ADVERTISEMENT

ಕಾಂಗ್ರೆಸ್‌ ಸರ್ಕಾರದ ಆಡಳಿತದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ

ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟೀಕೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2018, 11:29 IST
Last Updated 20 ಮಾರ್ಚ್ 2018, 11:29 IST

ಶಿಕಾರಿಪುರ: ‘ಕಾಂಗ್ರೆಸ್‌ ಸರ್ಕಾರದ ಆಡಳಿತದಲ್ಲಿ ರಾಜ್ಯದ ರೈತರು ಹಲವು ಸಂಕಷ್ಟಗಳನ್ನು ಅನುಭವಿಸುತ್ತಿದ್ದಾರೆ’ ಎಂದು ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆರೋಪಿಸಿದರು.

ತಾಲ್ಲೂಕಿನ ಚನ್ನಳ್ಳಿ, ನೆಲವಾಗಿಲು, ಹಳೆಗೊದ್ದನಕೊಪ್ಪ, ಮುಗಳಗೇರಿ ಗ್ರಾಮಗಳಲ್ಲಿ ಭಾನುವಾರ ಬಿಜೆಪಿ ಆಯೋಜಿಸಿದ್ದ ಚುನಾವಣಾ ಪೂರ್ವ ಪ್ರಚಾರ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

‘ರೈತರ ಹಾಗೂ ಜನಸಾಮಾನ್ಯರ ಕಷ್ಟಗಳಿಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೆಕ್ಕೆಜೋಳ ಕ್ವಿಂಟಲ್‌ಗೆ ₹1,425 ಬೆಂಬಲ ಬೆಲೆ ಘೋಷಣೆ ಮಾಡಿದರೂ ರಾಜ್ಯ ಸರ್ಕಾರ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸುವ ಪ್ರಯತ್ನ ಮಾಡಲಿಲ್ಲ’ ಎಂದು ಟೀಕಿಸಿದರು.

ADVERTISEMENT

‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ನಡೆಸಲಿದ್ದು, ನಾನು ಮುಖ್ಯಮಂತ್ರಿ ಆಗಲಿದ್ದೇನೆ. ರೈತರು ಬೆಳೆದ ಬೆಳೆಗೆ ಬೆಂಬಲಬೆಲೆ ನೀಡಲು ಹಣ ಮೀಸಲಿಡುತ್ತೇನೆ. ಪ್ರಧಾನಿ ಮೋದಿ ಅವರಿಂದ ನೀರಾವರಿ ಯೋಜನೆಗೆ₹ 1ಲಕ್ಷ ಕೋಟಿ ಅನುದಾನ ತರುತ್ತೇನೆ. ತಾಲ್ಲೂಕಿನಲ್ಲಿ ಸಮರ್ಪಕ ನೀರಾವರಿ ಯೋಜನೆ ಅನುಷ್ಠಾನಗೊಳಿಸುತ್ತೇನೆ ಎಂದು ಭರವಸೆ ನೀಡಿದರು.

"ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ ನನ್ನ ಮೇಲಿನ ಪ್ರೀತಿಯಿಂದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಪಕ್ಷ ಸಂಘಟಿಸುವ ಹಿನ್ನೆಲೆಯಲ್ಲಿ ಚುನಾವಣೆ ಸಂದರ್ಭದಲ್ಲಿ ಶಿಕಾರಿಪುರದಲ್ಲಿ ಹೆಚ್ಚು ಸಮಯ ಇರಲಾಗುವುದಿಲ್ಲ. ಮತದಾರರು ಬೆಂಬಲ ನೀಡಬೇಕು’ ಎಂದು ಮನವಿ ಮಾಡಿದರು.

ಶಾಸಕ ಬಿ.ವೈ.ರಾಘವೇಂದ್ರ ಮಾತನಾಡಿ, ‘ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದಾರೆ. ಎಲ್ಲಾ ವರ್ಗದ ಜನರ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ನೀಡಿದ್ದಾರೆ. ಹಿಂದುಳಿದ ಶಿಕಾರಿಪುರವನ್ನು ಮಾದರಿ ತಾಲ್ಲೂಕು ಮಾಡುವ ನಿಟ್ಟಿನಲ್ಲಿ ಶ್ರಮಿಸಿದ್ದಾರೆ’ ಎಂದು ಶ್ಲಾಘಿಸಿದರು.

ಬಿಜೆಪಿ ಮುಖಂಡರಾದ ಕೆ.ಎಸ್‌. ಗುರುಮೂರ್ತಿ, ಕೆ.ಹಾಲಪ್ಪ, ರೇವಣಪ್ಪ, ಅಗಡಿ ಅಶೋಕ್‌, ಜೆ.ಸುಕೇಂದ್ರಪ್ಪ, ನಾಗರಾಜಗೌಡ್ರು, ಕೆ.ಪಿ. ಮಂಜುನಾಥ್, ನಿಂಬೆಗೊಂದಿ ಸಿದ್ದಲಿಂಗಪ್ಪ, ಬಿ.ಡಿ.ಭೂಕಾಂತ್, ರುದ್ರಮುನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.