗ್ಯಾ, ಯಶೋದಮ್ಮ, ಕವಿತಾ ಜೈನ್, ಮೀನಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.