ADVERTISEMENT

  ಪ್ರಚೋದನಾಕಾರಿ ಹೇಳಿಕೆ; ಕ್ರಮಕ್ಕೆ ಜೆಡಿಎಸ್ ಆಗ್ರಹ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2018, 12:40 IST
Last Updated 13 ಏಪ್ರಿಲ್ 2018, 12:40 IST

ನಾಗಮಂಗಲ: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಚಲುವರಾಯಸ್ವಾಮಿ ಅವರ ಪರವಾಗಿ ಪ್ರಚಾರ ಮಾಡುತ್ತಿರುವ ಮಹೇಂದ್ರಕುಮಾರ್‌ ಗೌಡ ಅವರು ಕ್ಷೇತ್ರದಲ್ಲಿ ಪ್ರಚೋದನಾಕಾರಿಯಾಗಿ ಮಾತನಾಡುತ್ತಿದ್ದಾರೆ. ಈ ಮೂಲಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುತ್ತಿದ್ದಾರೆ. ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜೆಡಿಎಸ್‌ನ ತಾಲ್ಲೂಕು ಘಟಕ ಚುನಾವಣಾಧಿಕಾರಿಗೆ ದೂರು ನೀಡಿದೆ.

ಪಟ್ಟಣದ ಮಿನಿವಿಧಾನಸೌಧದ ಕಚೇರಿಯಲ್ಲಿ ಚುನಾವಣಾಧಿಕಾರಿ ಆರ್.ಯಶೋದಾ ಅವರನ್ನು ಗುರುವಾರ ಭೇಟಿ ಮಾಡಿದ ತಾಲ್ಲೂಕು ಪಂಚಾಯಿತಿ ಸದಸ್ಯರಾದ ಎಸ್.ಕೆ.ಹೇಮರಾಜು, ಮೈತ್ರಿಕೃಷ್ಣೇಗೌಡ ಮತ್ತು ಗ್ರಾಮ ಪಂಚಾಯಿತಿ ಸದಸ್ಯ ನಿತೀಶ್ ದೂರು ಸಲ್ಲಿಸಿದರು.

ಚಿಕ್ಕಮಗಳೂರು ಜಿಲ್ಲೆಯ ನಿವಾಸಿ ಮಹೇಂದ್ರಕುಮಾರ್‌ ಗೌಡ ಅವರು ತಾಲ್ಲೂಕಿನ, ದೇವಲಾಪುರ ಹೋಬಳಿ ಬಿಂಡೇನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎನ್.ಚಲುವರಾಯಸ್ವಾಮಿ ಪರ ಪ್ರಚಾರ ಮಾಡುತ್ತಾ, ತಾಲ್ಲೂಕಿನ ಜನರ ಬಗ್ಗೆ ಮತ್ತು ಜೆಡಿಎಸ್ ಅಭ್ಯರ್ಥಿ ಸುರೇಶ್ ಗೌಡ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾಡಿರುವ ಭಾಷಣದ ತುಣುಕುಗಳು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದೆ. ಇದರಿಂದ ಕ್ಷೇತ್ರದಲ್ಲಿ ಗಲಭೆ ಮತ್ತು ಘರ್ಷಣೆಗೆ ಅವಕಾಶ ಕಲ್ಪಿಸಿದಂತಾಗುತ್ತದೆ ಎಂದು ಅವರು ಆರೋಪಿಸಿದ್ದಾರೆ.

ADVERTISEMENT

ಅಂದಿನ ಸಭೆಯಲ್ಲಿ ಚಲುವರಾಯಸ್ವಾಮಿ ಅವರ ಪುತ್ರ ಸಚ್ಚಿನ್ ಮತ್ತು ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಎನ್.ಜೆ.ರಾಜೇಶ್ ಮಹೇಂದ್ರಕುಮಾರ್ ಗೌಡ ಅವರ ಮಾತುಗಳಿಗೆ ಪ್ರೋತ್ಸಾಹ ನೀಡಿದ್ದಾರೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.