ADVERTISEMENT

ನೌಕರಿ ಕಾಯಂಗೊಳಿಸಿ, ಕನಿಷ್ಠ ವೇತನ ಕೊಡಿ

ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 18 ಜನವರಿ 2018, 11:28 IST
Last Updated 18 ಜನವರಿ 2018, 11:28 IST

ಮಂಡ್ಯ: ರಾಜ್ಯದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಕ್ಷರ ದಾಸೋಹ ಕಾರ್ಯಕರ್ತರ ಸೇವೆಯನ್ನು ಕಾಯಂಗೊಳಿಸಿ ಕನಿಷ್ಠ ವೇತನ ಯೋಜನೆ ಜಾರಿಗಳಿಸಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಎಐಯುಟಿಯುಸಿ ನೇತೃತ್ವದಲ್ಲಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಸಂಘ, ಅಕ್ಷರ ದಾಸೋಹ ಸಂಘದ ಸಾವಿರಾರು ಮಹಿಳೆಯರು ಜಿಲ್ಲಾಧಿಕಾರಿ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ಕೋಟ್ಯಂತರ ಮಹಿಳೆಯರು ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಅವರನ್ನು ನೌಕರರು ಎಂದು ಪರಿಗಣಿಸದೆ ಕೇವಲ ಕಾರ್ಯಕರ್ತರು ಎಂದು ಕರೆಯಲಾಗುತ್ತಿದೆ. ಹೀಗಾಗಿ ಅವರು ಕನಿಷ್ಠ ವೇತನದಿಂದ ವಂಚಿತರಾಗಿದ್ದಾರೆ. ರಾಜ್ಯದ 27 ಲಕ್ಷ ಮಹಿಳೆಯರು ವಿವಿಧ ಯೋಜನೆಗಳ ಅಡಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ. ಈ ಕಾರ್ಯಕರ್ತೆಯರಿಂದಲೇ ಸರ್ಕಾರದ ಯೋಜನೆಗಳು ಫಲಾನುಭವಿಗಳಿಗೆ ತಲುಪುತ್ತಿವೆ. ಆದರೆ ಸರ್ಕಾರ ಅವರಿಗೆ ಸೌಲಭ್ಯ ನೀಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ADVERTISEMENT

ಅಂಗನವಾಡಿ ಕಾರ್ಯಕರ್ತರು 40 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಆಶಾ ಕಾರ್ಯಕರ್ತೆಯರು 10 ವರ್ಷಗಳಿಂದ, ಬಿಸಿಯೂಟ ಕಾರ್ಯಕರ್ತೆಯರು 20 ವರ್ಷಗಳಿಂದ ದುಡಿಯುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಅವರ ಸೇವೆಯನ್ನು ಕಾಯಂಗೊಳಿಸಿಲ್ಲ. ಅವರಿಗೆ ಯಾವುದೇ ಸಾಮಾಜಿಕ ಭದ್ರತೆ ನೀಡಿಲ್ಲ. ಕೇವಲ ಗೌರವಧನದ ಹೆಸರಿನಲ್ಲಿ ಕಾರ್ಯಕರ್ತೆಯರ ಸೇವೆಯನ್ನು ಕಿತ್ತುಕೊಳ್ಳಲಾಗುತ್ತಿದೆ. ಈ ಬೆಲೆ ಏರಿಕೆಯ ದಿನಗಳಲ್ಲಿ ಗೌರವಧನದಿಂದ ಬದುಕಲು ಸಾಧ್ಯವಾಗುತ್ತಿಲ್ಲ ಹೀಗಾಗಿ ಅವರ ಸೇವೆಯನ್ನು ಕಾಯಂಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಐಯುಟಿಯುಸಿ ರಾಜ್ಯ ಘಟಕದ ಉಪಾಧ್ಯಕ್ಷ ಶಶಿಧರ್‌, ಸದಸ್ಯರಾದ ರಮಾ, ಜ್ಯೋತಿ, ಪುಷ್ಪಾ, ಅನಿತಾ, ಶೋಭಾ, ಪಾರ್ವತಿ, ಲಕ್ಷ್ಮಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.