ADVERTISEMENT

ಚುನಾವಣೆಗೆ ಕಾರ್ಯಕರ್ತರನ್ನು ಅಣಿಗೊಳಿಸಿ

ರಾಜ್ಯ ಕಾಂಗ್ರೆಸ್‌ ಮುಖಂಡರಿಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಸೂಚನೆ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2017, 19:30 IST
Last Updated 12 ಅಕ್ಟೋಬರ್ 2017, 19:30 IST
ಚುನಾವಣೆಗೆ ಕಾರ್ಯಕರ್ತರನ್ನು ಅಣಿಗೊಳಿಸಿ
ಚುನಾವಣೆಗೆ ಕಾರ್ಯಕರ್ತರನ್ನು ಅಣಿಗೊಳಿಸಿ   

ನವದೆಹಲಿ: ರಾಜ್ಯ ವಿಧಾನಸಭೆಗೆ ಮುಂದಿನ ವರ್ಷ ನಡೆಯಲಿರುವ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಪಕ್ಷದ ಕಾರ್ಯಕರ್ತರನ್ನು ಅಣಿಗೊಳಿಸುವಂತೆ ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ರಾಜ್ಯ ಕಾಂಗ್ರೆಸ್‌ ಮುಖಂಡರಿಗೆ ಕಿವಿಮಾತು ಹೇಳಿದರು.

ಗುರುವಾರ ಇಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌, ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌, ಲೋಕಸಭೆಯ ಕಾಂಗ್ರೆಸ್‌ ಗುಂಪಿನ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದ ನಿಯೋಗದೊಂದಿಗೆ ಚರ್ಚಿಸಿದ ಅವರು, ರಾಜ್ಯ ಸರ್ಕಾರದ ಸಾಧನೆಯನ್ನು ಜನತೆಗೆ ತಿಳಿಸಬೇಕು ಎಂದು ಸೂಚಿಸಿದರು.

‘ನನ್ನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಪಕ್ಷವು ಚುನಾವಣೆಯನ್ನು ಅವರ ನೇತೃತ್ವದಲ್ಲೇ ಎದುರಿಸಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.

ADVERTISEMENT

‘ಚುನಾವಣೆಗೆ ಸಂಬಂಧಿಸಿದ ಕಾರ್ಯತಂತ್ರ ರೂಪಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಕಳೆದ ಬಾರಿಯ ಚುನಾವಣೆಯ ವೇಳೆ ಜನತೆಗೆ ನೀಡಿರುವ ಭರವಸೆಯನ್ನು ನಮ್ಮ ಸರ್ಕಾರ ಈಡೇರಿಸಿದ್ದು, ರಾಜ್ಯದಾದ್ಯಂತ ಸಭೆ, ಸಮಾವೇಶ ಏರ್ಪಡಿಸುವ ಮೂಲಕ ಮತದಾರರಿಗೆ ಮನವರಿಕೆ ಮಾಡಲಾಗುವುದು’ ಎಂದು ಅವರು ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್, ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿ, ಸಂಸದರಾದ ಆಸ್ಕರ್ ಫರ್ನಾಂಡಿಸ್, ಬಿ.ಎನ್‌.ಚಂದ್ರಪ್ಪ, ಇಂಧನ ಸಚಿವ ಡಿ.ಕೆ. ಶಿವಕುಮಾರ್ ಸಭೆಯಲ್ಲಿ ಹಾಜರಿದ್ದರು.

ಶಾಸಕರಿಂದ ಮುಖ್ಯಮಂತ್ರಿ ಆಯ್ಕೆ

’ಕಾಂಗ್ರೆಸ್‌ ಪಕ್ಷವು ನನ್ನ ನೇತೃತ್ವದಲ್ಲೇ ಚುನಾವಣೆ ಎದುರಿಸಲಿದ್ದು, ಕಳೆದ ಬಾರಿಯ ಚುನಾವಣೆಯಲ್ಲಿ ಗೆದ್ದ ಸ್ಥಾನಗಳಿಗಿಂತಲೂ ಅಧಿಕ ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರಲಿದೆ. ಫಲಿತಾಂಶ ಬಂದ ನಂತರ ಶಾಸಕರು ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

‘ಚುನಾವಣೆಯ ಸ್ಪರ್ಧಾಕಾಂಕ್ಷಿಗಳಿಗೆ ಟಿಕೆಟ್ ಹಂಚುವುದು ವಿಳಂಬ ಆಗುವುದರಿಂದ ಗೊಂದಲ ಉಂಟಾಗುತ್ತದೆ ಎಂಬ ಅಂಶವನ್ನು ಹೈಕಮಾಂಡ್‌ ಗಮನಕ್ಕೆ ತರಲಾಗಿದೆ. ಕೊನೆಯ ಕ್ಷಣದಲ್ಲೇ ಟಿಕೆಟ್ ಹಂಚುವುದು ನಮ್ಮ ಪಕ್ಷದ ಕಾರ್ಯತಂತ್ರದ ಭಾಗವಾಗಿದೆ. ಆದರೆ, ಈ ಬಾರಿ ಆದಷ್ಟು ಮೊದಲೇ ಟಿಕೆಟ್‌ ಅಂತಿಮಗೊಳಿಸಲಾಗುವುದು’ ಎಂದು ಅವರು ಹೇಳಿದರು.

‘ಕಳೆದ ನಾಲ್ಕೂವರೆ ವರ್ಷದ ಅಧಿಕಾರದ ಅವಧಿಯಲ್ಲಿ ನಮ್ಮ ಸರ್ಕಾರ ಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ. ಆದರೆ, ಬಿಜೆಪಿ ಮುಖಂಡರು ಆಧಾರರಹಿತ ಆರೋಪ ಮಾಡುವ ಮೂಲಕ ಜನರಿಗೆ ತಪ್ಪು ಸಂದೇಶ ರವಾನಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ, ರಾಜ್ಯದ ಜನ ಪ್ರಬುದ್ಧರಾಗಿದ್ದು, ಅಂಥ ಆರೋಪಗಳನ್ನು ನಂಬುವುದಿಲ್ಲ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

‘ಚುನಾವಣೆಯಲ್ಲಿ ಗೆಲುವು ಲಭಿಸುವುದಿಲ್ಲ ಎಂಬುದು ಬಿಜೆಪಿಯವರಿಗೆ ಖಾತರಿಯಾಗಿದೆ. ಅವರು ಹತಾಶೆಗೊಳಗಾಗಿ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಜೈಲಿಗೆ ಹೋಗಿ ಬಂದಿರುವ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ, ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ಭೂತದ ಬಾಯಲ್ಲಿ ಭಗವದ್ಗೀತೆ ಎಂಬ ಗಾದೆಯನ್ನು ನೆನಪಿಸುತ್ತದೆ’ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

‘ಬಿಜೆಪಿ ಮುಖಂಡರು ನನ್ನ ಹಾಗೂ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ. ಆದರೆ, ಈ ಕುರಿತು ಯಾವುದೇ ದಾಖಲೆ ಪ್ರಸ್ತುತಪಡಿಸಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಈ ರೀತಿಯ ಆಧಾರರಹಿತ ಆರೋಪ ಮಾಡುವುದು ಸರಿಯಲ್ಲ’ ಎಂದು ಅವರು ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.