ADVERTISEMENT

ತಳ್ಳುವ ಬಂಡಿಗಳೊಂದಿಗೆ ವ್ಯಾಪಾರಿಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಮೇ 2017, 6:17 IST
Last Updated 21 ಮೇ 2017, 6:17 IST

ರಾಯಚೂರು: ರಸ್ತೆ ಬದಿಯಲ್ಲಿ ವ್ಯಾಪಾರ ನಡೆಸುವ ಸಣ್ಣ ವ್ಯಾಪಾರಿಗಳನ್ನು ತೆರವುಗೊಳಿಸುವುದು ನಿಲ್ಲಿಸಬೇಕು ಎಂದು ಒತ್ತಾಯಿಸಿ ಹೈದರಾಬಾದ್ ಕರ್ನಾಟಕ ಬೀದಿ ವ್ಯಾಪಾರಿಗಳ ಸಂಘದ ಸದಸ್ಯರು ಶನಿವಾರ ಪ್ರತಿಭಟನೆ ನಡೆಸಿದರು.

ನಗರದ ಬಾಬು ಜಗಜೀವನರಾಮ್‌ ವೃತ್ತದಿಂದ ತಳ್ಳುವ ಬಂಡಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್‍ಯಾಲಿ ನಡೆಸಿದ ವ್ಯಾಪಾರಸ್ಥರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ನಗರಸಭೆ ಏಕಾಏಕಿ ರಸ್ತೆ ಬದಿಯ ವ್ಯಾಪಾರಿಗಳನ್ನು ತೆರವುಗೊಳಿಸುವುದರಿಂದ ರಸ್ತೆ ಬದಿಯಲ್ಲಿ ವ್ಯಾಪಾರ ನಡೆಸಿಕೊಂಡು ಜೀವನ ಸಾಗಿಸುವ ಕುಟುಂಬಗಳಿಗೆ ತೊಂದರೆಯಾಗಿದೆ ಎಂದು ಆರೋಪಿಸಿದರು.

ಜಿಲ್ಲಾಧಿಕಾರಿ ಹಾಗೂ ಶಾಸಕರ ಹೆಸರು ಹೇಳಿಕೊಂಡು ನಗರಸಭೆ ರಸ್ತೆ ಬದಿ ವ್ಯಾಪಾರ ನಡೆಸುವ ವ್ಯಾಪಾರಿಗಳನ್ನು ತೆರವುಗೊಳಿಸುವ ಮೂಲಕ ಬೀದಿಗೆ ತಳ್ಳಿದೆ. ರಸ್ತೆ ಬದಿ ವ್ಯಾಪಾರ ನಡೆಸುವ ವ್ಯಾಪಾರಿಗಳ ಹಕ್ಕುಗಳನ್ನು ಗಾಳಿಗೆ ತೂರಿ ವ್ಯಾಪಾರಿಗಳ ಹೊಟ್ಟೆ ಮೇಲೆ ಬರೆ ಎಳೆದಿದೆ ಎಂದು ದೂರಿದರು.

ADVERTISEMENT

ರಸ್ತೆ ಬದಿ ವ್ಯಾಪಾರ ನಡೆಸುವ ವ್ಯಾಪಾರಿಗಳಿಗೆ ನಗರಸಭೆಯಿಂದ ಗುರುತಿನ ಚೀಟಿ ವಿತರಣೆ ಮಾಡಲಾಗಿದೆ. ಆದರೂ, ಇದ್ಯಾವುದನ್ನು ಲೆಕ್ಕಿಸದೆ ನಗರಸಭೆ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸಿದೆ. ಇದರಿಂದ ಬಡ ಕುಟುಂಬಗಳು ಜೀವನ ನಡೆಸುವುದು ಕಷ್ಟವಾಗಿದೆ. ಪ್ರತಿ ಎರಡು ತಿಂಗಳಿಗೊಮ್ಮೆ ಈ ರೀತಿ ರಸ್ತೆ ಬದಿಯ ವ್ಯಾಪಾರಿಗಳನ್ನು ತೆರವುಗೊಳಿಸಿ ತೊಂದರೆ ನೀಡಲಾಗುತ್ತಿದೆ ಎಂದು ಅಸಮಾಧಾನ ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆ ಬದಿ ವ್ಯಾಪಾರಸ್ಥರಿಗೆ ಅನುಕೂಲ ಕಲ್ಪಿಸಲು ಪ್ರತ್ಯೇಕ ಕಾನೂನು ರಚಿಸಬೇಕು. 2014ರ ಕಾಯ್ದೆ ಪ್ರಕಾರ ಸಮಿತಿ ರಚನೆ ಮಾಡಿ ವ್ಯಾಪಾರಿಗಳು ಒಳ್ಳೆಯ ಜೀವನ ನಡೆಸಲು ಅವಕಾಶ ಮಾಡಿಕೊಡಬೇಕು. ನಗರಸಭೆಯ ಕಿರುಕುಳದಿಂದ ವ್ಯಾಪಾರಸ್ಥರನ್ನು ರಕ್ಷಣೆ ಮಾಡಬೇಕು ಎಂದು ಮನವಿ ಮಾಡಿದರು. ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಸೈಯದ್ ಮಹ್ಮದ್, ಶೇಕ್ಷಾವಲಿ, ಚಂದ್ರಕಾಂತ, ಅಬ್ದುಲ್ ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.