ADVERTISEMENT

ರಾಮನಗರ: ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2017, 8:47 IST
Last Updated 20 ಮಾರ್ಚ್ 2017, 8:47 IST
ರಾಮನಗರದ ಜಿಲ್ಲಾ ಪಂಚಾಯಿತಿ ಸಭಾಂಗಣ ಸಮೀಪ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಆರೋಗ್ಯ ಸಚಿವ ರಮೇಶ್‌ಕುಮಾರ್ ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು. ಸಚಿವರಾದ ಡಿ.ಕೆ. ಶಿವಕುಮಾರ್, ಶರಣಪ್ರಕಾಶ ಪಾಟೀಲ, ಸಂಸದ ಡಿ.ಕೆ. ಸುರೇಶ್‌ ಇತರರು ಇದ್ದಾರೆ
ರಾಮನಗರದ ಜಿಲ್ಲಾ ಪಂಚಾಯಿತಿ ಸಭಾಂಗಣ ಸಮೀಪ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಆರೋಗ್ಯ ಸಚಿವ ರಮೇಶ್‌ಕುಮಾರ್ ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು. ಸಚಿವರಾದ ಡಿ.ಕೆ. ಶಿವಕುಮಾರ್, ಶರಣಪ್ರಕಾಶ ಪಾಟೀಲ, ಸಂಸದ ಡಿ.ಕೆ. ಸುರೇಶ್‌ ಇತರರು ಇದ್ದಾರೆ   

ರಾಮನಗರ: ಜಿಲ್ಲಾ ಪಂಚಾಯಿತಿ ಭವನದ ಪಕ್ಕದಲ್ಲಿನ ಜಾಗದಲ್ಲಿ ₹70 ಕೋಟಿ ವೆಚ್ಚದಲ್ಲಿ ಜಿಲ್ಲಾ ಆಸ್ಪತ್ರೆಯ ನಿರ್ಮಾಣಕ್ಕೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಲಾಯಿತು.

‘ರಾಮನಗರಕ್ಕೆ ಹೈಟೆಕ್‌ ಆಸ್ಪತ್ರೆ ಬೇಕು ಎಂಬ ಬೇಡಿಕೆಗೆ ರಾಜ್ಯ ಸರ್ಕಾರವು ಸ್ಪಂದಿಸಿದೆ. ಇಲ್ಲಿನ 5 ಎಕರೆ 20 ಗುಂಟೆ ಜಾಗದಲ್ಲಿ ಈ ಆಸ್ಪತ್ರೆ ನಿರ್ಮಾಣ ಕಾರ್ಯ ನಡೆಯಲಿದ್ದು, ಕೇವಲ ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದೆ’ ಎಂದು ಆರೋಗ್ಯ ಸಚಿವ ರಮೇಶ್‌ಕುಮಾರ್ ತಿಳಿಸಿದರು.

‘ರಾಮನಗರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ತೆರೆಯಬೇಕೆಂಬ ಬೇಡಿಕೆ ಇತ್ತು. ಆದರೆ ಇಲ್ಲಿ ಆರೋಗ್ಯ ವಿ.ವಿ. ಕ್ಯಾಂಪಸ್ ನಿರ್ಮಾಣ ವಾಗುವ ಕಾರಣ ಅದು ಸಾಧ್ಯವಾಗಲಿಲ್ಲ. ಜಿಲ್ಲೆಗೆ₹ 25 ಕೋಟಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮುಖ್ಯಮಂತ್ರಿ ಮಂಜೂರು ಮಾಡಿದ್ದು, ಸಚಿವ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸ್ಥಳ ಗುರುತಿಸಲಾಗುವುದು. ಇನ್ನೆರಡು ತಿಂಗಳಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು’ ಎಂದರು.

‘ಆಸ್ಪತ್ರೆಗೆ ನೀಡಲಾಗಿರುವ ಜಾಗದಲ್ಲಿರುವ ಲೋಕೋಪಯೋಗಿ ಇಲಾಖೆಯ ವಸತಿಗೃಹಗಳ ನೆಲಸಮ ಕಾರ್ಯ 15 ದಿನದಲ್ಲಿ ಆರಂಭ ಆಗಲಿದೆ. ಕಟ್ಟಡ ನಿರ್ಮಾಣದ ಟೆಂಡರ್‌ ಸಹ ಅಂತಿಮಗೊಂಡಿದೆ’ ಎಂದು ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದರು.

ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ, ಸಂಸದ ಡಿ.ಕೆ. ಸುರೇಶ್‌, ಜಿಲ್ಲಾಧಿಕಾರಿ ಬಿ.ಆರ್. ಮಮತಾ, ನಗರಸಭೆ ಅಧ್ಯಕ್ಷ ರವಿಕುಮಾರ್, ಉಪಾಧ್ಯಕ್ಷೆ ಸಮೀನಾ ತಾಜ್, ಮಾಜಿ ಶಾಸಕ ಸಿ.ಎಂ, ಲಿಂಗಪ್ಪ ಇತರರು ಇದ್ದರು.

ಆರೋಗ್ಯ ಕೇಂದ್ರ ಉದ್ಘಾಟನೆ: ಯಾರಬ್‌ ನಗರದಲ್ಲಿ ನಿರ್ಮಿಸಲಾದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಆರೋಗ್ಯ ಸಚಿವ ರಮೇಶ್‌ಕುಮಾರ್ ಭಾನುವಾರ ಉದ್ಘಾಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.