ADVERTISEMENT

ಭದ್ರಾವತಿಯಲ್ಲಿ ಕೆಎಸ್‌ಆರ್‌ಟಿಸಿ ನೀರಿನ ಘಟಕ

ಬೆಂಗಳೂರು ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2017, 5:24 IST
Last Updated 9 ಮಾರ್ಚ್ 2017, 5:24 IST
ಬೆಂಗಳೂರು: ‘ರೈಲ್ ನೀರ್‌’ ಮಾದರಿಯಲ್ಲಿ ಕೆಎಸ್‌ಆರ್‌ಟಿಸಿ (ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ) ನೀರಿನ ಬಾಟಲಿ ತಯಾರಿಕಾ ಘಟಕ ಸ್ಥಾಪಿಸಲು ಭದ್ರಾವತಿ ಬಳಿ ಜಾಗ ಗುರುತಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
 
ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಭದ್ರಾವತಿ ಬಳಿ ನದಿ ಪಕ್ಕದಲ್ಲೆ ಜಾಗ ಗುರುತಿಸಲಾಗಿದೆ. ಅಲ್ಲಿ ಘಟಕ ತೆರೆದು  ನದಿ ನೀರು ಬಳಸಿಕೊಂಡು ಶುದ್ಧ ಕುಡಿಯುವ ನೀರಿನ ಬಾಟಲಿ ಘಟಕ ಸ್ಥಾಪಿಸಲಾಗುತ್ತದೆ ಎಂದರು.
 
ನಿಗಮದ ಐಷಾರಾಮಿ ಬಸ್‌ಗಳಲ್ಲಿ ನೀರಿನ ಬಾಟಲಿ ನೀಡುವುದನ್ನು ನಿಲ್ಲಿಸಲಾಗಿದೆ. ಖಾಸಗಿ ಬಸ್‌ಗಳಲ್ಲೂ ಈ ವ್ಯವಸ್ಥೆ ಇಲ್ಲ. ಇದರಿಂದ ನಿಗಮಕ್ಕೆ ವರ್ಷಕ್ಕೆ ₹ 6.50 ಕೋಟಿ ಉಳಿತಾಯ ಆಗಲಿದೆ ಎಂದರು.
 
ಬಸ್‌ ಮತ್ತು  ನಿಲ್ದಾಣಗಳಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆಗೆ  ನಿರ್ಭಯ ಯೋಜನೆಯಡಿ ಕೇಳಿದ್ದ ನೆರವು ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಬಸ್‌ ನಿಲ್ದಾಣಗಳಲ್ಲಿ ನಿಗಮದ ಹಣದಲ್ಲಿ ಸಿ.ಸಿಟಿ.ವಿ ಕ್ಯಾಮೆರಾ ಅಳವಡಿಸಲಾಗುತ್ತಿದೆ ಎಂದು ಹೇಳಿದರು.
 
ರಾಜಕೀಯ ಕ್ಷೇತ್ರ ಹೊರತುಪಡಿಸಿ ಉಳಿದೆಡೆ ಮಹಿಳೆಯರು ಪುರುಷರಿಗೆ ಸಮಾನವಾಗಿ ಕೆಲಸ ಮಾಡುತ್ತಿದ್ದಾರೆ. ರಾಜೀವ್ ಗಾಂಧಿ ಅವರು ಪ್ರಧಾನಿ ಆಗಿದ್ದಾಗ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ  ಶೇ 33ರಷ್ಟು ಮೀಸಲಾತಿ ನೀಡಿದ್ದರು. ಈಗ ಅದು ಶೇ 50ಕ್ಕೆ ಏರಿಕೆಯಾಗಿದೆ ಎಂದರು.
 
ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದ ಮೊದಲ ಸರ್ಕಾರಿ ಸ್ವಾಮ್ಯದ ಸಂಸ್ಥೆ ಕೆಎಸ್‌ಆರ್‌ಟಿಸಿ, ಇಲ್ಲಿ 2,500 ಮಹಿಳಾ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರಿಗೆ ಎಲ್ಲ ರೀತಿಯ ಅವರು ಸುರಕ್ಷತೆಯನ್ನು ನಿಗಮ ನೀಡಿದೆ ಎಂದು ಹೇಳಿದರು.
 
ಮಹಿಳಾ ದಿನಾಚರಣೆ ಅಂಗವಾಗಿ ನಿಗಮದಿಂದ 34 ಮಹಿಳಾ ಸಿಬ್ಬಂದಿಗೆ ಪ್ರಶಸ್ತಿ ನೀಡಲಾಯಿತು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದೆ ಸುಕ್ರಿ ಬೊಮ್ಮುಗೌಡ ಅವರನ್ನು ಅಭಿನಂದಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.