ADVERTISEMENT

ಹಲ್ಲೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಬಿದ್ಕಲ್‌ಕಟ್ಟೆ; ಗ್ರಾಮ ಪಂಚಾಯಿತಿ ಸಭೆಯಲ್ಲಿ ಹಲ್ಲೆ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2016, 7:26 IST
Last Updated 29 ಸೆಪ್ಟೆಂಬರ್ 2016, 7:26 IST
ಕುಂದಾಪುರ ತಾಲ್ಲೂಕಿನ ಬಿದ್ಕಲ್‌ಕಟ್ಟೆಯಲ್ಲಿ ಮಂಗಳವಾರ ನಡೆದ ಮೊಳಹಳ್ಳಿ ಗ್ರಾಮ ಪಂಚಾಯಿತಿ ಸಭೆಯಲ್ಲಿ ಅಧ್ಯಕ್ಷ ಉದಯ್‌ಕುಲಾಲ್‌ ಅವರ ಮೇಲೆ ನಡೆದಿರುವ ಹಲ್ಲೆ ಖಂಡಿಸಿ ಬಿಜೆಪಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಕುಂದಾಪುರ ತಾಲ್ಲೂಕಿನ ಬಿದ್ಕಲ್‌ಕಟ್ಟೆಯಲ್ಲಿ ಮಂಗಳವಾರ ನಡೆದ ಮೊಳಹಳ್ಳಿ ಗ್ರಾಮ ಪಂಚಾಯಿತಿ ಸಭೆಯಲ್ಲಿ ಅಧ್ಯಕ್ಷ ಉದಯ್‌ಕುಲಾಲ್‌ ಅವರ ಮೇಲೆ ನಡೆದಿರುವ ಹಲ್ಲೆ ಖಂಡಿಸಿ ಬಿಜೆಪಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.   

ಕುಂದಾಪುರ: ಇಲ್ಲಿಗೆ ಸಮೀಪದ ಮೊಳ ಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದ ಗ್ರಾಮ ಪಂಚಾಯಿತಿ ವಿಶೇಷ ಸಭೆಯಲ್ಲಿ ಪಂಚಾಯಿತಿ ಅಧ್ಯಕ್ಷ ಉದಯ್‌ಕುಲಾಲ್‌ ಅವರ ಮೇಲೆ ಕಾಂಗ್ರೆಸ್‌ ಬೆಂಬಲಿತ ಸದಸ್ಯರಿಂದ ಹಲ್ಲೆ ನಡೆಸಿರುವುದನ್ನು ಖಂಡಿಸಿ ಬುಧವಾರ ಬಿದ್ಕಲ್‌ಕಟ್ಟೆಯಲ್ಲಿ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆಯಿತು.

ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅವರು ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ತನ್ನ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ. ಆದರೆ, ಮನೆ ಹಂಚಿಕೆ ಕುರಿತು ಕರೆಯಲಾದ ಮೊಳ ಹಳ್ಳಿ ಪಂಚಾಯಿತಿ ವಿಶೇಷ ಸಭೆಯಲ್ಲಿ, ತಮಗೆ ಬೇಕಾದವರಿಗೆ ಮನೆ ನೀಡ ಬೇಕು ಎನ್ನುವ ಸರ್ವಾಧಿಕಾರಿ ಧೋರಣೆ ತೋರಿದ ಕಾಂಗ್ರೆಸ್‌ ಬೆಂಬಲಿತ ಸದಸ್ಯರ ವರ್ತನೆಯನ್ನು ಪ್ರಶ್ನಿಸಿದ ಅಧ್ಯಕ್ಷರ ಮೇಲೆ ಹಲ್ಲೆ ನಡೆಸುವ ಮೂಲಕ ಪ್ರಜಾತಂತ್ರ ವ್ಯವಸ್ಥೆಯನ್ನೆ ಧಿಕ್ಕರಿಸುವ ಅವರ ವರ್ತನೆ ಖಂಡನೀಯ ಎಂದು ಹೇಳಿದರು.

