ADVERTISEMENT

ಕಾರ್ಯಕರ್ತರಿಂದ ವಿಜಯೋತ್ಸವ

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2017, 5:56 IST
Last Updated 14 ಏಪ್ರಿಲ್ 2017, 5:56 IST

ಉಡುಪಿ: ಗುಂಡ್ಲುಪೇಟೆ ಮತ್ತು ನಂಜನ ಗೂಡು ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿ ಸಿದ ಪ್ರಯುಕ್ತ ಕಾಂಗ್ರೆಸ್ ಕಾರ್ಯಕರ್ತರು ನಗರದ ಸರ್ವೀಸ್ ಬಸ್ ನಿಲ್ದಾಣದ ಎದುರು ಗುರುವಾರ ವಿಜಯೋತ್ಸವ ಆಚರಿಸಿದರು. ಪಟಾಕಿ ಸಿಡಿಸಿದ ಅವರು ಪರಸ್ಪರ ಸಿಹಿ ಹಂಚಿ ಕಾಂಗ್ರೆಸ್ ಪರ ಘೋಷಣೆ ಕೂಗಿ ಸಂಭ್ರಮಿಸಿದರು.

ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ವೆರೋನಿಕ ಕರ್ನೇಲಿಯೊ ಮಾತನಾಡಿ, ‘ಉಪ ಚುನಾವಣೆ ಮುಂದಿನ ವಿಧಾನ ಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಬಿಜೆಪಿ ಮುಖಂಡರು ಹೇಳಿದ್ದರು. ಎರಡೂ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಿದ್ದು, ನಿಜಕ್ಕೂ ಈ ಫಲಿತಾಂಶ ಮುಂದಿನ ಚುನಾವಣೆಗೆ ದಿಕ್ಸೂಚಿಯಾಗಲಿದೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಾಲ್ಕು ವರ್ಷಗಳಲ್ಲಿ ಮಾಡಿದ ಜನಪರ ಕೆಲಸಗಳನ್ನು ಜನರು ಮೆಚ್ಚಿದ್ದಾರೆ ಎಂಬುದು ಈ ಫಲಿತಾಂಶದಿಂದ ಗೊತ್ತಾಗಿದೆ. ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು’ ಎಂದರು.

‘ಸಂಸದೆ ಶೋಭಾ ಕರಂದ್ಲಾಜೆ ಅವರು ತಮ್ಮ ಕ್ಷೇತ್ರದ ಅಭಿವೃದ್ಧಿ ಮಾ ಡದೆ ಕೇವಲ ಪತ್ರಿಕಾ ಹೇಳಿಕೆ ನೀಡುವ ಕೆಲಸದಲ್ಲಿ ತೊಡಗಿದ್ದಾರೆ. ದೇಶದ ಅಭಿ ವೃದ್ಧಿಯ ಬಗ್ಗೆ ಮಾತನಾಡುವ ಅವರು ಮೊದಲು ತಮ್ಮ ಕ್ಷೇತ್ರದ ಅಭಿವೃದ್ಧಿ ಮಾಡಲಿ’ ಎಂದು ವ್ಯಂಗ್ಯವಾಡಿದರು.

ಉಡುಪಿ ನಗರಾಭಿವೃದ್ಧಿ ಪ್ರಾಧಿ ಕಾರದ ಅಧ್ಯಕ್ಷ ಬಿ. ನರಸಿಂಹಮೂರ್ತಿ ಮಾತನಾಡಿ, ‘ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಪರಾಭವಗೊಳ್ಳಲಿದೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡರಿಗೆ ನಂಜನಗೂಡು ಮತ್ತು ಗುಂಡ್ಲುಪೇಟೆ ಮತದಾರರು ಸೂಕ್ತ ಉತ್ತರ ನೀಡಿದ್ದಾರೆ.

ಅವರು ಕಾಂಗ್ರೆಸ್‌ ಮುಕ್ತ ರಾಜ್ಯ ಮಾಡುವುದಾಗಿ ಹೇಳುತ್ತಿದ್ದಾರೆ. ಆದರೆ, ಕಾಂಗ್ರೆಸ್ ಸರ್ಕಾರ ಹಸಿವು ಮುಕ್ತ ಕರ್ನಾಟಕ ಮಾಡಲು ಶ್ರಮಿಸುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ. ಜಿಲ್ಲೆಯಲ್ಲಿ ಸಹ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದ್ದು, ಪ್ರಮೋದ್ ಮಧ್ವರಾಜ್ ಮತ್ತೆ ಸಚಿವರಾಗುವರು’ ಎಂದರು. ಮುಖಂಡರಾದ ಹರೀಶ್ ಕಿಣಿ, ಜ್ಯೋತಿ ಹೆಬ್ಬಾರ್‌, ಸುಜಯ ಪೂಜಾರಿ, ರಮೇಶ್ ಕಾಂಚನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.