ADVERTISEMENT

ದ್ವಿತೀಯ ಪಿಯು ಪರೀಕ್ಷಾ ಕೇಂದ್ರಗಳಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಕೆ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2018, 7:00 IST
Last Updated 9 ಫೆಬ್ರುವರಿ 2018, 7:00 IST

ಸಾಗರ: ಇದೇ ಮೊದಲ ಬಾರಿಗೆ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುತ್ತಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಟಿ.ಗಂಗಾಧರಪ್ಪ ಹೇಳಿದರು.

ಇಲ್ಲಿನ ಸರ್ಕಾರಿ ಸ್ವತಂತ್ರ ಪದವಿಪೂರ್ವ ಬಾಲಕಿಯರ ಕಾಲೇಜಿಗೆ ಗುರುವಾರ ಭೇಟಿ ನೀಡಿದ್ದ ಸಂದರ್ಭದಲ್ಲಿ ತಾಲ್ಲೂಕು ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ ನೀಡಿದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ದ್ವಿತೀಯ ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆಯನ್ನು ತರುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪರೀಕ್ಷಾ ಕೇಂದ್ರಗಳಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸುವುದರಿಂದ ವಿದ್ಯಾರ್ಥಿಗಳು ನಕಲು ಮಾಡುವ ಅಥವಾ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ನೆರವು ನೀಡುವುದಕ್ಕೆ ಕಡಿವಾಣ ಬೀಳುತ್ತದೆ ಎಂದರು.

ADVERTISEMENT

ಶಿವಮೊಗ್ಗ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ 33 ಪರೀಕ್ಷಾ ಕೇಂದ್ರಗಳನ್ನು ಸಿದ್ಧಗೊಳಿಸಲಾಗಿದೆ. ಈ ಪೈಕಿ 19 ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ 14 ಖಾಸಗಿ ಕಾಲೇಜುಗಳು. ರಾಜ್ಯ ಹಾಗೂ ಜಿಲ್ಲಾಮಟ್ಟದ ತನಿಖಾ ತಂಡಗಳು ಪರೀಕ್ಷೆ ಸಂದರ್ಭದಲ್ಲಿ ಕೇಂದ್ರಗಳಿಗೆ ದಿಢೀರ್‌ ಭೇಟಿ ನೀಡಿ, ತಪಾಸಣೆ ನಡೆಸಲಿವೆ ಎಂದು ಹೇಳಿದರು.

ಕಳೆದ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಶಿವಮೊಗ್ಗ ಜಿಲ್ಲೆ ರಾಜ್ಯಕ್ಕೆ 6ನೇ ಸ್ಥಾನ ಪಡೆದಿತ್ತು. ಈ ವರ್ಷ ಫಲಿತಾಂಶವನ್ನು ಮತ್ತಷ್ಟು ಉತ್ತಮಗೊಳಿಸುವ ನಿಟ್ಟಿನಲ್ಲಿ ಹಲವು ರೀತಿಯ ಮುಂಜಾಗ್ರತೆ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗದಂತೆ ರಾಜ್ಯ ಹಾಗೂ ಜಿಲ್ಲಾಮಟ್ಟದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದರು.
ತಾಲ್ಲೂಕು ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಡಿ.ಗಣಪತಪ್ಪ, ಉಪಾಧ್ಯಕ್ಷ ಚಂದ್ರಶೇಖರ್‌, ಖಜಾಂಚಿ ಮಂಜಪ್ಪ, ಕಾಲೇಜಿನ ಪ್ರಭಾರ ಪ್ರಾಂಶುಪಾಲ ಲೋಕೇಶ್, ಉಪನ್ಯಾಸಕರಾದ ಕೆ.ಚಿದಂಬರ, ಬಸವರಾಜ್‌, ಜಗದೀಶ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.