ADVERTISEMENT

ಜಾನಪದ ಕಲೆಗಳಿಗೆ ಪ್ರೋತ್ಸಾಹ ಅಗತ್ಯ: ದಿನಕರ ಬಾಬು

​ಪ್ರಜಾವಾಣಿ ವಾರ್ತೆ
Published 23 ಮೇ 2017, 6:01 IST
Last Updated 23 ಮೇ 2017, 6:01 IST

ಉಡುಪಿ: ನಶಿಸಿ ಹೋಗುವ ಹಂತದಲ್ಲಿರುವ ಜಾನಪದ ಕಲೆಗಳನ್ನು ಜಾನಪದ ಕಲೆಗಳಿಗೆ ನಿರಂತರವಾಗಿ ಪ್ರೋತ್ಸಾಹಿಸುವ ಮೂಲಕ ಉಳಿಸಿ ಬೆಳೆಸಬೇಕು ಎಂದು ಉಡುಪಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಹೇಳಿದರು.

ಉಡುಪಿ ಯಕ್ಷಗಾನ ಕಲಾರಂಗವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಬ್ಯಾಂಕ್‌ ಹಾಗೂ ಬನ್ನಂಜೆ ಬಿಲ್ಲವರ ಸೇವಾ ಸಂಘದ ಸಹಭಾಗಿತ್ವದಲ್ಲಿ ನಗರದ ಬನ್ನಂಜೆ ಶಿವಗಿರಿ ಸಭಾಭವನದಲ್ಲಿ ಸೋಮವಾರ ಆಯೋಜಿಸಿದ್ದ ‘ತಾಳಮದ್ದಳೆ ಸಪ್ತಾಹ–2017’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಯಕ್ಷಗಾನ ಕಲೆಗೆ ನಿರಂತರವಾಗಿ ಪ್ರೋತ್ಸಾಹ ನೀಡುತ್ತಾ ಬಂದಿರುವ ಯಕ್ಷಗಾನ ಕಲಾರಂಗವು, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರದಲ್ಲಿಯೂ ಸಾಕಷ್ಟು ಕೆಲಸ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದೆ. ಹಾಗೆಯೇ ಮಕ್ಕಳಿಗೆ ಯಕ್ಷಗಾನವನ್ನು ಕಲಿಸಿಕೊಡುವುದರ ಜತೆಗೆ ಅದನ್ನು ಸಂಪ್ರದಾಯ ಬದ್ಧವಾಗಿ ಎಲ್ಲಿಯೂ ರಾಜಿ ಮಾಡಿಕೊಳ್ಳದೆ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುತ್ತಿದೆ ಎಂದರು. 

ADVERTISEMENT

ಬನ್ನಂಜೆ ಬಿಲ್ಲವರ ಸೇವಾ ಸಂಘದ ಅಧ್ಯಕ್ಷ ಬಿ.ಬಿ. ಪೂಜಾರಿ ಉದ್ಘಾಟಿಸಿ ಮಾತನಾಡಿದ, ‘ ಯಕ್ಷಗಾನ ಕಲೆಯನ್ನು ನಿರಂತರವಾಗಿ ಪ್ರೋತ್ಸಾಹಿಸುವ ಕಾರ್ಯವಾಗಬೇಕು’ಎಂದರು.ಯಕ್ಷಗಾನ ಕಲಾರಂಗವು ಯಕ್ಷಗಾನ ಕ್ಷೇತ್ರದಲ್ಲಿ ಮಾತ್ರವಲ್ಲದೆ, ಶೈಕ್ಷಣಿಕ ಹಾಗೂ ಸಾಮಾಜಿಕ ರಂಗದಲ್ಲಿಯೂ ತನ್ನನ್ನು ತಾನು ತೊಡಗಿಸಿಕೊಂಡು ಇತರ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜ್ಞಾನಾರ್ಜನೆಗೆ ಯಕ್ಷಗಾನ ಚಟುವಟಿಕೆಗಳು ಪೂರಕವಾಗಿವೆ ಎಂದು ಉಡುಪಿ ಸಿಂಡಿಕೇಟ್‌ ಬ್ಯಾಂಕ್‌ನ ಮಹಾಪ್ರಬಂಧಕ ಎಸ್‌.ಎಸ್‌. ಹೆಗಡೆ ಹೇಳಿದರು. ಹಂಗಾರಕಟ್ಟೆಯ ಯಕ್ಷಗಾನ ಕಲಾ ಕೇಂದ್ರದ ಕಾರ್ಯದರ್ಶಿ ವಿ. ರಾಜಶೇಖರ್‌ ಹೆಬ್ಬಾರ್‌, ಯಕ್ಷಗಾನ ಕಲಾರಂಗದ ಅಧ್ಯಕ್ಷ ಕೆ. ಗಣೇಶ್‌ ರಾವ್‌, ಉಪಾಧ್ಯಕ್ಷ ಎಸ್‌.ವಿ. ಭಟ್‌ ಉಪಸ್ಥಿತರಿದ್ದರು. ಉಪಾಧ್ಯಕ್ಷ ಗಂಗಾಧರ ರಾವ್‌ ಸ್ವಾಗತಿಸಿದರು, ಕಾರ್ಯದರ್ಶಿ ಮುರಲಿ ಕಡೆಕಾರ್‌ ನಿರೂಪಿಸಿದರು, ಜಂಟಿ ಕಾರ್ಯದರ್ಶಿ ಎಂ ನಾರಾಯಣ ಹೆಗಡೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.