ADVERTISEMENT

ಕನ್ನಡದಲ್ಲೂ ನೀಟ್‌ ಪರೀಕ್ಷೆ ಅವಕಾಶಕ್ಕೆ ಆಗ್ರಹ

ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಹೆದ್ದಾರಿಯಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 12 ಜನವರಿ 2017, 10:18 IST
Last Updated 12 ಜನವರಿ 2017, 10:18 IST
ಚನ್ನಪಟ್ಟಣ: ಕನ್ನಡ ಭಾಷೆಯಲ್ಲಿ ನೀಟ್ ಪರೀಕ್ಷೆ ಬರೆಯಲು ಅವಕಾಶ ನೀಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಡಾ.ಅಂಬೇಡ್ಕರ್ ಹಾಸ್ಟೆಲ್ ವಿದ್ಯಾರ್ಥಿಗಳ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಬುಧವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
 
ಪಟ್ಟಣದ ಗಾಂಧಿಭವನದಿಂದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರವು ಕನ್ನಡದಲ್ಲಿ ನೀಟ್ ಪರೀಕ್ಷೆ ಬರೆಯಲು ಅವಕಾಶ ನೀಡದೆ ಕನ್ನಡ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಕಿಡಿ ಕಾರಿದರು.
 
‘ದೇಶದಲ್ಲಿ ಅತಿ ಹೆಚ್ಚು ಕಾಲೇಜುಗಳನ್ನು ಹೊಂದಿರುವ ರಾಜ್ಯದಲ್ಲಿ 7 ಸಾವಿರಕ್ಕೂ ಹೆಚ್ಚು ವೈದ್ಯಕೀಯ ಸೀಟುಗಳು ಲಭ್ಯವಿದೆ. ಆದರೆ ಕನ್ನಡದಲ್ಲಿ ನೀಟ್ ಪರೀಕ್ಷೆ ಬರೆಯದಿದ್ದರೆ ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟು ಸಮರ್ಪಕವಾಗಿ ದೊರೆಯುವುದಿಲ್ಲ. ರಾಜ್ಯದಲ್ಲಿ ಶೇ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕನ್ನಡ ಮಾಧ್ಯಮದಲ್ಲಿ ಹತ್ತನೇ ತರಗತಿ ಪರೀಕ್ಷೆ ಬರೆಯುತ್ತಿದ್ದು, ಇವರಿಗೆ ನೀಟ್ ನೀತಿಯಿಂದ ಅನ್ಯಾಯವಾಗಲಿದೆ’ ಎಂದು ದೂರಿದರು.
 
ರಾಜ್ಯ ಸರ್ಕಾರವು ಈ ಬಗ್ಗೆ ಸರಿಯಾದ ಕ್ರಮ ವಹಿಸದ ಕಾರಣ ರಾಜ್ಯದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ರಾಜ್ಯ ಸರ್ಕಾರ ಸರಿಯಾದ ರೀತಿಯಲ್ಲಿ ಪ್ರಸ್ತಾವನೆ ಸಲ್ಲಿಸಿದ್ದರೆ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿರಲಿಲ್ಲ. ರಾಜ್ಯ ಸರ್ಕಾರ ಮಾಡಿದ ತಪ್ಪಿನಿಂದಾಗಿ ಈಗ ಕನ್ನಡದ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ ಎಂದರು.
 
ರಾಜ್ಯ ಸರ್ಕಾರ ನೀಟ್ ಪರೀಕ್ಷೆಯನ್ನು ಬಹಿಷ್ಕರಿಸಿ ರಾಜ್ಯದ ವಿದ್ಯಾರ್ಥಿಗಳ ಹಿತ ಕಾಯಬೇಕು. ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ನೂರಾರು ವಿದ್ಯಾರ್ಥಿಗಳು ಕಾಯುತ್ತಿದ್ದು ಅವರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳದಿದ್ದರೆ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
 
ಮೆರವಣಿಗೆ ನಂತರ ತಾಲ್ಲೂಕು ಕಚೇರಿ ಎದುರು ಸ್ವಲ್ಪಹೊತ್ತು ಧರಣಿ ನಡೆಸಿದ ಪ್ರತಿಭಟನಾಕಾರರು ತಹಶೀಲ್ದಾರ್‌ಗೆ ಮನವಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.