ADVERTISEMENT

371 (ಜೆ) ಕಲಂ ಸದ್ಬಳಕೆಗೆ ಸಲಹೆ

ಪ್ರತಿಭಾ ಪುರಸ್ಕಾರ, ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತಯಾರಿ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 10 ಜುಲೈ 2017, 9:50 IST
Last Updated 10 ಜುಲೈ 2017, 9:50 IST

ರಾಯಚೂರು: ವಾಲ್ಮೀಕಿ ನಾಯಕ ಸಮಾಜ ಎಲ್ಲ ರಂಗಗಳಲ್ಲಿ ಅಭಿವೃದ್ಧಿ ಹೊಂದಲು ಸಮಾಜ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಸಂಸದ ಬಿ.ವಿ.ನಾಯಕ ಹೇಳಿದರು.

ಇಲ್ಲಿನ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮಹರ್ಷಿ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದಿಂದ ಭಾನುವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

‘ಸಮಾಜದ ಅಭಿವೃದ್ಧಿಗೆ ಜನಪ್ರತಿನಿಧಿಗಳು ಸಹಕಾರ ನೀಡಲು ಸಿದ್ಧರಿದ್ದಾರೆ. ಸಮಾಜದಲ್ಲಿನ ಪ್ರತಿಭಾವಂತರಿಗೆ ಪ್ರೋತ್ಸಾಹ ನೀಡಲು ಸರ್ಕಾರಿ ನೌಕರರ ಸಂಘ ಶ್ರಮಿಸುತ್ತಿರುವುದು ಶ್ಲಾಘನೀಯ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಜನಾಂಗದವರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಹಲವು ಕ್ರಮಗಳು ಕೈಗೊಂಡಿದೆ.

ADVERTISEMENT

ಯುಪಿಎ ಸರ್ಕಾರ ಜಾರಿಗೊಳಿಸಿರುವ ಸಂವಿಧಾನದ 371 (ಜೆ) ಕಾಯ್ದೆಯಿಂದ ಹೈದರಾಬಾದ್ ಕರ್ನಾಟಕ ಭಾಗದ ಅಭಿವೃದ್ಧಿಗೆ ಅನುಕೂಲವಾಗಿದೆ. ಈ ಕಾಯ್ದೆಯ ಸದುಪಯೋಗ ಪಡಿಸಿಕೊಳ್ಳಲು ಮುಂದಾಗಬೇಕು’ ಎಂದರು.

‘ನಗರದಲ್ಲಿ ವಾಲ್ಮೀಕಿ ಭವನ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ತ್ವರಿತವಾಗಿ ಪೂರ್ಣಗೊಳಿಸಲು ಪ್ರಯತ್ನಿಸಲಾಗುವುದು. ಇನ್ನುಮುಂದೆ ವಾಲ್ಮೀಕಿ ಜಯಂತಿಯನ್ನು ವಾಲ್ಮೀಕಿ ಭವನದಲ್ಲಿ ಆಚರಣೆ ಮಾಡಲು ಉದ್ದೇಶಿಸಲಾಗಿದೆ’ ಎಂದರು.

ಶಾಸಕ ತಿಪ್ಪರಾಜು ಹವಾಲ್ದಾರ ಮಾತನಾಡಿ, ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣಹೆಚ್ಚಳ ಮಾಡಲು ಸರ್ಕಾರದ ಮೇಲೆ ಒತ್ತಡ ತರಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.

ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ನಾಯಕ ಸಮಾಜದ ವಿದ್ಯಾರ್ಥಿಗಳಿಗೆ ಹಾಗೂ ಕೆಎಎಸ್‌ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಸನ್ಮಾನಿಸಲಾಯಿತು.

ಲಿಂಗಸುಗೂರು ತಾಲ್ಲೂಕಿನ ಗೋಲಪಲ್ಲಿ ವಾಲ್ಮೀಕಿ ಆಶ್ರಮದ ವರದಾನೇಶ್ವರ ಸ್ವಾಮಿ, ಗಾರಲದಿನ್ನಿಯ ಶಿವಾನಂದ ಮಠದ ಮೌನೇಶ ಮಹಾರಾಜ, ಸಿಂಧನೂರಿನ ರಾಜರಾಜೇಶ್ವರಿ ಆಶ್ರಮದ ಶರಣ ನಾಮದೇವಗೌಡ ಸಾನ್ನಿಧ್ಯ ವಹಿಸಿದ್ದರು.

ಸಂಘದ ಜಿಲ್ಲಾ ಘಟಕ ಅಧ್ಯಕ್ಷ ಯಲ್ಲಪ್ಪ ಜಾಲಿಬೆಂಚಿ ಅಧ್ಯಕ್ಷತೆ ವಹಿಸಿದ್ದರು. ಆರ್‌ಟಿಪಿಎಸ್‌ ಮುಖ್ಯ ಎಂಜಿನಿಯರ್ ಪ್ರಭಾಕರ, ಟಿ.ಆರ್ ನಿಂಗಣ್ಣ, ಮಾನ್ವಿ ಸಿಪಿಐ ಚಂದ್ರಶೇಖರ, ದೇವಣ್ಣ ನಾಯಕ ವಕೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.