ADVERTISEMENT

ಮಕ್ಕಳಲ್ಲಿ ಸ್ಪರ್ಧಾ ಮನೋಭಾವ ಬೆಳೆಸಲು ಸಲಹೆ

​ಪ್ರಜಾವಾಣಿ ವಾರ್ತೆ
Published 11 ಜನವರಿ 2017, 6:07 IST
Last Updated 11 ಜನವರಿ 2017, 6:07 IST

ರಾಯಚೂರು: ಇಂದಿನ ದಿನಮಾನಕ್ಕೆ ತಕ್ಕಂತೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಕ್ಕಳಲ್ಲಿ ಸ್ಪರ್ಧಾ ಮನೋಭಾವವನ್ನು ಬೆಳೆಸುವ ಮಹತ್ವದ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದ ಶಾಸಕ ಡಾ.ಎಸ್‌.ಶಿವರಾಜ ಪಾಟೀಲ್‌ ಹೇಳಿದರು.

ಕರ್ನಾಟಕ ರಾಜ್ಯ ಪ್ರೌಢ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ವತಿಯಿಂದ ಭಾನುವಾರ ಆಯೋಜಿಸಿದ್ದ ತಾಲ್ಲೂಕು ಘಟಕದ ಎರಡನೇ ವಾರ್ಷಿಕೋತ್ಸವ ಹಾಗೂ ಕ್ಯಾಲೆಂಡರ್‌ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ ವಿದ್ಯಮಾನದಲ್ಲಿನ ಬದಲಾವಣೆ ಅನುಗುಣವಾಗಿ ಶಿಕ್ಷಕರು ಬೋಧನೆ ಕ್ರಮವನ್ನು ಬದಲಾಯಿಸಿಕೊಂಡು ಉತ್ತಮ ಶಿಕ್ಷಣ ನೀಡಬೇಕು. ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಸರ್ಕಾರದ ಗಮನತರುವ ಕಾರ್ಯ ಮಾಡಲಾಗುವುದು ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಶರಣಪ್ಪ ಮಟ್ಟೂರು ಮಾತನಾಡಿ, ಈ ಭಾಗದ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗಾಗಿ ಶೌಚಾಲಯಗಳ ಇಲ್ಲದ ಪರಿಸ್ಥಿತಿ ಇದೆ. ಈ ಬಗ್ಗೆ ಕಾಳಜಿ ವಹಿಸಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್ ಸೇಠ್ ಅವರು ಜಿಲ್ಲೆಯ ಶಾಲೆಗಳಿಗೆ ಮೂಲ ಸೌಲಭ್ಯಗಳಿಗಾಗಿ ₹ 1 ಸಾವಿರ ಕೋಟಿ ಅನುದಾನದ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿದ್ದಾರೆ. ವಿಭಾಗಮಟ್ಟದ ವರ್ಗಾವಣೆ ಘಟಕ ಸ್ಥಾಪನೆಗೂ ಭರವಸೆಯನ್ನು ನೀಡಿದ್ದಾರೆ ಎಂದರು.

ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಕೆ ಮಂಜುನಾಥ ಮಾತನಾಡಿ, ಫಲಿತಾಂಶದ ವಿಷಯದಲ್ಲಿ ಶಿಕ್ಷಕರನ್ನು ಮಾತ್ರ ದೂಷಿಸುವುದು ಸರಿಯಲ್ಲ ಎಂದರು.
ಶಿಕ್ಷಣಕ್ಕೆ ಪೂರಕ ವಾತಾವರಣವನ್ನು ಸೃಷ್ಟಿಸುವ ಕ್ರಮವನ್ನೂ ಸರ್ಕಾರ ಮಾಡಬೇಕು. ಶಿಕ್ಷಕರನ್ನು ಶೈಕ್ಷಣಿಕೇತರ ಚಟುವಟಿಕೆಗಳಿಗೆ ನಿಯೋಜನೆ ಮಾಡುವುದನ್ನು ಬಿಡಬೇಕು. ಅಂತರ ಜಿಲ್ಲೆಗಳ ವರ್ಗಾವಣೆ ಮಾಡಬೇಕು ಎಂದು ಮನವಿ ಮಾಡಿದರು.

ಶಿಕ್ಷಕರ ಸಂಘಗಳು ಜಾಗೃತರಾಗಬೇಕು. ಶಿಕ್ಷಕರು ಮೌಲ್ಯಮಾಪನವನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು ಎಂದು ಸಲಹೆ ನೀಡಿದರು. ಈ ಕಾರ್ಯಕ್ರಮದಲ್ಲಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ಧಣ್ಣ ಪೂಜಾರಿ, ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಮಹಬೂಬ್ ಪಾಷಾ ಮೂಲಿಮನಿ, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಯ್ಯದ್ ಸಿರಾಜ್ ಹುಸೇನ್, ರಾಜ್ಯ ಉಪಾಧ್ಯಕ್ಷ ಮಲ್ಲಯ್ಯ, ವಿಭಾಗೀಯ ಉಪಾಧ್ಯಕ್ಷ ಮಹಾದೇವಪ್ಪ ತಾಲ್ಲೂಕು ಘಟಕದ ಅಧ್ಯಕ್ಷ ಮೈನೂಲ್ ಹಕ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.