ADVERTISEMENT

ಸೂಕ್ಷ್ಮ ಪ್ರದೇಶದಲ್ಲಿ ಕ್ರಷರ್‌ಗೆ ಅನುಮತಿ ಇಲ್ಲ

ಜಿಲ್ಲಾಧಿಕಾರಿ ಎಂ. ಲೋಕೇಶ್

​ಪ್ರಜಾವಾಣಿ ವಾರ್ತೆ
Published 5 ಜುಲೈ 2018, 15:56 IST
Last Updated 5 ಜುಲೈ 2018, 15:56 IST

ಶಿವಮೊಗ್ಗ:ಪಶ್ಚಿಮಘಟ್ಟ ವ್ಯಾಪ್ತಿ, ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ ಜಲ್ಲಿ ಕ್ರಷರ್‌ ಘಟಕ ಸ್ಥಾಪಿಸಲು ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಎಂ. ಲೋಕೇಶ್ ಖಚಿತಪಡಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮರಳು ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಬೇರೆ ಭಾಗಗಳಲ್ಲಿ ಕ್ರಷರ್ ಆರಂಭಿಸಲು ಅನುಮತಿ ಕೋರಿದರೆ ಅಧಿಕಾರಿಗಳು ಸಮೀಕ್ಷೆ ನಡೆಸಿ ನಿರಾಕ್ಷೇಪಣಾ ಪತ್ರ ಸಲ್ಲಿಸಿದ ನಂತರ ಪರವಾನಗಿ ನೀಡಲಾಗುವುದು. ಈಗಾಗಲೇ ಇರುವ ಕ್ರಷರ್‌ಗಳ ಪರವಾನಗಿ ನವೀಕರಣಕ್ಕಾಗಿ ಸಲ್ಲಿಸಿರುವ ಅರ್ಜಿಗಳ ಪ್ರಸ್ತಾವ ಸರ್ಕಾರಕ್ಕೆ ಕಳುಹಿಸುವಂತೆ ಸೂಚಿಸಿದರು.

ಪಾರದರ್ಶಕ ಮರಳು ವಿತರಣೆ:ಸಾರ್ವಜನಿಕರಿಗೆ ಪಾರದರ್ಶಕವಾಗಿ ಮರಳು ಒದಗಿಸಲು ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು. ಎರಡನೇ ಹಂತದ ಸಾಮಾನ್ಯ ಮರಳು ಇ ಹರಾಜು ಪ್ರಕ್ರಿಯೆಯಲ್ಲಿ 23ಮರಳು ಬ್ಲಾಕ್‌ಗಳ ಹರಾಜು ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ತಾಲ್ಲೂಕುಮಟ್ಟದಲ್ಲಿ ಸಾರ್ವಜನಿಕರು ಅರ್ಜಿ ಸಲ್ಲಿಸಿ ಮರಳು ಪಡೆಯಲು ವ್ಯವಸ್ಥೆ ಮಾಡಲಾಗುತ್ತಿದೆ. ಅದಕ್ಕಾಗಿ ಪ್ರತ್ಯೇಕ ಸಾಫ್ಟ್‌ವೇರ್ ಸಿದ್ಧವಿದೆ. ತಾಲ್ಲೂಕು ಕಚೇರಿಯಲ್ಲಿ ಅರ್ಜಿ ಸಲ್ಲಿಸುವ ವಿಧಾನ, ಮರಳಿನ ದರ, ಲಾರಿ ಬಾಡಿಗೆ ಇತ್ಯಾದಿ ಮಾಹಿತಿ ಒಳಗೊಂಡ ಫಲಕಗಳನ್ನು ಒಂದು ವಾರದ ಒಳಗಾಗಿ ಅಳವಡಿಸಬೇಕು. ಸಾರ್ವಜನಿಕರು ಯಾವುದೇ ಮರಳಿಗಾಗಿ ಅರ್ಜಿ ಸಲ್ಲಿಸಬಹುದು ಎಂದರು.

ADVERTISEMENT

ಅರ್ಜಿ ಸಲ್ಲಿಸಿದ ತಕ್ಷಣ ಮರಳು ಸರಬರಾಜು ದಿನ, ಇತ್ಯಾದಿ ಮಾಹಿತಿಯ ಸಂದೇಶ ಅರ್ಜಿದಾರನ ಮೊಬೈಲ್‌ಗೆ ಬರಲಿದೆ. ಮೊದಲು ಬಂದವರಿಗೆ ಮೊದಲ ಆದ್ಯತೆ. ಮರಳಿಗೆ ವೈಜ್ಞಾನಿಕ ದರ ನಿಗದಿ ಮಾಡಿ ಪಾರದರ್ಶಕವಾಗಿ ದೊರಕಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಅನಧಿಕೃತ ಮರಳು ಸಾಗಣೆ ತಡೆಯಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ತಾಲ್ಲೂಕು ಮಟ್ಟದಲ್ಲಿ ನಿಯಮಿತವಾಗಿ ಮರಳು ಉಸ್ತುವಾರಿ ಸಮಿತಿ ಸಭೆ ನಡೆಸಬೇಕು. ಉಪ ವಿಭಾಗಧಿಕಾರಿಗಳು ಕ್ರಮ ಕೈಗೊಂಡು, ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ರಾಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ ಖರೆ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ, ಉಪ ವಿಭಾಗಧಿಕಾರಿ ದಾಸೇಗೌಡ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.