ADVERTISEMENT

ಪಕ್ಷೇತರ ಅಭ್ಯರ್ಥಿಯಾಗಿ ಶಿರೂರು ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2018, 19:30 IST
Last Updated 21 ಏಪ್ರಿಲ್ 2018, 19:30 IST
ಶಿರೂರು ಮಠದ ಲಕ್ಷ್ಮೀವರತೀರ್ಥ ಸ್ವಾಮೀಜಿ ಅವರು ಉಡುಪಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಶನಿವಾರ ನಾಮಪತ್ರ ಸಲ್ಲಿಸಿದರು  –ಪ್ರಜಾವಾಣಿ ಚಿತ್ರ
ಶಿರೂರು ಮಠದ ಲಕ್ಷ್ಮೀವರತೀರ್ಥ ಸ್ವಾಮೀಜಿ ಅವರು ಉಡುಪಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಶನಿವಾರ ನಾಮಪತ್ರ ಸಲ್ಲಿಸಿದರು –ಪ್ರಜಾವಾಣಿ ಚಿತ್ರ   

ಉಡುಪಿ: ಶಿರೂರು ಮಠದ ಲಕ್ಷ್ಮೀವರತೀರ್ಥ ಸ್ವಾಮೀಜಿ ಅವರು ಉಡುಪಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಶನಿವಾರ ನಾಮಪತ್ರ ಸಲ್ಲಿಸುವ ಮೂಲಕ ಚುನಾವಣಾ ಕಣಕ್ಕೆ ಧುಮುಕಿದರು.

ಕಡಿಯಾಳಿಯ ಮಹಿಷಮರ್ದಿನಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅವರು ಅಲ್ಲಿಂದ ನೇರವಾಗಿ ಚುನಾವಣಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ‘ಬಿಜೆಪಿಯಿಂದ ಟಿಕೆಟ್ ಬಯಸಿದ್ದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರಿಗಾಗಿ ಸ್ಪರ್ಧಿಸುವ ನಿರ್ಧಾರ ಮಾಡಿದ್ದೆ. ಆದರೆ, ಪಕ್ಷ ಟಿಕೆಟ್ ನೀಡದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆ ಎದುರಿಸುತ್ತಿದ್ದೇನೆ. ಯಾವುದೇ ಕಾರಣಕ್ಕೂ ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ. ಮೋದಿ ಅವರು ನಾಮಪತ್ರ ಹಿಂಪಡೆಯುವಂತೆ ಹೇಳಿದರೆ ಮಾತ್ರ ಯೋಚಿಸಬಹುದು. ಚುನಾವಣೆಯಲ್ಲಿ ಗೆದ್ದರೆ ಮೋದಿ ಅವರನ್ನು ಬೆಂಬಲಿಸುತ್ತೇನೆ’ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಬಿಜೆಪಿ ಸದಸ್ಯರಿಗೆ ಮಾತ್ರ ಟಿಕೆಟ್ ಎಂಬ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ನಾವು ಕೂಡಾ ಬಿಜೆಪಿಯವರೇ. 40 ವರ್ಷದಿಂದ ಆ ಪಕ್ಷಕ್ಕೆ ಮತ ಹಾಕುತ್ತಿದ್ದೇನೆ, ಅಂದ ಮೇಲೆ ಬಿಜೆಪಿ ಸದಸ್ಯನಂತೆ ಅಲ್ಲವೇ’ ಎಂದು ಪ್ರಶ್ನಿಸಿದರು.

ADVERTISEMENT

‘ಹಿಂದಿನ ಚುನಾವಣೆ ಸಂದರ್ಭದಲ್ಲಿ ಯಾವುದೋ ಕಾರ್ಯಕ್ರಮಕ್ಕೆ ಹೋಗಿದ್ದಾಗ ಸಿಕ್ಕಿಬಿದ್ದು ಅಚಾನಕ್ ಆಗಿ ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದೆ. ಇದೇ 24ರಿಂದ ಪ್ರಚಾರವನ್ನು ಆರಂಭಿಸುತ್ತೇನೆ. ಉಡುಪಿ ಜನರು ಬೆಂಬಲ ನೀಡಿ ಗೆಲ್ಲಿಸುವರು ಎಂಬ ಸಂಪೂರ್ಣ ವಿಶ್ವಾಸ ಇದೆ’ ಎಂದರು.

ಬಳಲಿದ ಸ್ವಾಮೀಜಿ: ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ವೇಳೆ ಬಳಲಿದಂತೆ ಕಂಡು ಬಂದ ಅವರು ಎಳನೀರು ಕುಡಿದು ಸುಧಾರಿಸಿಕೊಂಡರು. ನಾಮಪತ್ರ ಸಲ್ಲಿಸಲು ಬಂದ ಅವರು ಸ್ವಲ್ಪ ಹೊತ್ತು ಕುಳಿತುಕೊಂಡು ವಿಶ್ರಾಂತಿ ಪಡೆದರು. ಆ ನಂತರ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದರು. ಎರಡು ದಿನ ನಿರಂತರವಾಗಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರಿಂದ ಸ್ವಲ್ಪ ಸುಸ್ತಾಗಿದೆ ಎಂದು ಸ್ವಾಮೀಜಿ ತಿಳಿಸಿದರು.

ಸ್ವಾಮೀಜಿ ಆಸ್ತಿ ವಿವರ

* ಚರಾಸ್ತಿ ಮೌಲ್ಯ

* ₹13,69,042

* ನಗದು ₹50,000, ಕೆನರಾ ಬ್ಯಾಂಕಿನಲ್ಲಿ ₹20,242

* ಕೆನರಾ ಬ್ಯಾಂಕ್, ವಿಜಯಬ್ಯಾಂಕ್ ಷೇರು ₹98,800

* ಚಿನ್ನ 400ಗ್ರಾಂ, ಬೆಲೆ: ₹12,00,000

* 2017–18ರ ಆದಾಯ: ₹23,08,129

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.