ADVERTISEMENT

ನಾನೇ ಕಾಂಗ್ರೆಸ್‌ ಅಭ್ಯರ್ಥಿ–ಪುಟ್ಟೇಗೌಡ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2017, 6:19 IST
Last Updated 26 ನವೆಂಬರ್ 2017, 6:19 IST
ಶ್ರೀರಂಗಪಟ್ಟಣ ತಾಲ್ಲೂಕಿನ ಬಾಬುರಾಯನಕೊಪ್ಪಲು ಗ್ರಾಮದಲ್ಲಿ ಶುಕ್ರವಾರ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ‘ಮನೆ ಮನೆಗೆ ಕಾಂಗ್ರೆಸ್‌ ಸರ್ಕಾರದ ಸಾಧನೆಗಳು’ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪ್ರಚಾರ ನಡೆಸಿದರು
ಶ್ರೀರಂಗಪಟ್ಟಣ ತಾಲ್ಲೂಕಿನ ಬಾಬುರಾಯನಕೊಪ್ಪಲು ಗ್ರಾಮದಲ್ಲಿ ಶುಕ್ರವಾರ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ‘ಮನೆ ಮನೆಗೆ ಕಾಂಗ್ರೆಸ್‌ ಸರ್ಕಾರದ ಸಾಧನೆಗಳು’ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪ್ರಚಾರ ನಡೆಸಿದರು   

ಶ್ರೀರಂಗಪಟ್ಟಣ: ‘2018ರ ವಿಧಾನಸಭೆ ಚುನಾವಣೆಗೆ ಈ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ಪಡೆದು ಸ್ಪರ್ಧಿಸಲಿದ್ದೇನೆ’ ಎಂದು ಕಾಂಗ್ರೆಸ್‌ ಮಾಧ್ಯಮ ವಿಭಾಗದ ಜಿಲ್ಲಾ ಸಂಚಾಲಕ ಎಂ.ಪುಟ್ಟೇಗೌಡ ವಿಶ್ವಾಸ ವ್ಯಕ್ತಪಡಿಸಿದರು.

ತಾಲ್ಲೂಕಿನ ಕಿರಂಗೂರು, ಬಾಬುರಾಯನಕೊಪ್ಪಲು, ಬಲ್ಲೇನಹಳ್ಳಿ, ಚಂದಗಿರಿಕೊಪ್ಪಲು ಗ್ರಾಮಗಳಲ್ಲಿ ಶುಕ್ರವಾರ ನಡೆದ ‘ಮನೆ ಮನೆಗೆ ಕಾಂಗ್ರೆಸ್‌ ಸರ್ಕಾರದ ಸಾಧನೆಗಳು’ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಡೆದ ಪ್ರಚಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

‘ಬೇರೆ ಪಕ್ಷದಲ್ಲಿ ಬಂಡೆದ್ದ ಶಾಸಕರೊಬ್ಬರು ಕಾಂಗ್ರೆಸ್‌ನಿಂದ ಸ್ಪರ್ಧಿಸುವುದಾಗಿ ಹೋದೆಡೆಗಳಲ್ಲಿ ಹೇಳುತ್ತಿದ್ದಾರೆ. ಕಾಂಗ್ರೆಸ್‌ ಕಾರ್ಯ ಕರ್ತರು ಅವರನ್ನು ಒಪ್ಪಿಕೊಳ್ಳುವುದಿಲ್ಲ. ಇಷ್ಟಕ್ಕೂ ಕಾಂಗ್ರೆಸ್‌ ಪಕ್ಷಕ್ಕೆ ಅವರ ಕೊಡುಗೆಯೇನು’ ಎಂದು ಪರೋಕ್ಷವಾಗಿ ಶಾಸಕ ಬಂಡಿಸಿದ್ದೇಗೌಡ ಅವರ ವಿರುದ್ಧ ಹರಿಹಾಯ್ದರು.

ADVERTISEMENT

‘25 ವರ್ಷಗಳಿಂದ ಕಾಂಗ್ರೆಸ್‌ಗಾಗಿ ದುಡಿದಿದ್ದೇನೆ. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷನಾಗಿ ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸಿದ್ದೇನೆ. ಗ್ರಾಮೀಣ ಪ್ರದೇಶಗಳಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಮುಂಚೂಣಿ ಘಟಕಗಳ ಪದಾಧಿಕಾರಿಗಳ ಜತೆಗೂಡಿ ಕಾಂಗ್ರೆಸ್‌ ಕೊಡುಗೆಗಳನ್ನು ವ್ಯಾಪಕ ಪ್ರಚಾರ ಮಾಡಿದ್ದೇನೆ. ಹಾಗಾಗಿ ಈ ಬಾರಿ ನಾನು ಕಾಂಗ್ರೆಸ್‌ ಟಿಕೆಟ್‌ನಿಂದಲೇ ಚುನಾವಣೆಗೆ ಸ್ಪರ್ಧಿಸುತ್ತೇನೆ’ ಎಂದು ಹೇಳಿದರು.

ಬ್ಲಾಕ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಎನ್‌.ಗಂಗಾಧರ್‌ ಮಾತನಾಡಿ, ‘ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷ ಸಾಕಷ್ಟು ಶಕ್ತಿಯುತವಾಗಿದೆ. ಸಿದ್ದರಾಮಯ್ಯ ಅವರ ಸರ್ಕಾರ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲ ಭರವಸೆಗಳನ್ನು ಈಡೇರಿಸಿ ಜನ ಮೆಚ್ಚುಗೆ ಗಳಿಸಿದೆ’ ಎಂದರು.

ಬ್ಲಾಕ್‌ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಎಚ್‌.ಎಂ.ಮಹೇಶ್‌, ಜಿಲ್ಲಾ ಪರಿಷತ್‌ ಮಾಜಿ ಸದಸ್ಯ ಮಹದೇವಪುರ ಗುರುಲಿಂಗೇ ಗೌಡ, ಕೃಷಿಕ ಸಮಾಜದ ಜಿಲ್ಲಾ ಪ್ರತಿ ನಿಧಿ ಬಿ.ಎಂ.ಸುಬ್ರಹ್ಮಣ್ಯ, ಬಿ.ಜೆ.ಕೃಷ್ಣೇಗೌಡ, ಮಾಜಿ ಚೇರ್ಮನ್‌ ಜಯರಾಂ, ವಿ.ನಾರಾಯಣ, ರಾಘು, ಸಯ್ಯದ್‌ ಕಾಬೂಲ್‌, ಚನ್ನನಕೆರೆ ರಾಮು, ಸಿದ್ದಮಾದಯ್ಯ, ಪಟೇಲ್‌ ರಾಮಕೃಷ್ಣೇಗೌಡ, ಕೂಡಲಕುಪ್ಪೆ ಗೋಪಾಲ್‌, ನಾಗರಾಜು, ಯುವ ಕಾಂಗ್ರೆಸ್‌ ಉಪಾಧ್ಯಕ್ಷ ದಿಲೀಪ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.