ADVERTISEMENT

ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ: ಕೃಷಿ, ಶಿಕ್ಷಣ, ಸಾಮಾಜಿಕ ನ್ಯಾಯಕ್ಕೆ ಒತ್ತು

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2018, 5:48 IST
Last Updated 27 ಏಪ್ರಿಲ್ 2018, 5:48 IST
ರಾಜ್ಯ ವಿಧಾನಸಭೆ ಚುನಾವಣೆಗಾಗಿ ಪ್ರದೇಶ ಕಾಂಗ್ರೆಸ್ ಸಮಿತಿ ರೂಪಿಸಿರುವ ಚುನಾವಣಾ ಪ್ರಣಾಳಿಕೆಯನ್ನು ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿಯವರು ಮಂಗಳೂರಿನಲ್ಲಿ ಬಿಡುಗಡೆ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ರಾಜ್ಯ ವಿಧಾನಸಭೆ ಚುನಾವಣೆಗಾಗಿ ಪ್ರದೇಶ ಕಾಂಗ್ರೆಸ್ ಸಮಿತಿ ರೂಪಿಸಿರುವ ಚುನಾವಣಾ ಪ್ರಣಾಳಿಕೆಯನ್ನು ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿಯವರು ಮಂಗಳೂರಿನಲ್ಲಿ ಬಿಡುಗಡೆ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.   

ಮಂಗಳೂರು: ಕಾಂಗ್ರೆಸ್‌ನ ವಿಧಾನಸಭೆ ಚುನಾವಣಾ ಪ್ರಣಾಳಿಕೆ ಪ್ರತಿಯನ್ನು ಪಕ್ಷದ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರಿಗೆ ನೀಡುವ ಮೂಲಕ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ಬಿಡುಗಡೆ ಮಾಡಿದರು.

ಕೃಷಿ, ಶಿಕ್ಷಣ ಕ್ರೀಡೆ, ಸಾಮಾಜಿಕ ನ್ಯಾಯ, ಇಂಧನ ಸೇರಿದಂತೆ 16 ಕ್ಷೇತ್ರಗಳನ್ನು ಉಲ್ಲೇಖಿಸಿ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ.

ಕಲಬುರ್ಗಿ ವಿಭಾಗ, ಬೆಂಗಳೂರು, ಬೆಳಗಾವಿ, ಮೈಸೂರು ನಾಲ್ಕು ವಿಭಾಗಗಳನ್ನಾಗಿ ಮಾಡಿ ಆಯಾ ವಿಭಾಗದಲ್ಲಿ ಕೈಗೊಳ್ಳಲಾಗುವ ಅಭಿವೃದ್ಧಿ ಮತ್ತು ಜನಪರ ಕಾರ್ಯಕ್ರಮ, ಉದ್ಯೋಗ ಸೃಷ್ಟಿ ಸೇರಿದಂತೆ ಹಲವು ಅಂಶಗಳ ಭರವಸೆಯನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ.

ADVERTISEMENT

ಇಲ್ಲಿನ ಟಿ.ಎಂ.ಎ. ಪೈ ಸಭಾಂಗಣದಲ್ಲಿ ನಡೆಯುತ್ತಿರುವ ಸಮಾರಂಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಎಂ.ವೀರಪ್ಪ ಮೊಯಿಲಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ವೇಣುಗೋಪಾಲ್, ರಾಜ್ಯಸಭಾ ಸದಸ್ಯ  ಬಿ.ಕೆ.ಹರಿಪ್ರಸಾದ್, ಎಐಸಿಸಿ ಕಾರ್ಯದರ್ಶಿ ಪಿ.ಸಿ.ವಿಷ್ಣುನಾದನ್, ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇದ್ದರು.

ಅನಾರೋಗ್ಯದ ಕಾರಣದಿಂದ ಪೂಜಾರಿ ಹಲವು ದಿನಗಳಿಂದ ವಿಶ್ರಾಂತಿ ಪಡೆಯುತ್ತಿದ್ದಾರೆ. ಪ್ರಣಾಳಿಕೆ ಬಿಡುಗಡೆ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಾಲ್ಗೊಳ್ಳುತ್ತಿರುವುದರಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್ ಮುಖಂಡರು ಪೂಜಾರಿ ಅವರಿಗೆ ಮನವಿ ಮಾಡಿದ್ದರು. ಪೂಜಾರಿ ಸಭಾಂಗಣ ಪ್ರವೇಶಿಸುತ್ತಿದ್ದಂತೆ ಎದ್ದು ನಿಂತು ಗೌರವ ಸೂಚಿಸಿದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು, ಹಿರಿಯ ನಾಯಕನಿಗೆ ಜೈಕಾರ ಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.