ADVERTISEMENT

ಘನತ್ಯಾಜ್ಯ ವಿಲೇವಾರಿ ನಮ್ಮ ಆದ್ಯತೆಯಾಗಲಿ

​ಪ್ರಜಾವಾಣಿ ವಾರ್ತೆ
Published 26 ಜುಲೈ 2017, 7:32 IST
Last Updated 26 ಜುಲೈ 2017, 7:32 IST

ಉಡುಪಿ: ‘ಶಿಕ್ಷಣ, ಆರೋಗ್ಯ ಸೇರಿದಂತೆ ಉಡುಪಿ ಜಿಲ್ಲೆ ಹಲವು ಕ್ಷೇತ್ರಗಳಲ್ಲಿ ಮುಂದಿದ್ದರೂ ಘನತ್ಯಾಜ್ಯ ವಿಲೇವಾರಿಯನ್ನು ಸಮರ್ಪಕ ರೀತಿಯಲ್ಲಿ ಮಾಡುವಲ್ಲಿ ಹಿಂದೆ ಬಿದ್ದಿದೆ’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಹೇಳಿದರು.

ಜಿಲ್ಲೆಯ ಎಲ್ಲ ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಹಾಗೂ ಸಿಬ್ಬಂದಿಗೆ ನಗರದಲ್ಲಿ ಮಂಗಳವಾರ ಏರ್ಪಡಿಸಿದ್ದ ಘನತ್ಯಾಜ್ಯ ವಿಲೇವಾರಿ ಕುರಿತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಘನತ್ಯಾಜ್ಯ ವಿಲೇವಾರಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಸಾಧಿಸುವ ಮೂಲಕ ಸ್ವಚ್ಛತೆ ಕಾಪಾಡಿಕೊಳ್ಳಬೇಕಿದೆ. ಈ ಕುರಿತು ಗ್ರಾಮೀಣ ಪ್ರದೇಶದ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ. ಘನತ್ಯಾಜ್ಯ ವಿಲೇವಾರಿಗೆ ಮೊದಲ ಆದ್ಯತೆ ನೀಡಬೇಕಿದೆ’ ಎಂದು ಹೇಳಿದರು.

ADVERTISEMENT

‘ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದರೂ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುವಂತಾಗಿದೆ. ಮಳೆ ನೀರನ್ನು ಸಂಗ್ರಹಿಸುವ ಮತ್ತು ಅಂತರ್ಜಲವನ್ನು ಹೆಚ್ಚಿಸುವ ಬಗ್ಗೆ ಜಿಲ್ಲೆಯಾದ್ಯಂತ ಜಲಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಇಂತಹ ಕ್ರಮಗಳನ್ನು ಕೈಗೊಂಡರೆ ಮಾತ್ರ ನೀರಿನ ಸಮಸ್ಯೆಯನ್ನು ನಿವಾರಿಸಲು ಸಾಧ್ಯ ’ ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮಾತನಾಡಿ, ‘ಜಿಲ್ಲೆಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ಗಂಭೀರವಾಗಿದೆ. ಇದಕ್ಕೆ  ಅಗತ್ಯವಿರುವ ಸರ್ಕಾರಿ ಭೂಮಿಯ ಕೊರತೆ ಹಾಗೂ ಸಮರ್ಪಕ ರೀತಿಯಲ್ಲಿ ವಿಲೇವಾರಿ ಮಾಡಲು ಪರಿಣತರ ಕೊರತೆ ಇದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಈ ಕಾರ್ಯಾಗಾರ ಏರ್ಪಡಿಸಲಾಗಿದೆ. ಜಿಲ್ಲೆ ಈಗಾಗಲೇ ಬಯಲು ಶೌಚ ಮುಕ್ತ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಜಿಲ್ಲೆಯನ್ನು ತ್ಯಾಜ್ಯ ಮುಕ್ತ ಮಾದರಿ ಜಿಲ್ಲೆಯನ್ನಾಗಿ ಮಾಡುವುದು ಎಲ್ಲರ ಜವಾಬ್ದಾರಿ’ ಎಂದರು.

