ADVERTISEMENT

‘ಸುರಪುರದಲ್ಲಿ ಸಿಟಿ ಬಸ್‌ ಸಂಚಾರ ಶೀಘ್ರ’

​ಪ್ರಜಾವಾಣಿ ವಾರ್ತೆ
Published 5 ಮೇ 2016, 10:31 IST
Last Updated 5 ಮೇ 2016, 10:31 IST

ಸುರಪುರ: ‘ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಈಶಾನ್ಯ ಸಾರಿಗೆ ಸಂಸ್ಥೆಗೆ ₹15 ಕೋಟಿ ವೆಚ್ಚದ 76 ಹೊಸ ಬಸ್‌ಗಳನ್ನು ನೀಡುತ್ತಿದೆ. ಹೊಸ್ ಬಸ್‌ಗಳು ಬಂದ ನಂತರ ನಗರದಲ್ಲಿ ಶೀಘ್ರವೇ ಸಿಟಿ ಬಸ್ ಸಂಚಾರ ಆರಂಭಿಸಲಾಗುವುದು’ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಭೀಮಣ್ಣ ಸಾಲಿ ತಿಳಿಸಿದರು.

ನಗರದಲ್ಲಿ ನಿರ್ಮಾಣವಾಗುತ್ತಿರುವ ನೂತನ ಬಸ್ ನಿಲ್ದಾಣದ ಕಾಮಗಾರಿಯನ್ನು ಬುಧವಾರ ಪರಿಶೀಲಿಸಿ ಮಾತನಾಡಿದರು. ‘ಹೆಚ್ಕೆಆರ್‌ಡಿಬಿ ವತಿಯಿಂದ ರಸ್ತೆಗಳ ಅಭಿವೃದ್ಧಿಗೆ ₹80 ಕೋಟಿ ಅನುದಾನ ಬಿಡುಗಡೆ ಆಗಿದೆ. 76 ಹೊಸ ಬಸ್‌ಗಳು ಮತ್ತು ರಸ್ತೆ ಅಭಿವೃದ್ಧಿಯಿಂದ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸಾರಿಗೆ ಸಂಚಾರಕ್ಕೆ ಇನ್ನಷ್ಟು ಅನುಕೂಲವಾಗಲಿದೆ’ ಎಂದರು.

‘ಈಶಾನ್ಯ ವಲಯದ ಎಲ್ಲ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಸಿಸಿ ಟಿವಿ ಕ್ಯಾಮರಾ ಮತ್ತು ಶುದ್ಧ ಕುಡಿಯುವ ನೀರಿನ ಘಟಕಗಳನ್ನು  ಸ್ಥಾಪಿಸಲಾಗುತ್ತಿದೆ. ಈಗಾಗಲೇ ಇವುಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ’ ಎಂದು ತಿಳಿಸಿದರು.

‘ಸುರಪುರ ನೂತನ ಬಸ್ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು ಶೇ.50 ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಶಾಸಕ ರಾಜಾ ವೆಂಕಟಪ್ಪನಾಯಕ ಅವರ ಸಲಹೆಯಂತೆ ‘ಸುರಪುರ ಕೋಟೆ’ ಮಾದರಿಯಲ್ಲಿ ₹2 ಕೋಟಿ  ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ’ ಎಂದರು.

‘ಮೂರ್ನಾಲ್ಕು  ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ನಿರ್ಮಾಣವಾಗುತ್ತಿರುವ ನಿಲ್ದಾಣ ತೀರಾ ಚಿಕ್ಕದಾಗಿದೆ ಎಂಬ ದೂರು ಬಂದಿವೆ. ಈ ಕುರಿತಂತೆ ಸ್ಥಳೀಯ ಜನಪ್ರತಿನಿಧಿಗಳ  ಜೊತೆಗೆ ಮಾತುಕತೆ ನಡೆಸಲಾಗುವುದು. ನಿಲ್ದಾಣದ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯವಾಗಿದೆ.

ನ್ಯಾಯಾಲಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಗೆ ಬಸ್‌ ಸಂಚಾರ ಆರಂಭಿಸಲಾಗುವುದು’ ಎಂದು ನುಡಿದರು. ಸಾರಿಗೆ ಇಲಾಖೆಯ ಡಿಟಿಒ ತಿಮ್ಮಾರಡ್ಡಿ, ಶಿವಶಂಕರ, ರಂಗಪ್ಪ, ನರಸಪ್ಪ ಚಾಮನಾಳ, ಮುಖಂಡರಾದ ಜಕ್ಕಪ್ಪ ಕಟ್ಟಿಮನಿ, ಮೌನೇಶ ಬೋಯಿ ತಿಂಥಣಿ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.