ADVERTISEMENT

ಎಲ್ಲ 120 ಶಾಸಕರು ನನ್ನೊಂದಿಗಿದ್ದಾರೆ

​ಪ್ರಜಾವಾಣಿ ವಾರ್ತೆ
Published 9 ಮೇ 2013, 10:23 IST
Last Updated 9 ಮೇ 2013, 10:23 IST
ಎಲ್ಲ 120 ಶಾಸಕರು ನನ್ನೊಂದಿಗಿದ್ದಾರೆ
ಎಲ್ಲ 120 ಶಾಸಕರು ನನ್ನೊಂದಿಗಿದ್ದಾರೆ   

ಬೆಂಗಳೂರು: ಬಹುಮತ ಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯುವ ಆತುರದಲ್ಲಿರುವ ಕಾಂಗ್ರೆಸ್‌ನಲ್ಲಿ ಮಖ್ಯಮಂತ್ರಿ ಹುದ್ದೆಗೆ ತೀವ್ರ ಪೈಪೋಟಿ ನಡೆದಿರುವ ನಡುವೆಯೇ ಗುರುವಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನನ್ನೊಂದಿಗೆ 120 ಶಾಸಕರಿದ್ದಾರೆ ಎಂದು ಹೇಳುವ ಮೂಲಕ ತಾವು ಪ್ರಬಲ ಅಭ್ಯರ್ಥಿ ಎನ್ನುವ ಪರೋಕ್ಷ ಸಂದೇಶವನ್ನು ಹೈಕಮಾಂಡ್‌ಗೆ ರವಾನಿಸಿದ್ದಾರೆ.

ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು `ದೆಹಲಿಯಿಂದ ಬರುವ ವಿಕ್ಷಕರು ಹೈಕಮಾಂಡ್‌ಗೆ ವರದಿ (ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಕುರಿತು) ನೀಡಲಿದ್ದು, ಅಂತಿಮ ತೀರ್ಮಾನ ಹೈಕಮಾಂಡ್ ತೆಗೆದುಕೊಳ್ಳಲಿದೆ' ಎಂದು ಹೇಳಿದರು.ಇದೇ ವೇಳೆ ಅವರು ಎಲ್ಲ 120 ಶಾಸಕರು (ವಿಧಾನಸಭೆ ಸದಸ್ಯರು) ನನ್ನೊಂದಿಗಿದ್ದಾರೆ ಎಂದು ತಿಳಿಸಿದರು. 

ಈ ನಡುವೆ ಹೈಕಮಾಂಡ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆಗಾಗಿ ಮಾಹಿತಿ ಹಾಗೂ ಪ್ರಸಾರ ಖಾತೆ ಸಚಿವೆ ಅಂಬಿಕಾ ಸೋನಿ ಅವರ ನೇತೃತ್ವದಲ್ಲಿ ವಿಕ್ಷಕರ ತಂಡವನ್ನು ರಾಜ್ಯಕ್ಕೆ ಕಳುಹಿಸಿದೆ. ಈ ತಂಡವು ಎಲ್ಲ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಿ ಹೈಕಮಾಂಡ್‌ಗೆ ನೀಡಲಿದ್ದು, ಅದರ ಆಧಾರದ ಮೇಲೆ ಹೈಕಮಾಂಡ್ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದೆ.

ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಗಳ ಪಟ್ಟಿಯಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿ.ಕೆ.ಶಿವಕುಮಾರ್ ಅವರು ಕೂಡ ಹೈಕಮಾಂಡ್ ನಿರ್ಧಾರವೇ ಅಂತಿಮ ನಿರ್ಧಾರ ಎಂದು ಹೇಳುತ್ತಿದ್ದಾರೆ. ಈ ಎಲ್ಲ ಹೇಳಿಕೆಗಳ ಹಿಂದೆ ತೆರೆಮರೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೇದರಿದ್ದು, ಮುಂದಿನ ಮುಖ್ಯಮಂತ್ರಿ ಯಾರು ಎನ್ನುವುದು ಮಾತ್ರ ರಹಸ್ಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.