ADVERTISEMENT

₹1ಕೋಟಿ ಕ್ರಿಯಾಯೋಜನೆಗೆ ಅನುಮೋದನೆ

​ಪ್ರಜಾವಾಣಿ ವಾರ್ತೆ
Published 25 ಮೇ 2017, 6:51 IST
Last Updated 25 ಮೇ 2017, 6:51 IST

ಮಾನ್ವಿ: ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ತಾಲ್ಲೂಕು ಪಂಚಾಯಿತಿಗೆ ಮಂಜೂರಾದ  ₹1ಕೋಟಿ  ಅನುದಾನದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಯಿತು.

ಸದಸ್ಯ ಸಂತೋಷ ರಾಜಗುರು ಮಾತನಾಡಿ, “ತಾಲ್ಲೂಕಿನ ಇರಕಲ್‌ ಗ್ರಾಮದ ಬಳಿ 24ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ₹18ಕೋಟಿ ಮೊತ್ತದ ಕಾಮಗಾರಿಯಲ್ಲಿ ಅವ್ಯವಹಾರ  ನಡೆದಿದೆ. ಕೆರೆ ನಿರ್ಮಾಣ ಹಾಗೂ ಪೈಪ್‌ಲೈನ್‌ ಅಳವಡಿಕೆಯಲ್ಲಿ ಕಳಪೆ ಕಾಮಗಾರಿ ನಿರ್ವಹಿಸಿದ್ದು, ಗ್ರಾಮಗಳಿಗೆ ಸಮರ್ಪಕ ಕುಡಿಯುವ ನೀರು ಒದಗಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ’ ಎಂದು ದೂರಿದರು.

ಸದಸ್ಯ ಶಾಂತಪ್ಪ ಕಪಗಲ್‌ ಮಾತನಾಡಿ, ‘ಎರಡು ತಿಂಗಳ ಹಿಂದೆ ಕುರ್ಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೀಠೋಪಕರಣಗಳ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಿಸುವಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಯ ನಿರ್ಲಕ್ಷ್ಯ ಧೋರಣೆ ಅನುಸರಿಸಿದ್ದಾರೆ ಎಂದು ಆರೋಪಿಸಿದರು.

ಸದಸ್ಯ ಮಲ್ಲಿಕಾರ್ಜುನ ವಾಲ್ಮೀಕಿ ಮಾತನಾಡಿ, ಮಲ್ಲಟ ಕ್ಷೇತ್ರ ವ್ಯಾಪ್ತಿಯಲ್ಲಿ ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡಿರುವ ಫಲಾನುಭವಿಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ದೊಡ್ಡಮನಿ ಮಾತನಾಡಿ, ಮೇ29ರಿಂದ ಶೈಕ್ಷಣಿಕ ಕಾರ್ಯಚಟುವಟಿಕೆಗಳು ಆರಂಭವಾಗಲಿವೆ ಎಂದು ತಿಳಿಸಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಚಂದ್ರಶೇಖರಯ್ಯ ಮಾತನಾಡಿ, ‘ಸಾರಿಗೆ ಸೌಲಭ್ಯವಿಲ್ಲದ ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯಕೀಯ ಸೇವೆ ನೀಡಲು ಮೇ 1ರಿಂದ ತಜ್ಞ ವೈದ್ಯರು ಇರುವ ಮೊಬೈಲ್‌ ಅಂಬುಲೆನ್ಸ್‌ ಸೇವೆ ಆರಂಭವಾಗಿದೆ’ ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಶರಣಮ್ಮ ಮುದಿಗೌಡ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಮಲ್ಲಪ್ಪ ಖರಾಬದಿನ್ನಿ, ಕಾರ್ಯನಿರ್ವಾಹಕ ಅಧಿಕಾರಿ ಶರಣಬಸವ ಹಾಗೂ ಸರ್ವ ಸದಸ್ಯರು, ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ವಾಗ್ವಾದ: ಸಭೆಯ ಆರಂಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಶರಣಬಸವ ಚೀಕಲಪರ್ವಿ ಕ್ಷೇತ್ರದ ಸದಸ್ಯೆ ಶೋಭಾ ಅವರ ಪತಿ ಮ್ಯಾಕಲ್‌ ಅಯ್ಯಪ್ಪ ನಾಯಕ ಅವರನ್ನು ಸಭೆಯಿಂದ ಹೊರ ಹೋಗುವಂತೆ ಸೂಚಿಸಿದರು. ಇಬ್ಬರ ನಡುವೆ ವಾಗ್ವಾದ, ಮಾತಿನ ಚಕಮಕಿ  ನಡೆಯಿತು. ಸದಸ್ಯರು ಹಾಗೂ ಸಿಬ್ಬಂದಿ ಸಮಾಧಾನಪಡಿಸಿದ ಬಳಿಕ ಸಭೆಯಿಂದ ಹೊರನಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.