ADVERTISEMENT

ಲಸಿಕೆ: ವದಂತಿಗೆ ಕಿವಿಗೊಡಬೇಡಿ

ಯಾವುದೇ ಅಡ್ಡಪರಿಣಾಮ ಇಲ್ಲ * ಎಲ್ಲರ ಸಹಕಾರ ಅಗತ್ಯ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2017, 7:48 IST
Last Updated 8 ಫೆಬ್ರುವರಿ 2017, 7:48 IST

ಮಡಿಕೇರಿ: ವದಂತಿಗಳಿಗೆ ಕಿವಿಗೊಡದೆ 9 ತಿಂಗಳಿಂದ 15 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ದಡಾರ, ರುಬೆಲ್ಲಾ ಲಸಿಕೆ ಹಾಕಿಸಿ ಅಭಿಯಾನಕ್ಕೆ ಕೈಜೋಡಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಒ.ಆರ್. ಶ್ರೀರಂಗಪ್ಪ ಮನವಿ ಮಾಡಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಲಸಿಕೆ ಹಾಕಿಸುವುದರಿಂದ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ. ದಡಾರ, ರುಬೆಲ್ಲಾದಂತಹ ರೋಗಗಳನ್ನು ನಿಯಂತ್ರಿಸಲು ಲಸಿಕೆಯನ್ನು ಮಕ್ಕಳಿಗೆ ಹಾಕಿಸುವುದು ಅಗತ್ಯವಾಗಿದೆ ಎಂದು ಹೇಳಿದರು.

2020ರೊಳಗೆ ದಡಾರ– ರುಬೆಲ್ಲಾ ರೋಗವನ್ನು ನಿರ್ಮೂಲನೆ ಮಾಡಲು ದೇಶ ಸನ್ನದ್ಧವಾಗುತ್ತಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಿದಾಗ ಮಾತ್ರ ಯಶಸ್ಸುಗೊಳಿಸಲು ಸಾಧ್ಯ ಎಂದು ಹೇಳಿದರು.

ಡಾ.ಅಬ್ದುಲ್ ಅಜೀಜ್ ಮಾತನಾಡಿ, ಪೋಷಕರು ಭಯಪಡುವ ಅಗತ್ಯವಿಲ್ಲ. ಊಹಾಪೋಹಗಳಿಗೆ ಕಿವಿಗೊಡದೆ ಅಭಿಯಾನದಲ್ಲಿ ಪಾಲ್ಗೊಂಡು ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ಕರೆ ನೀಡಿದರು.

ಆರ್‌ಸಿಎಚ್ ಅಧಿಕಾರಿ ಡಾ.ನೀಲೇಶ್ ಮಾತನಾಡಿ, ಜಿಲ್ಲೆಯಲ್ಲಿ 1.21 ಲಕ್ಷ ಮಕ್ಕಳಗೆ ದಡಾರ ರುಬೆಲ್ಲಾ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಫೆ.28ರವರೆಗೆ ಈ ಅಭಿಯಾನ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಅಭಿಯಾನಕ್ಕೆ ಚಾಲನೆ: ಇದಕ್ಕೂ ಮೊದಲು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಭಿಯಾನಕ್ಕೆ ಚಾಲನೆ ದೊರೆಯಿತು. ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಮಾತನಾಡಿ, ಅಭಿಯಾನವು 21 ದಿನಗಳಕಾಲ ನಡೆಯಲಿದೆ. ಈ ಅಭಿಯಾನಕ್ಕೆ ಸಾರ್ವಜನಿಕರು, ಪೋಷಕರು ಸಹಕರಿಸಿ ಎಂದು ಕೋರಿದರು. 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಒ.ಆರ್. ಶ್ರೀರಂಗಪ್ಪ, ದಡಾರ– ರುಬೆಲ್ಲಾ ಅಭಿಯಾನ ಬಗ್ಗೆ ಹಲವು ಮಾಹಿತಿ ನೀಡಿ ಸಾರ್ವಜನಿಕ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ, ಕಾರ್ಮಿಕ ಇಲಾಖೆಗಳು ಹಾಗೂ ಸ್ಥಳೀಯ ಸಂಸ್ಥೆಗಳ ಸಹಕಾರ ಹೆಚ್ಚಿನದ್ದಾಗಿದೆ ಎಂದು ಹೇಳಿದರು.  

ಆರ್‌ಸಿಎಚ್ ಅಧಿಕಾರಿ ಡಾ.ನಿಲೇಶ್, ಆರಂಭಿಕ ಹಂತದಲ್ಲಿ ಶಾಲೆಗಳಲ್ಲಿ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ. ನಂತರದ ಎರಡು ವಾರಗಳಲ್ಲಿ ಎಲ್ಲಾ ಆರೋಗ್ಯ ಸಂಸ್ಥೆಗಳು, ಅಂಗನವಾಡಿ ಕೇಂದ್ರಗಳು ಹಾಗೂ ಇನ್ನಿತರ ಪ್ರದೇಶಗಳಲ್ಲಿ ಲಸಿಕಾ ಕೇಂದ್ರ ಆರಂಭಿಸಲಾಗುವುದು ಎಂದು ತಿಳಿಸಿದರು.  

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಆರ್. ಬಸವರಾಜ ಮಾತನಾಡಿ, ಮೂಡನಂಬಿಕೆಗೆ ಬಲಿಯಾಗದೇ ಲಸಿಕೆಯನ್ನು ಎಲ್ಲ ಮಕ್ಕಳು ಹಾಕಿಸಿಕೊಳ್ಳಬೇಕು ಎಂದು ಹೇಳಿದರು. 

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಬೆಳ್ಯಪ್ಪ, ಜಿ.ಪಂ. ಸಿಇಒ ಚಾರುಲತಾ ಸೋಮಲ್, ರಾಜ್ಯ ನೋಡಲ್ ಅಧಿಕಾರಿ ಡಾ.ಪ್ರಕಾಶ, ತಹಶೀಲ್ದಾರ್‌ ಕುಸುಮಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.