ADVERTISEMENT

ದೇಶದಲ್ಲಿ ಕ್ರೀಡೆಗೆ ಕಡಿಮೆ ಮಹತ್ವ: ಸಚಿವ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2017, 8:44 IST
Last Updated 28 ಆಗಸ್ಟ್ 2017, 8:44 IST
ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕೂಟವನ್ನು ಕ್ರೀಡೆ ಮತ್ತು ಯುವಜನ ಸಬಲೀಕರಣ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಿದರು. ಪ್ರಜಾವಾಣಿ ಚಿತ್ರ
ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕೂಟವನ್ನು ಕ್ರೀಡೆ ಮತ್ತು ಯುವಜನ ಸಬಲೀಕರಣ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಿದರು. ಪ್ರಜಾವಾಣಿ ಚಿತ್ರ   

ಉಡುಪಿ: ‘ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ಕ್ರೀಡಾ ಇಲಾಖೆಗೆ ಅತ್ಯಂತ ಕಡಿಮೆ ಆದ್ಯತೆಯನ್ನು ನೀಡಲಾಗುತ್ತಿದೆ. ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಒದಗಿಸದಿದ್ದರೆ ಓಲಿಂಪಿಕ್ಸ್ ಸೇರಿದಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಕ್ರೀಡಾಪಟುಗಳು ಸಾಧನೆ ಮಾಡಲು ಸಾಧ್ಯವಿಲ್ಲ’ ಎಂದು ಕ್ರೀಡೆ ಮತ್ತು ಯುವಜನ ಸಬಲೀಕರಣ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದರು.

ಜಿಲ್ಲಾಡಳಿತ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಂಟಿ ಆಶ್ರಯದಲ್ಲಿ ಭಾನುವಾರ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಪ್ರತಿ ಕ್ರೀಡಾಪಟುಗಳಿಗೆ ನೀಡುವ ದಿನ ಭತ್ಯೆಯನ್ನು ₹75 ರಿಂದ ₹159ಗೆ ಏರಿಸಲಾಗುವುದು ಎಂದರು.. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪಿಯುಸಿ ಹಾಗೂ ಅದಕ್ಕಿಂದ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳ ಕಾಲೇಜು ಶುಲ್ಕವನ್ನು ಮರುಪಾವತಿ ಮಾಡುವ ಯೋಜನೆ ಯನ್ನು ಜಾರಿಗೆ ತರಲಾಗಿದೆ. ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಕ್ರೀಡಾ ಕೂಟದಲ್ಲಿ ಪದಕ ವಿಜೇತರಿಗೆ ಕ್ಯಾಶ್ ಎಕ್ಸಲೆಂಟ್ ಅವಾರ್ಡ್ ನೀಡಲಾಗುತ್ತದೆ ಎಂದರು.

ADVERTISEMENT

ಉಡುಪಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಜಿಲ್ಲಾ ದೈಹಿಕ ಶಿಕ್ಷಣ ಪರಿ ವೀಕ್ಷಣಾಧಿಕಾರಿ ಮಧುಕರ್ ಮುಖ್ಯ ಅತಿಥಿಯಾಗಿದ್ದರು. ಉಡುಪಿ ತಾಲೂಕು ಕ್ರೀಡಾಧಿಕಾರಿ ನಾರಾಯಣ ರಾವ್, ಕಾರ್ಕಳ ಕ್ರೀಡಾಧಿಕಾರಿ ಫೆಡ್ರಿಕ್ ರೆಬೆಲ್ಲೊ, ಕುಂದಾಪುರ ಕ್ರೀಡಾಧಿಕಾರಿ ಕುಸುಮಾಕರ್ ಶೆಟ್ಟಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾಪಂಚಾ ಯಿತಿ ಮತ್ತು ಅಧ್ಯಕ್ಷರ ನಿಧಿಯಿಂದ ಬಿಡುಗಡೆ ಮಾಡಿದ ₹8ಲಕ್ಷ ಅನುದಾನದಲ್ಲಿ ಅಜ್ಜರಕಾಡಿನಲ್ಲಿ ನೂತನವಾಗಿ ನಿರ್ಮಿಸಿದ ಶೌಚಾಲ ಯವನ್ನು ಕ್ರೀಡೆ ಮತ್ತು ಯುವಜನ ಸಬಲೀಕರಣ ಸಚಿವ ಪ್ರಮೋದ್ ಉದ್ಘಾಟಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.