ADVERTISEMENT

ಚುನಾವಣಾ ಪ್ರಕ್ರಿಯೆ ಪ್ರಜಾಪ್ರಭುತ್ವದ ಮುಖ್ಯ ಘಟ್ಟ

ಉಡುಪಿ ಜಿಲ್ಲಾ ಸ್ವೀಪ್ ನೋಡೆಲ್ ಅಧಿಕಾರಿ ಶಿವಾನಂದ ಕಾಪಶಿ ಅಭಿಮತ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2018, 11:10 IST
Last Updated 17 ಏಪ್ರಿಲ್ 2018, 11:10 IST

ಶಿರ್ವ: ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ಪಾತ್ರ ಮಹತ್ವದ್ದಾಗಿದ್ದು, ಪ್ರತಿಯೊ ಬ್ಬರೂ ಚುನಾವಣೆಯ ಮಹತ್ವ ತಿಳಿದು ಕೊಂಡು ಮತದಾನದ ಮಾಡುವ ಮೂಲಕ ಅರ್ಹ ವ್ಯಕ್ತಿಗಳನ್ನು ಆಯ್ಕೆ ಮಾಡುವುದು ದೇಶಕ್ಕೆ ಕೊಡುವ ಬಹುದೊಡ್ಡ ಕೊಡುಗೆಯಾಗಿದೆ. ಚುನಾವಣಾ ಪ್ರಕ್ರಿಯೆ ಪ್ರಜಾಪ್ರಭುತ್ವದ ಬಹುಮುಖ್ಯ ಘಟ್ಟ ಎಂದು ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿ ರ್ವಹಣಾಧಿಕಾರಿ, ಉಡುಪಿ ಜಿಲ್ಲಾ ಸ್ವೀಪ್ ನೋಡೆಲ್ ಅಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು.

ಸೋಮವಾರ ಕಾಪು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬಂಟಕಲ್ಲು ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಸಹಭಾಗಿತ್ವದಲ್ಲಿ ವಿದ್ಯಾಲಯದ ಸಭಾಂಗಣದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ನಡೆದ ಮತದಾನದ ಜಾಗೃತಿ ಮತ್ತು ವಿವಿ ಪ್ಯಾಟ್ ಪ್ರಾತ್ಯಕ್ಷಿಕೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಾವು ಮಾಡಿದ ಅಮೂಲ್ಯ ಮತದಾನ ನಮ್ಮ ಜೀವನದ ಬೇರೆಬೇರೆ ರಂಗಗಳಲ್ಲಿ ನಮಗೆ ಅರಿವಿಲ್ಲದಂತೆ ಪ್ರಭಾವಶಾಲಿಯಾಗಿ ಹೊರಹೊಮ್ಮುತ್ತದೆ. ಅರ್ಹ ಮತದಾರರೆಲ್ಲರೂ ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸುವುದು, ಅರ್ಹವ್ಯಕ್ತಿಯನ್ನು ಆಯ್ಕೆ ಮಾಡುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು.

ADVERTISEMENT

ಉಡುಪಿ ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಮಾತನಾಡಿ, ಸುಭದ್ರ ಪ್ರಜಾ ಪ್ರಭುತ್ವಕ್ಕೆ ಸರ್ವರ ಪಾಲ್ಗೊಳ್ಳುವಿಕೆ ಧ್ಯೇಯ ವಾಕ್ಯದಂತೆ ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವಲ್ಲಿ ಹಾಡುಗಳು, ಯಕ್ಷಗಾನ, ಜಾಥಾ ವಿವಿಧ ಅಕರ್ಷಣೆಗಳೊಂದಿಗೆ ಜನಜಾಗೃತಿ ಮೂಡಿಸಲಾಗುತ್ತಿದೆ. ಚುನಾವಣೆಗಾಗಿ ನೀಡುವ ರಜೆಯನ್ನು ಇನ್ನಿತರ ಕಾರ್ಯಕ್ಕೆ ಬಳಸದೆ ಎಲ್ಲರೂ ಮತದಾನದಲ್ಲಿ ಪಾಲ್ಗೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಉಡುಪಿ ಸೋದೆ ವಾದಿರಾಜ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ರತ್ನಕುಮಾರ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ತಿರುಮಲೇಶ್ವರ ಭಟ್ ವಿದ್ಯಾರ್ಥಿ ಗಳಿಗೆ ಮತದಾನದ ಪ್ರತಿಜ್ಞಾವಿಧಿ ಬೋಧಿಸಿ ದರು. ಕಾಪು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಪ್ರಕಾಶ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ, ರಾಜ್ಯ ಸಂಪನ್ಮೂಲ ವ್ಯಕ್ತಿ ಅಶೋಕ್ ಕಾಮತ್ ಮತದಾನದ ಜಾಗೃತಿ ಕಾರ್ಯಕ್ರಮ ಮತ್ತು ವಿವಿಪ್ಯಾಟ್ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು.

ಬಿ.ಪುಂಡಲೀಕ ಮರಾಠೆ ಶಿರ್ವ ನಿರೂಪಿಸಿದರು. ಕಾಪು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಕರುಣಾಕರ ನಾಯಕ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.