ADVERTISEMENT

ಮಕ್ಕಳ ಪಾಲನಾ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ

​ಪ್ರಜಾವಾಣಿ ವಾರ್ತೆ
Published 1 ಜನವರಿ 2018, 11:55 IST
Last Updated 1 ಜನವರಿ 2018, 11:55 IST

ತುಮಕೂರು: ಪಾಲನೆ ಮತ್ತು ರಕ್ಷಣೆಯ ಅವಶ್ಯವಿರುವ ಮಕ್ಕಳಿಗೆ ಸ್ವಯಂ ಸೇವಾ ಸಂಸ್ಥೆಗಳು ನಡೆಸುತ್ತಿರುವ ಅನಾಥಾಲಯಗಳು, ಆಶ್ರಯಧಾಮಗಳಂತಹ ಸಂಸ್ಥೆಗಳನ್ನು ಬಾಲ ನ್ಯಾಯ (ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015ರ ಸೆಕ್ಷನ್ 41 (1)ರ ಅನ್ವಯ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಪಿ.ಮೋಹನ್‌ರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತೆರೆದ ತಂಗುದಾಣಗಳು, ನಿರ್ಗತಿಕ ಮಕ್ಕಳ ಕುಟೀರ, ಬಾಲ ಕಾರ್ಮಿಕರಿಗಾಗಿ ನಡೆಸುತ್ತಿರುವ ಬ್ರಿಡ್ಜ್ ಶಾಲೆಗಳು, ವಿಶೇಷ ದತ್ತು ಕೇಂದ್ರಗಳು, ಉಜ್ವಲ ಕೇಂದ್ರ, ವಿಕಲ ಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಮಾನ್ಯತೆ ಪಡೆದ ವಸತಿಯುತ ಸಂಸ್ಥೆಗಳು, ಅರ್ಹ ಸಂಸ್ಥೆಗಳು, (ಶೈಕ್ಷಣಿಕ ಸಂಸ್ಥೆಗಳ ವಸತಿ ಶಾಲೆಗಳನ್ನು ಹೊರತುಪಡಿಸಿ) ಎಲ್ಲಾ ರೀತಿಯ ಮಕ್ಕಳ ಪಾಲನಾ ಹಾಗೂ ರಕ್ಷಣಾ ಸಂಸ್ಥೆಗಳನ್ನು ನೋಂದಣಿ ಮಾಡಬೇಕಾಗಿದೆ.

ಈ ಕಾಯ್ದೆಯ ಅಡಿ ನೋಂದಣಿಯಾಗದೇ, ಮಕ್ಕಳಿಗಾಗಿ ಸಂಸ್ಥೆಗಳನ್ನು ನಡೆಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ.  ರಿಟ್ ಅರ್ಜಿ (ಕ್ರಿಮಿನಲ್) ಸಂಖ್ಯೆ: 102 ಆಫ್‌ 2007 ಗೆ ಸಂಬಂಧಪಟ್ಟಂತೆ 2017ರ ಮೇ 5ರಂದು ಸುಪ್ರೀಂ ಕೋರ್ಟ್‌  ನೀಡಿರುವ ಆದೇಶದಲ್ಲಿ ಮಕ್ಕಳ ಪಾಲನಾ ಸಂಸ್ಥೆಗಳು ಬಾಲನ್ಯಾಯ ಕಾಯ್ದೆ 2015ರ ಅಡಿಯಲ್ಲಿ ಕಡ್ಡಾಯವಾಗಿ ಡಿಸೆಂಬರ್‌ 31ರ ಒಳಗಾಗಿ ನೋಂದಣಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ADVERTISEMENT

ಇದುವರೆಗೂ ನೋಂದಣಿ ಮಾಡಿಸಿಕೊಳ್ಳದಿರುವ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳು ಈ ಕೂಡಲೇ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳನ್ನು ಸಂಪರ್ಕಿಸಿ ನಿಗದಿತ ನಮೂನೆಯನ್ನು ಪಡೆದು ಪ್ರಸ್ತಾವನೆಯನ್ನು ಸಲ್ಲಿಸಬೇಕು. ಈಗಾಗಲೇ ಬಾಲ ನ್ಯಾಯ ಕಾಯ್ದೆಯಡಿ ನೋಂದಣಿಯಾಗಿದ್ದ ಸಂಸ್ಥೆಗಳು ನೋಂದಣಿ ಅವಧಿ ಮುಗಿದಿದ್ದಲ್ಲಿ ಕೂಡಲೇ ನವೀಕರಣಕ್ಕೆ ಪ್ರಸ್ತಾವನೆ  ಸಲ್ಲಿಸಬೇಕು. ತಪ್ಪಿದ್ದಲ್ಲಿ ಸೆಕ್ಷನ್ 42 (1)ರ ಅನ್ವಯ ಒಂದು ವರ್ಷದವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಅಥವಾ  ₹ 1 ಲಕ್ಷಕ್ಕೆ ಕಡಿಮೆ ಇಲ್ಲದಂತೆ ದಂಡ ವಿಧಿಸಲಾಗುವುದು.

ನೋಂದಾಯಿಸಲು ತಡಮಾಡಿದಲ್ಲಿ ಪ್ರತಿ 30 ದಿನಕ್ಕೆ ಪ್ರತ್ಯೇಕ ಅಪರಾಧ ಎಂದು ಪರಿಗಣಿಸಲಾಗುವುದು. ಹಾಗೂ ಸಂಸ್ಥೆಯು ಯಾವುದೇ ಕಾಯ್ದೆಯಡಿ ನೋಂದಣಿಯಾಗಿದ್ದರೂ ಅದನ್ನು ಹಿಂಪಡೆಯಲು ಅಥವಾ ರದ್ದುಪಡಿಸಲು ಕ್ರಮ ಜರುಗಿಸಲಾಗುವುದು. ಮುಂದುವರೆದು ಒಂದು ವೇಳೆ ಮಕ್ಕಳ ಮೇಲೆ ದೌರ್ಜನ್ಯ ನಡೆದಲ್ಲಿ ಹಾಗೂ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದಲ್ಲಿ ಸಂಸ್ಥೆಯ ಮುಖ್ಯಸ್ಥರನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.