ADVERTISEMENT

ನಿರುಪಯುಕ್ತ ಕೊಳವೆಬಾವಿ ಮುಚ್ಚಲು ಸೂಚನೆ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2017, 7:05 IST
Last Updated 25 ಏಪ್ರಿಲ್ 2017, 7:05 IST
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಹೊರ ತಂದಿರುವ ‘ಯುವ ಸ್ಪಂದನ’ ಮಾಹಿತಿ ಪತ್ರವನ್ನು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಬಿಡುಗಡೆ ಮಾಡಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಹೊರ ತಂದಿರುವ ‘ಯುವ ಸ್ಪಂದನ’ ಮಾಹಿತಿ ಪತ್ರವನ್ನು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಬಿಡುಗಡೆ ಮಾಡಿದರು.   

ಉಡುಪಿ: ‘ಜಿಲ್ಲೆಯಲ್ಲಿರುವ ನಿರುಪ ಯುಕ್ತ ಕೊಳವೆ ಬಾವಿಗಳನ್ನು ಈ ಕೂಡಲೇ ಮುಚ್ಚಬೇಕು. ಒಂದು ವೇಳೆ ಮುಚ್ಚದೆ ದುರ್ಘಟನೆಯಿಂದ ಜೀವ ಹಾನಿ ಸಂಭವಿಸಿದರೆ ಕ್ರಿಮಿನಲ್ ಮೊಕ ದ್ದಮೆ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳ ಲಾಗುವುದು’ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ‘ಸರ್ಕಾರ ಅಥವಾ ಖಾಸಗಿ ವ್ಯಕ್ತಿಗಳಿಗೆ ಸೇರಿದ ವಿಫಲವಾಗಿರುವ ಕೊಳವೆ ಬಾವಿಗಳನ್ನು ಸೂಕ್ತ ರೀತಿಯಲ್ಲಿ ಮುಚ್ಚಿ ಅದರಿಂದ ಯಾವುದೇ ರೀತಿಯ ಅಪಾಯ ಆಗದಂತೆ ಎಚ್ಚರಿಕೆ ವಹಿಸಬೇಕು. ಕೊಳವೆಬಾವಿ ಕೊರೆಯುವ ಕಂಪೆನಿಗಳು ಸಹ ಜವಾಬ್ದಾರಿಯಿಂದ ನಡೆದುಕೊಳ್ಳ ಬೇಕು. ಕೊಳವೆ ಬಾವಿಗಳ ಬಗ್ಗೆ ಸರ್ಕಾರ ವರದಿ ಕೇಳಿರುವುದರಿಂದ ಎಲ್ಲ ಪಂಚಾಯಿತಿಗಳು ಈ ಬಗ್ಗೆ ಮಾಹಿತಿ ನೀಡಬೇಕು’ ಎಂದರು.

‘ಜಿಲ್ಲೆಯಲ್ಲಿ ಈಗಾಗಲೇ 8 ಶುದ್ಧ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದ್ದು ಅವುಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ವರದಿ ನೀಡಿ. ಘಟಕ ಆರಂಭಿಸುವ ಮೊದಲು ಆ ಭಾಗದ ಜನರ ಆರೋಗ್ಯ ಹೇಗಿತ್ತು ಮತ್ತು ಈಗ ಹೇಗಿದೆ ಎಂಬುದರ ಬಗ್ಗೆ ಯೂ ವಿಸ್ತೃತ ಮಾಹಿತಿ ನೀಡಬೇಕು’ ಎಂದು ಆರೋಗ್ಯ ಇಲಾಖೆ ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ADVERTISEMENT

‘ಎಲ್ಲ ಇಲಾಖೆಗಳು ತಮ್ಮ ಕಚೇರಿಗೆ ಅಗತ್ಯವಿರುವ ಸಾಮಗ್ರಿಗಳನ್ನು ಗವರ್ನ ಮೆಂಟ್–  ಇ ಮಾರ್ಕೆಟ್ ಮೂಲಕವೇ ಖರೀದಿಸಬೇಕು. ಇಲಾಖೆಗಳಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ವೇತನದಲ್ಲಿ ಕಡ್ಡಾಯವಾಗಿ ಭವಿಷ್ಯ ನಿಧಿ ವಂತಿಗೆ ಕಡಿತ ಮಾಡುವುದು ಎಲ್ಲ ಅಧಿಕಾರಿಗಳ ಜವಾಬ್ದಾರಿ’ ಎಂದರು.

‘ಯುವ ಸ್ಪಂದನ’ ಮಾಹಿತಿ ಪತ್ರವನ್ನು ಜಿಲ್ಲಾಧಿಕಾರಿ ಬಿಡುಗಡೆ ಮಾಡಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು. ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಕಾಂತ ಪಡುಬಿದ್ರಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ಉದಯ ಎಸ್ ಕೋಟ್ಯಾನ್, ಜಿ.ಪಂ. ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.

30ರಂದು 2ನೇ ಸುತ್ತಿನ ಪಲ್ಸ್‌ ಪೋಲಿಯೊ ಕಾರ್ಯಕ್ರಮ

ಉಡುಪಿ: ‘ಜಿಲ್ಲೆಯಲ್ಲಿ ಎರಡನೇ ಸುತ್ತಿನ ಪಲ್ಸ್‌ ಪೋಲಿಯೊ ಲಸಿಕೆ ನೀಡುವ ಕಾರ್ಯಕ್ರಮ ಇದೇ 30ರಂದು ನಡೆಯಲಿದೆ’ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಹೇಳಿದರು.

ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
‘ಮೊದಲ ಸುತ್ತಿನ ಪಲ್ಸ್‌ ಪೋಲಿಯೊ ಕಾರ್ಯಕ್ರಮದಲ್ಲಿ ಶೇ 100ರಷ್ಟು ಗುರಿ ಸಾಧನೆ ಆಗಿದೆ. ಹಾಗಾಗಿ ಎರಡನೇ ಸುತ್ತಿನ ಕಾರ್ಯಕ್ರಮದಲ್ಲಿಯೂ ಯಾವುದೇ ಮಗು ಪೋಲಿಯೊ ಲಸಿಕೆ ವಂಚಿತವಾಗದಂತೆ ಕಾರ್ಯ ನಿರ್ವಹಿಸಬೇಕು ಹಾಗೂ ವಲಸೆ ಕಾರ್ಮಿಕರು ವಾಸಿಸುವ ಪ್ರದೇಶದಲ್ಲಿ ಹೆಚ್ಚಿನ ಗಮನ ಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸ್ವಯಂ ಸೇವಾ ಸಂಘಟನೆಗಳ ಕಾರ್ಯಕ್ರಮಕ್ಕೆ ಸಹಕಾರ ನೀಡುವಂತೆ ಕೋರಿದರು.

‘30ರಂದು ಬೆಳಿಗ್ಗೆ 8ಗಂಟೆಗೆ ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ’ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ರೋಹಿಣಿ ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಜಿ. ಅನುರಾಧ,  ಸ್ವಯಂ ಸೇವಾ ಸಂಘಟನೆಗಳ ಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.