ಸಭೆಯಲ್ಲಿ ಚರ್ಚೆ ನಡೆದ ವಿಷಯ ತೀರ್ಮಾನಕ್ಕೆ ಬರುವ ಮೊದಲೆ ಕಾಂಗ್ರೆಸ್‌ ಬೆಂಬಲಿತ ಸದಸ್ಯರು ಹಲ್ಲೆ ನಡೆಸಲು ಪೂರ್ವ ಯೋಜನೆ ಮಾಡಿ ಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಗ್ರಾಮ ಪಂಚಾಯಿತಿ ಕಚೇರಿ ಯಲ್ಲಿಯೇ ಗ್ರಾಮ ಪಂಚಾಯಿತಿಯ ಪ್ರಥಮ ಪ್ರಜೆಯ ಮೇಲೆ ಹಲ್ಲೆ ನಡೆಸುವ ಮೂಲಕ ಗ್ರಾಮ ರಾಜ್ಯ ಕಲ್ಪನೆಯ ಪಂಚಾಯಿತಿ ವ್ಯವಸ್ಥೆಗೆ ಕಳಂಕ ಹಚ್ಚಿ, ಕೆಟ್ಟ ಇತಿಹಾಸವನ್ನು ಸೃಷ್ಟಿಸಲು ಕಾಂಗ್ರೆಸ್‌ ಮುಂದಾಗಿರುವುದು ದುರಂತ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್‌ ಮುಖಂಡ ಬೈಕಾಡಿ ಸುಪ್ರ ಸಾದ್ ಶೆಟ್ಟಿ ಅವರು ಮಾತನಾಡಿ, ಪ್ರಜಾತಂತ್ರ ವ್ಯವಸ್ಥೆ ವಿರುದ್ಧವಾಗಿ ಅಪರಾಧ ಪ್ರಕರಣಗಳಲ್ಲಿ ತೊಡಗಿಸಿಕೊಳ್ಳುವವರ ವಿರುದ್ದ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಬೇಕು, ಈ ಪ್ರಕರಣದ ಆರೋ ಪಿಗಳ ಪರವಾಗಿ ಯಾವುದೇ ಒತ್ತಡ ಬಂದರೂ, ಹಲ್ಲೆಗೊಳಗಾದ ಉದಯ್‌ ಕುಲಾಲ್‌ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ಪ್ರಯತ್ನಿ ಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಕುಂದಾಪುರ ತಾಲ್ಲೂಕು ಪಂಚಾ ಯಿತಿ ಅಧ್ಯಕ್ಷೆ ಜಯಶ್ರೀ ಮೊಗವೀರ, ಜಿಲ್ಲಾ ಪಂಚಾಯಿತಿ ಸದಸ್ಯರುಗಳಾದ ಸುಪ್ರಿತಾ ಕುಲಾಲ್, ಶ್ರೀಲತಾ ಶೆಟ್ಟಿ, ಪ್ರತಾಪ್ ಹೆಗ್ಡೆ, ಪುರಸಭೆ ಉಪಾಧ್ಯಕ್ಷ ರಾಜೇಶ್ ಕಾವೇರಿ, ಕುಂದಾಪುರ ಕ್ಷೇತ್ರ ಬಿಜೆಪಿ ಅಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ, ಕಾರ್ಯದರ್ಶಿ ಶಂಕರ ಅಂಕದಕಟ್ಟೆ, ಜಿಲ್ಲಾ ರೈತ ಮೋರ್ಚಾಉಪಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಪ್ರಕಾಶ್ ಮೆಂಡನ್, ಯುವ ಮೋರ್ಚಾ ಅಧ್ಯಕ್ಷ ಸತೀಶ್ ಪೂಜಾರಿ ವಕ್ವಾಡಿ ಪ್ರತಿಭಟನೆ ಯಲ್ಲಿ ಇದ್ದರು.

ಬಿದ್ಕಲ್ಕಟ್ಟೆ ಹಾಗೂ ಮೊಳಹಳ್ಳಿ ಪ್ರದೇಶದ ಬಹುತೇಕ ಅಂಗಡಿ ಮುಂಗಟ್ಟು  ಮುಚ್ಚಿ ಹಲ್ಲೆ ವಿರುದ್ದ ನಡೆದ ಪ್ರತಿಭಟನೆಗೆ ಬೆಂಬಲ ಸೂಚಿಸಲಾಗಿತ್ತು. ಬಿದ್ಕಲ್‌ಕಟ್ಟೆ ಹಾಗೂ ಮೊಳಹಳ್ಳಿ ಪ್ರದೇಶ ಗಳಲ್ಲಿ ಕೋಟ ಠಾಣಾಧಿಕಾರಿ ಕಬ್ಬಾಳ್‌ ರಾಜ್‌ ನೇತೃತ್ವದಲ್ಲಿ ಬೀಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.