ADVERTISEMENT

ಪ್ರಚಾರ ಸಭೆಗೆ ಚಲುವರಾಯಸ್ವಾಮಿ ಗೈರು

ಮಂಡ್ಯ: ಶಾಸಕ ಎನ್‌.ಚಲುವರಾಯಸ್ವಾಮಿ ಬೆಂಬಲಿಗ ಬಿಜೆಪಿ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 31 ಮೇ 2016, 5:29 IST
Last Updated 31 ಮೇ 2016, 5:29 IST
ಮಂಡ್ಯದಲ್ಲಿ ಸೋಮವಾರ ನಡೆದ ದಕ್ಷಿಣ ಪದವೀಧರರ ಕ್ಷೇತ್ರದ ಪ್ರಚಾರ ಸಭೆಯಲ್ಲಿ ಜೆಡಿಎಸ್‌ ಮುಖಂಡ ವಿ.ಕೆ.ಜಗದೀಶ್‌ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು
ಮಂಡ್ಯದಲ್ಲಿ ಸೋಮವಾರ ನಡೆದ ದಕ್ಷಿಣ ಪದವೀಧರರ ಕ್ಷೇತ್ರದ ಪ್ರಚಾರ ಸಭೆಯಲ್ಲಿ ಜೆಡಿಎಸ್‌ ಮುಖಂಡ ವಿ.ಕೆ.ಜಗದೀಶ್‌ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು   

ಮಂಡ್ಯ: ನಗರದಲ್ಲಿ ಸೋಮವಾರ ನಡೆದ ಜೆಡಿಎಸ್‌ ಪಕ್ಷದ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ಶಾಸಕ ಎನ್‌.ಚಲುವರಾಸ್ವಾಮಿ ಗೈರು ಹಾಜರಾದರೆ, ಇನ್ನೊಂದೆಡೆ ನಡೆದ ಬಿಜೆಪಿ ಪಕ್ಷದ ಪ್ರಚಾರ ಸಭೆಯಲ್ಲಿ ಅವರ ಬೆಂಬಲಿಗ ವಿ.ಕೆ.ಜಗದೀಶ್‌ ಬಿಜೆಪಿಗೆ ಸೇರ್ಪಡೆಗೊಂಡರು.

ಜೆಡಿಎಸ್ ಅಭ್ಯರ್ಥಿ ಕೆ.ಟಿ.ಶ್ರೀಕಂಠೇಗೌಡ ಅವರ ಪ್ರಚಾರ ಸಭೆಯಲ್ಲಿ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಭಾಗ ವಹಿಸಿದ್ದರು. ಜಿಲ್ಲೆಯಲ್ಲಿ ನಡೆದ ಸಭೆಯಲ್ಲಿ ಶಾಸಕ ಎನ್‌.ಚಲುವರಾಯಸ್ವಾಮಿ ಗೈರು ಹಾಜರಾಗಿದ್ದು ಚರ್ಚೆಗೆ ಗ್ರಾಸವಾಗಿತ್ತು.

ನಗರದ ಕಲಾಮಂದಿರದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಜೆಡಿಎಸ್‌ ಶಾಸಕ ಎನ್‌.ಚಲುವರಾಯಸ್ವಾಮಿ ಅವರ ಕಟ್ಟಾ ಬೆಂಬಲಿಗ, ದಕ್ಷಿಣ ಪದವೀಧರರ ಕ್ಷೇತ್ರದ ಆಕಾಂಕ್ಷಿಯಾಗಿದ್ದ ವಿ.ಕೆ.ಜಗದೀಶ್‌ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.

ದಕ್ಷಿಣ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ ಅವರ ಪ್ರಚಾರ ಸಭೆಯಲ್ಲಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ರಾಜ್ಯ ಸರ್ಕಾರ ಉತ್ತಮ ಆಡಳಿತ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಟೀಕಿಸಿದರು.

ಬಿಜೆಪಿ ಸೇರ್ಪಡೆಗೊಂಡು ಮಾತನಾಡಿದ ವಿ.ಕೆ.ಜಗದೀಶ್‌, ಶಾಸಕ ಎನ್‌.ಚಲುವರಾಯಸ್ವಾಮಿ ಹಾಗೂ ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ಅವರ ಮಾರ್ಗದರ್ಶನದ ಮೇರೆಗೆ ಬಿಜೆಪಿ ಸೇರ್ಪಡೆಯಾಗುತ್ತಿದ್ದೇನೆ ಎಂದರು.

ಜೆಡಿಎಸ್‌ ಪಕ್ಷದಲ್ಲಿ ನಾಯಕರನ್ನು ಬೆಳೆಸುವುದಿಲ್ಲ. ಪಕ್ಷದಲ್ಲಿರುವ ಜೆಡಿಎಸ್‌ ನಾಯಕರು ಈಗಲಾದರೂ ಎಚ್ಚೆತ್ತುಕೊಳ್ಳಬೇಕು. ಶಾಸಕ ಎನ್‌.ಚಲುವರಾಯಸ್ವಾಮಿ ಹಾಗೂ ಅವರ ಬೆಂಬಲಿಗರು ಬೆಳೆಯುತ್ತಾರೆ ಎಂಬ ಕಾರಣಕ್ಕೆ ಟಿಕೆಟ್‌ ನಿರಾಕರಿಸಲಾಯಿತು ಎಂದು ಟೀಕಿಸಿದರು.

‘30 ವರ್ಷ ಜೆಡಿಎಸ್‌ ಪಕ್ಷದಲ್ಲಿ ದುಡಿದಿದ್ದೆ. ಟಿಕೆಟ್‌ ನೀಡುವ ವಿಷಯದಲ್ಲಿ ಅನ್ಯಾಯ ಮಾಡಲಾಯಿತು. ಬಿಜೆಪಿ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರಿಗೂ
ಅವಕಾಶ ಮಾಡಿಕೊಡಲಾಗುತ್ತದೆ. ಹಾಗಾಗಿ ಜೆಡಿಎಸ್‌ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದೇನೆ ಎಂದರು.

ಕೆಪಿಸಿಸಿ ಸದಸ್ಯ ಸೇರ್ಪಡೆ:  ಕಾಂಗ್ರೆಸ್‌ ಪಕ್ಷದ ಕೆಪಿಸಿಸಿ ಸದಸ್ಯ, ದಕ್ಷಿಣ ಪದವೀಧರರ ಕ್ಷೇತ್ರದ ಆಕಾಂಕ್ಷಿಯಾಗಿದ್ದ ಯಮದೂರು ಸಿದ್ದರಾಜು ಅವರೂ ಬಿಜೆಪಿ ಸೇರ್ಪಡೆಗೊಂಡರು. ನಂತರ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದಲ್ಲಿ ಅನ್ಯಾಯವಾಗಿದೆ. ಕ್ರಿಮಿನಲ್‌ ಹಿನ್ನಲೆಯುಳ್ಳವರಿಗೆ ಕಾಂಗ್ರೆಸ್‌ನಲ್ಲಿ ಟಿಕೆಟ್‌ ನೀಡಲಾಗಿದೆ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.