ADVERTISEMENT

ಅಧಿಕಾರ ಬಂದರೆ ರೈತರ ಸಾಲ ಮನ್ನಾ

​ಪ್ರಜಾವಾಣಿ ವಾರ್ತೆ
Published 17 ಮೇ 2017, 4:44 IST
Last Updated 17 ಮೇ 2017, 4:44 IST

ಪಾವಗಡ: ‘ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ 24 ಗಂಟೆ ಒಳಗೆ ರಾಷ್ಟ್ರೀಕೃತ ಹಾಗೂ ಸಹಕಾರ ಸಂಘಗಳಲ್ಲಿ ರೈತರು ಪಡೆದಿರುವ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುವುದು’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು.

ಪಟ್ಟಣದಲ್ಲಿ ಸೋಮವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿ, ‘ಸಾಲ ತೀರಿಸಲು ಸಾಧ್ಯವಾಗದೆ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಸರ್ಕಾರ ಪರಿಹಾರ ವಿತರಿಸುವ ಸೌಜನ್ಯವನ್ನೂ ತೋರುತ್ತಿಲ್ಲ’ ಎಂದು ಆರೋಪಿಸಿದರು.

‘ತಾಲ್ಲೂಕು ಕುಡಿಯುವ ನೀರು ಸೇರಿದಂತೆ ಸೌಲಭ್ಯಗಳಿಂದ ವಂಚಿತವಾಗಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ತಾಲ್ಲೂಕಿಗೆ ಭದ್ರಾ ಮೇಲ್ದಂಡೆಯಿಂದ ನೀರು ಹರಿಸುವ ಯೋಜನೆ ಅನುಷ್ಠಾನ ಮಾಡಲಾಯಿತು. ಆದರೆ ನಂತರ ಅಧಿಕಾರಕ್ಕೆ ಬಂದ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ಯೋಜನೆ ಪೂರ್ಣಗೊಳಿಸಲಿಲ್ಲ’ ಎಂದು ದೂರಿದರು.

ADVERTISEMENT

‘ತಾಲ್ಲೂಕಿಗೆ ಕೃಷ್ಣಾ ನದಿ ನೀರು ಹರಿಸಬಹುದು. ಆದರೆ ಸರ್ಕಾರಗಳ ಇಚ್ಛಾಶಕ್ತಿ ಕೊರತೆಯಿಂದ ಅದು ಸಾಧ್ಯವಾಗುತ್ತಿಲ್ಲ. ನೀರಾವರಿ ಯೋಜನೆಗೆ ₹ 42 ಸಾವಿರ ಕೋಟಿ ಖರ್ಚು ಮಾಡಲಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಪಾವಗಡದಂತಹ ಸಾಕಷ್ಟು ತಾಲ್ಲೂಕಿನ ಜನರು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ’ ಎಂದರು.

ಶಾಸಕ ಕೆ.ಎಂ. ತಿಮ್ಮರಾಯಪ್ಪ, ‘ಕೇಂದ್ರ ಮತ್ತು ರಾಜ್ಯ ಸರ್ಕಾರ ತಾಲ್ಲೂಕಿನ ಅಭಿವೃದ್ಧಿ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿವೆ’ ಎಂದರು.

ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಆರ್.ಸಿ.ಅಂಜಿನಪ್ಪ, ಶಾಸಕ ಮಲ್ಲಿಕಾರ್ಜುನ ಖೂಬಾ, ಮುಖಂಡ ಸತ್ಯನಾರಾಯಣ, ಯುವ ಘಟಕದ ಅಧ್ಯಕ್ಷ ಬೆಳ್ಳಿ ಲೋಕೇಶ್, ಎಸ್.ಟಿ.ಘಟಕದ ಅಧ್ಯಕ್ಷ ಹೊದಿಗೆರೆ ರಮೇಶ್ ಮಾತನಾಡಿದರು.

ಆತ್ಮಹತ್ಯೆ ಮಾಡಿಕೊಂಡ ತಾಲ್ಲೂಕಿನ ಕಿಲಾರ್ಲಹಳ್ಳಿ ರೈತ ರಾಜಗೋಪಾಲನಾಯ್ಕ ಅವರ ಕುಟುಂಬಕ್ಕೆ ಪರಿಹಾರ ವಿತರಿಸಲಾಯಿತು. 

ತುಮುಲ್ ನಿರ್ದೇಶಕ ಕೆ.ಆರ್.ಸುರೇಶ್, ಯುವ ಘಟಕದ ಅಧ್ಯಕ್ಷ ಮಂಜುನಾಥ  ಚೌಧರಿ, ಎಸ್.ಟಿ. ಘಟಕದ ಸಂಘಟನಾ ಕಾರ್ಯದರ್ಶಿ ಡಿ.ಬಿ. ಲೋಕೇಶ್, ಪುರಸಭೆ ಅಧ್ಯಕ್ಷೆ ಸುಮಾ ಅನಿಲ್ ಇದ್ದರು.

**

ಉದ್ಯಮಿಗಳಿಗೆ ₹ 10 ಲಕ್ಷ ಕೋಟಿ ನೆರವು ನೀಡುವ ಕೇಂದ್ರ ಸರ್ಕಾರ, ರೈತರ ಸಾಲ ಮನ್ನಾ ಮಾಡಿದರೆ ದೇಶದ ಆರ್ಥಿಕತೆಗೆ ಧಕ್ಕೆ ಎಂದು ಸುಳ್ಳು ಹೇಳುತ್ತಿದೆ.
–ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಮುಖಂಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.