ADVERTISEMENT

‘ಕುಡಿವ ನೀರು: ತಿಂಗಳಾಂತ್ಯಕ್ಕೆ ಕಾಮಗಾರಿ ಪೂರ್ಣಗೊಳಿಸಿ’

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2017, 6:34 IST
Last Updated 4 ಮಾರ್ಚ್ 2017, 6:34 IST

ವಿಜಯಪುರ: ಬಹುಹಳ್ಳಿ ಕುಡಿಯುವ ನೀರಿನ ಯೋಜನೆಯ ಗುಣಮಟ್ಟದ ಕಾಮಗಾರಿ ಗಳನ್ನು ಮಾರ್ಚ್‌ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹಮ್ಮದ್‌ ಮೊಹಸಿನ್‌ ಅಧಿಕಾರಿಗಳಿಗೆ ಸೂಚಿಸಿದರು.

ತಾಲ್ಲೂಕಿನ ತಿಕೋಟಾ ಗ್ರಾಮಕ್ಕೆ ಗುರುವಾರ ಭೇಟಿ ನೀಡಿ ಬಹುಹಳ್ಳಿ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.

ಜನರಿಗೆ ಕುಡಿಯುವ ನೀರನ್ನು ಸಮ ರ್ಪಕವಾಗಿ ಪೂರೈಸಬೇಕು. ಜಾನುವಾರು ಗಳಿಗೆ ಮೇವಿನ ಕೊರತೆಯಾಗದಂತೆ ನಿಗಾವಹಿಸಬೇಕು. ತಿಕೋಟಾದಲ್ಲಿ ನಡೆಯುತ್ತಿರುವ ಬಹುಹಳ್ಳಿ ಕುಡಿಯುವ ನೀರಿನ ಯೋಜನೆ ಮತ್ತು ಕೆರೆ ಸಂಜೀವಿನಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ನಡೆಸಿ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದೂ ಸೂಚಿಸಿದರು.

ತೊಗರಿ ಬೆಳೆ ಖರೀದಿ ಸಂದರ್ಭದಲ್ಲಿ ರೈತರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದೂ ಹೇಳಿದರು. ಸೋಮದೇವರಹಟ್ಟಿ ತಾಂಡಾದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿರುವುದನ್ನು ಪರಿಶೀಲಿಸಿದ ಅವರು, ನಂತರ ತಿಕೋಟಾದಲ್ಲಿರುವ ತೊಗರಿ ಖರೀದಿ ಕೇಂದ್ರ, ಅಂಗನವಾಡಿ ಕೇಂದ್ರ, ಮಲಕನದೇವರಹಟ್ಟಿ ಗ್ರಾಮದ ಶಾಲೆಯಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು  ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.