ADVERTISEMENT

‘ಬಿಜೆಪಿ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸುವ ಕಾಂಗ್ರೆಸ್ ಯತ್ನ ಫಲಿಸದು’

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2017, 5:30 IST
Last Updated 3 ಮಾರ್ಚ್ 2017, 5:30 IST

ಉಡುಪಿ: ಬಿಜೆಪಿಯ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸುವ ಕಾಂಗ್ರೆಸ್‌ ಪ್ರಯತ್ನ ಸಫಲವಾಗದು ಎಂದು ಉಡುಪಿ ಜಿಲ್ಲಾ ಬಿಜೆಪಿ ವಕ್ತಾರ ಕಟಪಾಡಿ ಶಂಕರ ಪೂಜಾರಿ ಹೇಳಿದ್ದಾರೆ.

ಕಳೆದ ಲೋಕಸಭಾ ಚುನಾವಣೆ ಯಲ್ಲಿ ಆದ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್‌ ಪಕ್ಷ ಬಿಜೆಪಿ ಮೇಲೆ ಆಧಾರ ರಹಿತ ಆರೋಪ ಮಾಡುತ್ತಿದೆ. ಹೈಕಮಾಂಡ್‌ಗೆ ಕಪ್ಪ ಕಾಣಿಗೆ ಸಲ್ಲಿಸಿರುವ ಡೈರಿ ಬಹಿರಂಗವಾದ ನಂತರ ಯಾವುದೋ ಡೈರಿಯನ್ನು ಬಿಡುಗಡೆ ಮಾಡಿ ಬಿಜೆಪಿ ವಿಧಾನಪರಿಷತ್‌ ಸದಸ್ಯ ಲೆಹರ್‌ಸಿಂಗ್ ಅವರ ಡೈರಿ ಎಂದು ಸಾಬೀತು ಮಾಡಲು ಪ್ರಯತ್ನಿಸಿತು.

ಆದರೆ, ಸ್ವತಃ ಲೆಹರ್‌ಸಿಂಗ್ ಅವರೇ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರನ್ನು ಭೇಟಿ ಮಾಡಿ ಆ ಪ್ರಕರಣದ ಬಗ್ಗೆ ತನಿಖೆ ನಡೆಸಿ ಎಂದು ಮನವಿ ಮಾಡಿದ್ದಾರೆ. ಹೈಕಮಾಂಡ್‌ಗೆ ಕಪ್ಪ ಸಲ್ಲಿಸುವುದು ಕಾಂಗ್ರೆಸ್‌ನಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದ ಕೂಪವಾಗಿದ್ದು ಯಾವುದೇ ಇಲಾಖೆಗಳಲ್ಲಿ ಕೆಲಸಗಳು ಸುಸೂತ್ರವಾಗಿ ನಡೆಯುತ್ತಿಲ್ಲ. ಆಹಾರ ಮತ್ತು ನಾಗರಿಕ ಪೂರೈಕೆ, ಕಂದಾಯ, ಸಮಾಜ ಕಲ್ಯಾಣ ಇಲಾಖೆಗಳು ಸೊರಗಿ ಹೋಗಿವೆ. ಬಡ ಮಕ್ಕಳಿಗೆ ನೀಡುವ ಹಾಸಿಗೆ ದಿಂಬು ಖರೀದಿಯಲ್ಲಿಯೂ ಭಾರಿ ಭ್ರಷ್ಟಾಚಾರ ನಡೆಸಲಾಗಿದೆ. ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹಣವನ್ನು ಸರಿಯಾಗಿ ಖರ್ಚು ಮಾಡಿಲ್ಲ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಕುಡಿಯುವ ನೀರು, ಶಿಕ್ಷಣ, ಗ್ರಾಮೀಣ ಉದ್ಯೋಗ ಖಾತ್ರಿ, ಪ್ರಧಾನ ಮಂತ್ರಿ ಗ್ರಾಮ ಸಡಕ್, ಆರೋಗ್ಯ ಇಲಾಖೆಗಳಿಗೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಕೋಟ್ಯಂತರ ರೂಪಾಯಿ ಹಣ ಸಹ ಖರ್ಚಾಗಿಲ್ಲ. ರಾಜ್ಯದ ಹಣಕಾಸಿನ ಪರಿಸ್ಥಿತಿಯ ಬಗ್ಗೆ ಈ ಕೂಡಲೇ ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಹಿಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕರಾವಳಿ ಜಿಲ್ಲೆಗಳಲ್ಲಿ ಸಹ ಬರ ಆವರಿಸಿದೆ. ಮರಳು ಸಮಸ್ಯೆಯನ್ನು ಬಗೆಹರಿಸಲು ಸಹ ಯಾವುದೇ ಕ್ರಮ ಕೈಗೊಳ್ಳದ ಪರಿಣಾಮ ಬಡವರು ಕಂಗೆ ಟ್ಟು ಹೋಗಿದ್ದಾರೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.