ADVERTISEMENT

ನಂಜುಂಡೇಗೌಡರಿಗೆ ಬಿಜೆಪಿ ಟಿಕೆಟ್‌?

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2017, 5:57 IST
Last Updated 20 ನವೆಂಬರ್ 2017, 5:57 IST

ಮಂಡ್ಯ: ಶ್ರೀರಂಗಪಟ್ಟಣದಲ್ಲಿ ರೈತ ಸಂಘ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ಕೆ.ಎಸ್‌.ನಂಜುಂಡೇಗೌಡ ಅವರನ್ನು ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್‌ ಭಾನುವಾರ ಭೇಟಿ ಮಾಡಿ ಬಿಜೆಪಿಗೆ ಆಹ್ವಾನ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಶ್ರೀರಂಗಪಟ್ಟಣದ ಪ್ರವಾಸಿ ಮಂದಿರದಲ್ಲಿ ರೈತಸಂಘದ ಸಭೆ ನಡೆಸುತ್ತಿದ್ದ ವೇಳೆ ಯೋಗೇಶ್ವರ್‌, ಜಿಲ್ಲಾ ಉಸ್ತುವಾರಿ ತೇಜಸ್ವಿನಿ ರಮೇಶ್‌ ಸೇರಿ ಬಿಜೆಪಿ ಮುಖಂಡರು ನಂಜುಂಡೇಗೌಡ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

‘ಮಂಡ್ಯ, ಮೈಸೂರು ಭಾಗದಲ್ಲಿ ಬಿಜೆಪಿಯನ್ನು ಬಲಪಡಿಸಲು ರೈತ ಮುಖಂಡ ಕೆ.ಎಸ್‌.ನಂಜುಂಡೇಗೌಡ ಅವರನ್ನು ಪಕ್ಷಕ್ಕೆ ಆಹ್ವಾನಿಸಿದ್ದೇವೆ. ಅವರ ಬೆಂಬಲಿಗರ ಜೊತೆ ಮಾತುಕತೆ ನಡೆಸಿ ನಂತರ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ADVERTISEMENT

ಶ್ರೀರಂಗಪಟ್ಟಣ ಕ್ಷೇತ್ರದಿಂದ ಅವರಿಗೆ ಟಿಕೆಟ್‌ ನೀಡುವ ಕುರಿತು ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆ. ಶ್ರೀರಂಗಪಟ್ಟಣ ಸೇರಿ ಮದ್ದೂರು, ಮಳವಳ್ಳಿ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳು ಜಯಗಳಿಸುವ ವಿಶ್ವಾಸವಿದೆ’ ಎಂದು ಯೋಗೇಶ್ವರ್‌ ತಿಳಿಸಿದರು. ಸತತ ಆರು ಬಾರಿ ರೈತ ಸಂಘದಿಂದ ಸ್ಪರ್ಧಿಸಿ ಸೋಲು ಕಂಡಿರುವ ನಂಜುಂಡೇಗೌಡ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು.

ಈ ಕುರಿತು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹಾಗೂ ಎಚ್‌.ಡಿ ಕುಮಾರಸ್ವಾಮಿ ಅವರ ಜೊತೆ ಮಾತುಕತೆ ನಡೆಸಿದ್ದರು. ಆದರೆ ಕುಮಾರಸ್ವಾಮಿ ಈಚೆಗೆ ಮತ್ತೊಬ್ಬ ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿ ರವೀಂದ್ರ ಶ್ರೀಕಂಠಯ್ಯ ಅವರ ಮನೆಗೆ ಭೇಟಿ ನೀಡಿ ಟಿಕೆಟ್‌ ನೀಡುವ ಭರವಸೆ ನೀಡಿರುವುದು ನಂಜುಂಡೇಗೌಡರ ಅಸಮಾಧಾನಕ್ಕೆ ಕಾರಣವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.