ADVERTISEMENT

29 ಕೆರೆಗಳಿಗೆ ನೀರು ತುಂಬುವ ಯೋಜನೆಗೆ ಶೀಘ್ರ ಚಾಲನೆ

​ಪ್ರಜಾವಾಣಿ ವಾರ್ತೆ
Published 15 ಮೇ 2017, 5:47 IST
Last Updated 15 ಮೇ 2017, 5:47 IST
ಯಾದಗಿರಿ: ‘ಗುರುಮಠಕಲ್ ಮತಕ್ಷೇತ್ರ ದಲ್ಲಿನ 29 ಕೆರೆಗಳನ್ನು ತುಂಬಿಸುವ ಯೋಜನೆಗೆ ಶೀಘ್ರ ಟೆಂಡರ್‌ ಪ್ರಕ್ರಿಯೆ ನಡೆಯಲಿದೆ ಎಂದು ಗುರುಮಠಕಲ್ ಮತಕ್ಷೇತ್ರದ ಶಾಶ್ವತ ನೀರಾವರಿ ಹೋರಾಟ ಸಮಿತಿ ಸಾಯೀಬಣ್ಣ ಬೋರಬಂಡಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
‘ಕಳೆದ 50 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಶಾಸಕರು, ಸಂಸದರು ಮಾಡದಂತಹ ಮಹತ್ವ ಪೂರ್ಣ ಕೆಲಸವನ್ನು ಕಳೆದ ಒಂದು ವರ್ಷದ ಅವಧಿಯಲ್ಲಿ ಹುಟ್ಟಿಕೊಂಡ ಗುರುಮಠಕಲ್ ಮತಕ್ಷೇತ್ರದ ಶಾಶ್ವತ ನೀರಾವರಿ ಹೋರಾಟ ಸಮಿತಿ ಕೆರೆ ತುಂಬಿಸುವ ಯೋಜನೆ ಜಾರಿಗೆ ಹೋರಾಟ ಮಾಡಿ ಯಶಸ್ಸು ಕಂಡಿದೆ’ ಎಂದು ವಿವರಿಸಿದ್ದಾರೆ.
 
10 ವರ್ಷಗಳ ಹಿಂದೆ ಪ್ರಾರಂಭವಾದ ಸನ್ನತಿ ಏತ ನೀರಾವರಿಯ ಬಗ್ಗೆ ಪ್ರಸ್ತಾಪಿಸಿದ ಅವರು, ‘ಇಲ್ಲಿನ ನಾಯಕರು ಜನರನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ, ಹೋರಾಟ ಸಮಿತಿ ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ, ಸಂಸದರಾದ ಯಡಿಯೂರಪ್ಪ, ಅನಂತಕುಮಾರ ಸೇರಿದಂತೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಈಶ್ವರಪ್ಪ ಅವರ ಮುಖಾಂತರ ಒತ್ತಡ ತಂದು 246 ಕೆರೆಗಳಿಗೆ ನೀರು ತುಂಬುವ ಯೋಜನೆಗೆ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿತ್ತು.
 
ಅದರ ಫಲವಾಗಿ ಇಂದು ನಬಾರ್ಡ್ ₹ 93 ಕೋಟಿ ಅನುದಾನ ನೀಡಿದೆ. ಇನ್ನು ಒಂದು ವಾರದಲ್ಲಿ ಟೆಂಡರ್‌ ಪ್ರಕ್ರಿಯೆ ನಡೆಸಿ ಕಾಮಗಾರಿಗೆ ಚಾಲನೆ ನೀಡಲಾಗುವುದು’ ಎಂದು ಅವರು ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.