ADVERTISEMENT

ಕೊಳಚೆ ಮಂಡಳಿ ಎಂಜಿನಿಯರ್‌ಗಳ ಅಮಾನತಿಗೆ ಸಚಿವ ಸೂಚನೆ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2018, 6:53 IST
Last Updated 5 ಫೆಬ್ರುವರಿ 2018, 6:53 IST

ರಾಯಚೂರು: ಕೊಳಚೆ ನಿರ್ಮೂಲನ ಮಂಡಳಿಗೆ ಬಿಡುಗಡೆಯಾದ ₹38 ಕೋಟಿ ಅನುದಾನದಲ್ಲಿ ಕಾಮಗಾರಿ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದ ಕಾರ್ಯನಿರ್ವಾಹಕ ಎಂಜಿನಿಯರ್‌ (ಇಇ) ಹಾಗೂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ (ಎಇಇ) ಅವರನ್ನು ಅಮಾನತುಗೊಳಿಸಲು ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಎಂ.ರೇವಣ್ಣ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಭಾನುವಾರ ಆಯೋಜಿ ಸಿದ್ದ ಅಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ನಗರದಲ್ಲಿ ಇಂದಿರಾ ಕ್ಯಾಂಟಿನ್, ಕ್ರೀಡಾಂಗಣ ಹಾಗೂ ಒಳಚರಂಡಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಶೀಘ್ರದಲ್ಲಿ ಕಾಮಗಾರಿಗಳು ಪೂರ್ಣಗೊಳಿಸಿ ಮುಖ್ಯಮಂತ್ರಿ ಅವರಿಂದ ಉದ್ಘಾಟನೆ ಮಾಡಿಸಲು ಸಿದ್ಧತೆ ಕೂಡ ಮಾಡಲಾಗಿದೆ ಎಂದರು.

ನಗರ ಸೇರಿದಂತೆ ಜಿಲ್ಲೆಯಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳು ಉತ್ತಮವಾಗಿ ನಡೆದಿವೆ. ನರೇಗಾ ಯೋಜನೆಯಡಿ ಮಾನವ ಸಂಪನ್ಮೂಲ ಬಳಕೆ ಮಾಡಿ ಕಾಮಗಾರಿ ನಡೆಸುತ್ತಿರುವುದು ರಾಜ್ಯದಲ್ಲಿ ಮಾದರಿ ಕಾರ್ಯ ನಡೆದಿದೆಎಂದು ತಿಳಿಸಿದರು.

ADVERTISEMENT

ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಗಾಗಿ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲಾಗಿದೆ. ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಭಾವಿಗಳನ್ನು ತ್ವರಿತವಾಗಿ ಕೊರೆಯಲು ಸೂಚಿಸಲಾಗಿದೆ. ಜೆಸ್ಕಾಂ ಅಧಿಕಾರಿಗಳಿಗೆ ವಿದ್ಯುತ್ ಸಂಪರ್ಕ ನೀಡಲು ತಾಕೀತು ಮಾಡಲಾಗಿದೆ ಎಂದು ಹೇಳಿದರು.

ಜಿಲ್ಲೆಗೆ ಹವಾನಿಯಂತ್ರಿತ ಬಸ್‌ಗಳು ಸೇರಿದಂತೆ ಬೆಂಗಳೂರಿಗೆ ಪ್ರಯಾಣಿಸಲು ಅನುಕೂಲ ವಾಗಲು ಹೆಚ್ಚುವರಿಯಾಗಿ ಬಸ್‌ಗಳನ್ನು ನೀಡಲಾಗುತ್ತದೆ. ಜಿಲ್ಲಾ ಉತ್ಸವ ಆಚರಿಸಲು ಎಚ್‌ಕೆಆರ್‌ ಡಿಬಿಯಿಂದ ಅನುದಾನ ಪಡೆಯಲು ಪ್ರಯತ್ನಿಸಲಾಗುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.