‘ತ್ಯಾಜ್ಯವನ್ನು ಸಂಪನ್ಮೂಲ ಎಂದು ಪರಿಗಣಿಸಿ, 2013–14ರಲ್ಲಿ ಬೆಂಗಳೂರಿನಲ್ಲಿ ನಡೆಸಿದ ಅಧ್ಯಯನ ಪ್ರಕಾರ ಅಲ್ಲಿ ಶೇಖರಣೆಯಾಗುವ ಕಸದಿಂದ ತಿಂಗಳಿಗೆ ಕನಿಷ್ಠ ₹27 ಕೋಟಿ ಅದಾಯ ಗಳಿಸಬಹುದು. ಅಷ್ಟು ಪ್ರಮಾಣದ ಆದಾಯ ಕಸದ ರೂಪದಲ್ಲಿ ವ್ಯರ್ಥವಾಗುತ್ತಿದೆ’ ಎಂದು ಸಂಪನ್ಮೂಲ ವ್ಯಕ್ತಿ ಇಂಡಿಯನ್ ಗ್ರೀನ್ ಸರ್ವಿಸ್ ವೆಲ್ಲೂರಿನ ಯೋಜನಾ ನಿರ್ದೇಶಕ ಶ್ರೀನಿವಾಸನ್ ಹೇಳಿದರು.

‘ಈಶಾನ್ಯ ಭಾರತದ ಅಸ್ಸಾಂನ ಒಂದು ಜಿಲ್ಲೆಯನ್ನು ತ್ಯಾಜ್ಯ ಮುಕ್ತ ಜಿಲ್ಲೆಯನ್ನಾಗಿ ರೂಪಿಸಲಾಗಿದೆ. ಇಡೀ ದಕ್ಷಿಣ ಭಾರತದಲ್ಲಿ ಉಡುಪಿ ಮೊದಲು ತ್ಯಾಜ್ಯ ಮುಕ್ತ ಜಿಲ್ಲೆಯಾಗಲಿದ್ದು, ಇದೇ ಆಗಸ್ಟ್ 15ರಂದು ಉಡುಪಿಯ ಕೆಲವು ಗ್ರಾಮಗಳಲ್ಲಿ ಪ್ರಾಯೋಗಿಕ ಯೋಜನೆ ಆರಂಭಿಸಲಾಗುವುದು’ ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಉಡುಪಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ, ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್‌, ಉಡುಪಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್‌, ಕುಂದಾಪುರ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಜಯಶ್ರೀ ಮೊಗವೀರ, ಕುಂದಾಪುರ ಪುರಸಭೆ ಅಧ್ಯಕ್ಷೆ ವಸಂತಿ ಸಾರಂಗ್‌, ಕಾರ್ಕಳ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮಾಲಿನಿ ಶೆಟ್ಟಿ, ಕಾಪು ಪುರಸಭೆ ಅಧ್ಯಕ್ಷೆ ಸೌಮ್ಯ,  ಕಾರ್ಕಳ ಪುರಸಭೆ ಅಧ್ಯಕ್ಷೆ ಅನಿತಾ ಅಂಚನ್‌, ಜಿಲ್ಲಾ ಪಂಚಾಯಿತಿ ಸದಸ್ಯೆ ಗೀತಾಂಜಲಿ ಸುವರ್ಣ, ಜಿಲ್ಲಾ ಪರಿಸರ ಅಧಿಕಾರಿ ಲಕ್ಷ್ಮೀಕಾಂತ್‌, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್‌ , ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್  ಇದ್ದರು.

* * 

ವಾಸ್ತವದಲ್ಲಿ ಕಸ ಎಂಬುದಿಲ್ಲ, ಸಮರ್ಪಕವಾಗಿ ಬಳಸಿದರೆ ಕಸ ಒಂದು ಸಂಪನ್ಮೂಲ. ಇದನ್ನು ಸಂಸ್ಕರಿಸಿ, ಮರುಬಳಕೆ ಮಾಡುವುದರಿಂದ ಆದಾಯವನ್ನೂ ಗಳಿಸಬಹುದು.
ಪ್ರಿಯಾಂಕ ಮೇರಿ ಫ್ರಾನ್ಸಿಸ್,
ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.