ADVERTISEMENT

ಕರ್ತವ್ಯಕ್ಕೆ ಹಾಜರಾಗಲು ವೈದ್ಯರಿಗೆ ಹೈಕೋರ್ಟ್‌ ಸೂಚನೆ

4 ಸಾವಿರ ವೈದ್ಯರ ಮುಷ್ಕರ

ಪಿಟಿಐ
Published 23 ಮಾರ್ಚ್ 2017, 19:30 IST
Last Updated 23 ಮಾರ್ಚ್ 2017, 19:30 IST
ಕರ್ತವ್ಯಕ್ಕೆ ಹಾಜರಾಗಲು ವೈದ್ಯರಿಗೆ ಹೈಕೋರ್ಟ್‌ ಸೂಚನೆ
ಕರ್ತವ್ಯಕ್ಕೆ ಹಾಜರಾಗಲು ವೈದ್ಯರಿಗೆ ಹೈಕೋರ್ಟ್‌ ಸೂಚನೆ   
ಮುಂಬೈ:  ಮುಷ್ಕರ ನಡೆಸುತ್ತಿರುವ  ವೈದ್ಯರು ಕೂಡಲೇ ಕರ್ತವ್ಯಕ್ಕೆ ಹಾಜರಾಗಬೇಕೆಂದು ಬಾಂಬೆ ಹೈಕೋರ್ಟ್‌ ಗುರುವಾರ ಹೇಳಿದೆ.
 
ಮುಖ್ಯ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರು ಮತ್ತು ನ್ಯಾಯಮೂರ್ತಿ ಜಿ.ಎಸ್‌. ಕುಲಕರ್ಣಿ ಅವರನ್ನೊಳಗೊಂಡ ಹೈಕೋರ್ಟ್‌ನ ವಿಭಾಗೀಯ ಪೀಠವು ಮುಷ್ಕರ ಕೈ ಬಿಡುವಂತೆ ವೈದ್ಯರಿಗೆ ಸೂಚಿಸಿದೆ.
 
‘ಕೆಲವು ಸಂದರ್ಭಗಳಲ್ಲಿ ವೈದ್ಯರು ಒತ್ತಡದಲ್ಲಿ ಮತ್ತು ಭಯದಲ್ಲಿ ಕೆಲಸ ನಿರ್ವಹಿಸಬೇಕಾಗಿದೆ ಎಂಬುದು ನಮ್ಮ ಗಮನಕ್ಕೂ ಬಂದಿದೆ. ಆದರೂ ವೈದ್ಯರು ಕೂಡಲೇ ತಮ್ಮ ಕರ್ತವ್ಯಕ್ಕೆ ಹಾಜರಾಗಬೇಕು’ ಎಂದು  ಮಂಜುಳಾ ಚೆಲ್ಲೂರು ಹೇಳಿದ್ದಾರೆ.
 
ಮುಷ್ಕರ ನಡೆಸುತ್ತಿರುವ ವೈದ್ಯರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಆಫಾಕ್‌ ಮಾಂಡವಿಯಾ ಎನ್ನುವವರು ಹೈಕೋರ್ಟ್‌ಗೆ ದೂರು ಸಲ್ಲಿಸಿದ್ದರು.

ವೈದ್ಯರ ಮೇಲೆ  ಹಲ್ಲೆ ಪ್ರಕರಣಗಳು ಹೆಚ್ಚುತ್ತಿದ್ದು, ಹೆಚ್ಚಿನ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿ ರಾಜ್ಯದಾದ್ಯಂತ ಸುಮಾರು  4 ಸಾವಿರ ವೈದ್ಯರು ಸೋಮವಾರದಿಂದ ಮುಷ್ಕರ ನಡೆಸುತ್ತಿದ್ದಾರೆ.
 
‘ಆಸ್ಪತ್ರೆಗಳಲ್ಲಿ ವೈದ್ಯರಿಗೆ ಸೂಕ್ತ ಭದ್ರತೆ ಒದಗಿಸಲಾಗುವುದು. ವೈದ್ಯರು ಮುಷ್ಕರ ಕೈಬಿಡಬೇಕು’ ಎಂದು ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಮನವಿ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ವೈದ್ಯರ ಮುಷ್ಕರಕ್ಕೆ ಬೆಂಬಲ ಸೂಚಿಸಿ ದೆಹಲಿಯ 40 ಸಾವಿರಕ್ಕೂ ಹೆಚ್ಚು ವೈದ್ಯರು ಗುರುವಾರ ರಜೆ ಹಾಕಿ ಪ್ರತಿಭಟಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.