ADVERTISEMENT

ಕರ್ತವ್ಯಲೋಪ ಕಂಡು ಬಂದರೆ ಅಮಾನತ್ತು ಶಿಕ್ಷೆ

ಜಿ. ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸುಂದರೇಶಬಾಬು

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2018, 10:35 IST
Last Updated 20 ಏಪ್ರಿಲ್ 2018, 10:35 IST

ವಿಜಯಪುರ: ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ವಿವಿಧ ಕೊಳವೆ ಬಾವಿಗಳ ಸುಸ್ಥಿತಿ ನಿರ್ವಹಣೆಯ ಜವಾಬ್ದಾರಿ ಆಯಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪಿಡಿಒ ಗಳದ್ದಾಗಿದ್ದು, ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಕರ್ತವ್ಯಲೋಪ ಕಂಡು ಬಂದಲ್ಲಿ ಅಮಾನತಿನಂತಹ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಸುಂದರೇಶ ಬಾಬು ಎಚ್ಚರಿಕೆ ನೀಡಿದರು.

ನಗರದ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಗುರುವಾರ ನಡೆದ ಕುಡಿಯುವ ನೀರಿನ ನಿರ್ವಹಣೆ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಜೂನ್ ಅಂತ್ಯದವರೆಗೆ ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

ತಾಲ್ಲೂಕಿನಲ್ಲಿ ಸ್ಥಾಪಿಸಲಾಗಿರುವ ಪ್ರತಿಯೊಂದು ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಒಬ್ಬ ವಾಟರ್ ಮ್ಯಾನ್ ನಿಯೋಜಿಸಿಕೊಳ್ಳಬೇಕು. ನೀರಿನ ಘಟಕ ಸಮರ್ಪಕವಾಗಿ ನಡೆಯುತ್ತಿರುವ ಜೊತೆಗೆ ಯಾವುದೇ ರೀತಿಯ ದುರಸ್ತಿ ಬಂದಲ್ಲಿ ತಕ್ಷಣ ದುರಸ್ಥಿ ಕೈಗೊಳ್ಳಬೇಕು. ಜಲಸಂಪನ್ಮೂಲ ಕೊರತೆ ಇದ್ದಲ್ಲಿ ಪರ್ಯಾಯ ಮಾರ್ಗದಿಂದ ನೀರನ್ನು ಪೂರೈಸಬೇಕು. ಇದು ಸಾಧ್ಯವಾಗದಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ADVERTISEMENT

ತಾಲ್ಲೂಕಿನ ವಿವಿಧಡೆ ಈಗಾಗಲೇ 127 ಶುದ್ಧ ಕುಡಿಯುವ ನೀರಿನ ಘಟಕಗಳ ಪೈಕಿ 119 ಘಟಕಗಳು ಕಾರ್ಯಾರಂಭವಾಗಿದ್ದು, ಬಾಕಿ ಘಟಕಗಳ ಸುಸ್ಥಿತಿ ಬಗ್ಗೆ ಪರಿಶೀಲನೆ ಕೈಗೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು. ಚುನಾವಣೆ ಕರ್ತವ್ಯದ ಜೊತೆಗೆ ಬರ ನಿರ್ವಹಣಾ ಜವಾಬ್ದಾರಿ ಸಹ ಇದ್ದು, ನಿರ್ಲಕ್ಷ್ಯ ವಹಿಸದೇ ಕಾರ್ಯನಿರ್ವಹಿಸಬೇಕು. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಏಪ್ರಿಲ್‌ನಿಂದ ಜೂನ್‌ವರೆಗೆ ಇಟ್ಟುಕೊಂಡಿರುವ ಗುರಿಯನ್ನು ತಲುಪುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ನಾಗಠಾಣ ಬಹುಹಳ್ಳಿ ಕುಡಿಯುವ ನೀರಿನ ಯೋಜನೆಯಡಿ 19 ಹಳ್ಳಿಗಳಿಗೆ ಪ್ರಥಮ ಹಂತವಾಗಿ ನೀರನ್ನು ಪೂರೈಸಲಾಗುತ್ತಿದೆ. ಮುಂದಿನ ವರ್ಷದಲ್ಲಿ ಯೋಜನೆ ಪೂರ್ಣಗೊಂಡ ನಂತರ ಇನ್ನಿತರ ಗ್ರಾಮಗಳಿಗೆ ನೀರು ಪೂರೈಸಲಾಗುವುದು ಎಂದು ತಿಳಿಸಿದರು.

ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ವಿಜಯಕುಮಾರ, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ದೇವರಮನಿ ಉಪಸ್ಥಿತರಿದ್ದರು.

**

ನರೇಗಾ ಅಡಿ ಏಪ್ರಿಲ್‌ನಿಂದ ಜೂನ್‌ವರೆಗೆ ಇಟ್ಟುಕೊಂಡಿರುವ ಗುರಿಯನ್ನು ತಲುಪ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು – ಎಂ.ಸುಂದರೇಶ ಬಾಬು, ಸಿಇಒ, ಜಿಲ್ಲಾ ಪಂಚಾಯಿತಿ.

**

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.